More

    ಮಾದರಿ ನೀತಿ ಸಂಹಿತೆಯಂತೆ ಕಾರ್ಯನಿರ್ವಹಿಸಲು ಡಿಸಿ ಸಲಹೆ

    ಮೈಸೂರು: ಲೋಕಸಭಾ ಚುನಾವಣೆ-2024 ಮಾದರಿ ನೀತಿ ಸಂಹಿತೆ ಜಿಲ್ಲೆಯಲ್ಲಿ ಜಾರಿಯಾಗಿದ್ದು ರಾಜಕೀಯ ಪಕ್ಷಗಳ ಮುಖಂಡರು ಚುನಾವಣಾ ನಿಯಮಾನುಸಾರ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಯೂ ಆದ ಜಿಲ್ಲಾ ಚುನಾವಣಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ರಾಜಕೀಯ ಪಕ್ಷಗಳಿಗೆ ತಿಳಿಸಿದರು.
    ಜಿಲ್ಲಾ ಪಂಚಾಯಿತಿ ಕಚೇರಿಯ ದೇವರಾಜ ಅರಸು ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಜಕೀಯ ಪಕ್ಷಗಳೊಂದಿಗೆ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಚುನಾವಣಾ ಆಯೋಗ ನೀಡುವ ಸೂಚನೆಗಳನ್ನು ಪಾಲಿಸಬೇಕು. ಈಗಿನಿಂದಲೇ ಚುನಾವಣೆಗೆ ಸಂಬಂಧಿಸಿದ ನಿಯಮ ಹಾಗೂ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು. ಖಾಸಗಿ ಮನೆ, ಗೋಡೆ ಹಾಗೂ ರಸ್ತೆ ಬದಿ, ಸ್ಥಳೀಯ ಸಂಸ್ಥೆಗಳ ಕಟ್ಟಡ ಇತ್ಯಾದಿಗಳಲ್ಲಿ ರಾಜಕೀಯ ಪಕ್ಷದ ವಿಷಯಗಳ ಕುರಿತು ಗೋಡೆಬರಹ, ಪೋಸ್ಟರ್‌ಗಳು, ಬ್ಯಾನರ್, ಕಟೌಟ್‌ಗಳನ್ನು ಹಾಕಿದರೆ ಅವುಗಳನ್ನು ತೆರವುಗೊಳಿಸಲು ಸೂಚಿಸಲಾಗಿದೆ ಎಂದರು.
    ರಾಜಕೀಯ ಪಕ್ಷಗಳ ಸಂಬಂಧ ಕಾರ್ಯಕ್ರಮ ಸಂಬಂಧ ಅಧಿಕೃತವಾಗಿ ಅನುಮತಿ ಪಡೆಯುವುದು ಕಡ್ಡಾಯ. ಒಂದು ವೇಳೆ ಅನುಮತಿ ಪಡೆಯದೆ ಕಂಡುಬಂದಲ್ಲಿ ಕ್ರಮ ಕೈಗೊಳ್ಳಲಾಗುವುದು. ಸುವಿಧಾ ಆಫ್ ಮೂಲಕ ಚುನಾವಣಾ ಪ್ರಚಾರ ಸಭೆಗಳು ಮತ್ತು ಕಾರ್ಯಕ್ರಮಗಳಿಗೆ ಸುವಿಧಾ ಮೂಲಕ ಅನುಮತಿ ನೀಡಲಾಗುತ್ತದೆ. ಪ್ರಚಾರಕ್ಕೆ ಮಕ್ಕಳನ್ನು ಬಳಸಬಾರದು ಎಂದು ಎಚ್ಚರಿಕೆ ನೀಡಿದರು.
    ಜಿಲ್ಲೆಯಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆಯು ಜಾರಿಯಲಿದ್ದು ಈ ಅವಧಿಯಲ್ಲಿ ಪತ್ರಿಕೆಗಳು, ದೃಶ್ಯ ಮಾಧ್ಯಮ, ಕೇಬಲ್ ಟಿವಿ, ಪೇಸ್‌ಬುಕ್, ವಾಟ್ಸ್‌ಆ್ಯಪ್ ಸೇರಿದಂತೆ ಸೋಷಿಯಲ್ ಮಿಡಿಯಾಗಳಲ್ಲಿ ಯಾವುದೇ ರಾಜಕೀಯ ಪಕ್ಷ ಅಥವಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಯ ಪರವಾಗಿ ಜಾಹೀರಾತುಗಳನ್ನು ಪ್ರಕಟಿಸಲು ಜಿಲ್ಲಾ ಎಂಸಿಎಂಸಿ ಸಮಿತಿಯ ಅನುಮತಿ ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು.
    ಮತದಾರರ ಪಟ್ಟಿಯನ್ನು ಪರಿಶೀಲನೆ ಮಾಡಿಕೊಂಡು ಯಾವುದೇ ಅರ್ಹ ಸೇರ್ಪಡೆಗಳಿದ್ದಲ್ಲಿ ಹಾಗೂ ತಿದ್ದುಪಡಿಗಳಿದ್ದಲ್ಲಿ ನಿಯಮಾನುಸಾರ ಮತದಾರರ ಪಟ್ಟಿಗೆ ಸೇರ್ಪಡೆ ಮಾಡುವ ಕುರಿತು ಕ್ರಮಕೈಗೊಳ್ಳಬೇಕು. ಕೊನೆಯ ಹಂತದಲ್ಲಿ ಸಲ್ಲಿಕೆಯಾಗುವ ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲು ಅವಕಾಶವಾಗುವುದಿಲ್ಲ. ಆದ್ದರಿಂದ ಬಿಎಲ್‌ಒಗಳ ಮೂಲಕ ಈಗಲೇ ಕ್ರಮಕೈಗೊಳ್ಳುವಂತೆ ರಾಜಕೀಯ ಪಕ್ಷಗಳಿಗೆ ಸಲಹೆ ನೀಡಿದರು.
    ಪೊಲೀಸ್ ಕಮೀಷನರ್ ಬಿ.ರಮೇಶ್ ಬಾನೋತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಎಂ.ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್, ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts