More

    ಮಂಡ್ಯ ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ನಾಮಪತ್ರ ಸಲ್ಲಿಕೆ ಯಾವಾಗ, ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯವೇ ಎಂಬುದರ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

    ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಮಾ.28ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಈ ಸಂಬಂಧ ಜಿಲ್ಲಾಡಳಿತ ಅಧಿಸೂಚನೆ ಹೊರಡಿಸಿದೆ.
    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕುಮಾರ, ಯಾವುದೇ ಲೋಪವಾಗದಂತೆ ಪಾರದರ್ಶಕ ಮತ್ತು ನಿಷ್ಪಕ್ಷಪಾತವಾಗಿ ಚುನಾವಣೆ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಮಪತ್ರ ಸಲ್ಲಿಸಲು ಏ.4ರಂದು ಕೊನೆಯ ದಿನವಾಗಿದ್ದು, ಏ.5ರಂದು ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಏ.8ರಂದು ಕಡೇ ದಿನವಾಗಿದೆ. ಏ.26ರಂದು ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು, ಜೂ.4ರಂದು ಮತ ಎಣಿಕೆ ಮಾಡಲಾಗುವುದು ಎಂದು ವಿವರಿಸಿದರು.
    ಮಾ.28ರಿಂದ ಏ.4ರವರೆಗೆ ರಜಾ ದಿನಗಳನ್ನು ಹೊರತುಪಡಿಸಿ ಉಳಿದೆಲ್ಲ ದಿನಗಳಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3ರವರೆಗೆ ನಾಮಪತ್ರ ಸಲ್ಲಿಸಲು ಸಮಯ ನಿಗದಿಪಡಿಸಲಾಗಿದೆ. ಜಿಲ್ಲಾಧಿಕಾರಿ ಕಚೇರಿಯ ಮೊದಲನೆ ಮಹಡಿಯ ಕೊಠಡಿ ಸಂಖ್ಯೆ 29ರಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತಿದೆ. ಜಿಲ್ಲಾಧಿಕಾರಿ ಕಚೇರಿ/ಕೊಠಡಿಯಲ್ಲಿ ಸಿಸಿ ಕ್ಯಾಮೆರಾ ಅಳವಡಿಸಲಾಗಿದ್ದು, ಪ್ರತ್ಯೇಕವಾಗಿ ವೀಡಿಯೋ ರೆಕಾರ್ಡಿಂಗ್ ಮಾಡಲಾಗುವುದು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಸಿಆರ್‌ಪಿಸಿ ಕಾಯ್ದೆ 1973ರ ಕಲಂ 144ರಂತೆ ಚುನಾವಣಾಧಿಕಾರಿ ಕಾರ್ಯಾಲಯದ 100 ಮೀ. ವ್ಯಾಪ್ತಿಯ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ 100 ಮೀ.ವರೆಗೆ 3 ವಾಹನ ಮಾತ್ರ ಪ್ರವೇಶಿಸಲು ಅವಕಾಶವಿರುತ್ತದೆ. ನಾಮಪತ್ರ ಸಲ್ಲಿಸಲು ಅಭ್ಯರ್ಥಿ ಸೇರಿದಂತೆ 4 ಜನರಿಗೆ ಮಾತ್ರ ಅನುಮತಿ ಇರಲಿದೆ ಎಂದು ಹೇಳಿದರು.
    ನಾಮಪತ್ರ ಸಲ್ಲಿಸಲು ಅವಶ್ಯವಾಗಿರುವ ದಾಖಲೆಗಳು ಮತ್ತು ಅನುಸರಿಸಬೇಕಾದ ಪ್ರಕ್ರಿಯೆಗಳನ್ನು ಕುರಿತು ಮಾಹಿತಿಯನ್ನು ಚುನಾವಣಾಧಿಕಾರಿ ಕಾರ್ಯಾಲಯದಲ್ಲಿ ಪಡೆದುಕೊಳ್ಳಬಹುದು. ಅಭ್ಯರ್ಥಿಗಳು ಪ್ರತ್ಯೇಕ ಬ್ಯಾಂಕ್ ಖಾತೆ ತೆರೆದು ಚುನಾವಣಾ ವೆಚ್ಚ ನಿರ್ವಹಿಸಬೇಕಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು 25,000 ರೂ , ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳು 12,500 ರೂ ಠೇವಣಿಯೊಂದಿಗೆ ನಾಮಪತ್ರ ಸಲ್ಲಿಸಬೇಕಿದೆ. ಮಂಡ್ಯ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವ ತಂಡಗಳನ್ನು ರಚಿಸಲಾಗಿದೆ. ಈ ತಂಡಗಳಲ್ಲಿ ದಿನದ 24 ಗಂಟೆ ಕರ್ತವ್ಯ ನಿರ್ವಹಿಸಲು ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ. 151 ಸೆಕ್ಟರ್ ಅಧಿಕಾರಿಗಳು, 42 ಪ್ಲೈಯಿಂಗ್ ಸ್ಕ್ವಾಡ್, 25 ಸ್ಟಾಟಿಸ್ಟಿಕ್ಸ್ ಸರ್ವೇಲೆನ್ಸ್ ತಂಡ, 8 ವೀಡಿಯೋ ವೀವಿಂಗ್, 9 ವೀಡಿಯೋ ಸರ್ವೇಲೆನ್ಸ್, 16 ಅಕೌಂಟಿಂಗ್, 9 ಸಹಾಯಕ ವೆಚ್ಚ ವೀಕ್ಷಕರು ಹಾಗೂ 8 ಎಂಸಿಸಿ ತಂಡ ರಚಿಸಲಾಗಿದೆ. ಸೆಕ್ಟರ್ ಅಧಿಕಾರಿಗಳಿಗೆ ಈಗಾಗಲೇ 2 ಹಂತದ ತರಬೇತಿ ನೀಡಲಾಗಿದೆ. ಚುನಾವಣೆ ಸಂಬಂಧಿತರ ಪ್ರಚಾರ ಹಾಗೂ ಇತರ ಪ್ರಕ್ರಿಯೆಗಳಿಗೆ ಅನುಮತಿ ನೀಡುವ ಸಂಬಂಧ ಜಿಲ್ಲಾ ಮತ್ತು ಸಹಾಯಕ ಚುನಾವಣಾಧಿಕಾರಿಗಳ ಹಂತದಲ್ಲಿ ಪ್ರತ್ಯೇಕವಾಗಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಇದಕ್ಕಾಗಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಸಿಂಗಲ್‌ವಿಂಡೋ ವ್ಯವಸ್ಥೆ ಮಾಡಲಾಗಿದ್ದು, ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಅಭ್ಯರ್ಥಿಗಳು ಸುವಿಧಾ ಆ್ಯಪ್ ಮೂಲಕ ಅರ್ಜಿ ಸಲ್ಲಿಸಬೇಕು. ಮೊದಲು ಸಲ್ಲಿಕೆಯಾದ ಅರ್ಜಿಯನ್ನು ಮೊದಲು ವಿಲೇ ಮಾಡಲಾಗುವುದು ಎಂದು ತಿಳಿಸಿದರು.
    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜು, ಜಿಲ್ಲಾ ವಾರ್ತಾಧಿಕಾರಿ ಎಚ್.ಎಸ್.ನಿರ್ಮಲಾ ಹಾಜರಿದ್ದರು.

    ಮಂಡ್ಯ ಲೋಕಸಭಾ ಚುನಾವಣೆಗೆ ಅಧಿಸೂಚನೆ ಪ್ರಕಟ: ನಾಮಪತ್ರ ಸಲ್ಲಿಕೆ ಯಾವಾಗ, ಧಾರ್ಮಿಕ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯವೇ ಎಂಬುದರ ಬಗ್ಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ..!

    ಅನುಮತಿ ಅನಗತ್ಯ, ಮಾಹಿತಿ ಸಾಕು
    ಮದುವೆ, ನಾಮಕರಣ, ತಿಥಿ, ಧಾರ್ಮಿಕ ಕಾರ್ಯಕ್ರಮ ಹಾಗೂ ಇತರೆ ಖಾಸಗಿ ಕಾರ್ಯಕ್ರಮಗಳನ್ನು ನಡೆಸುವ ಸಾರ್ವಜನಿಕರು ಯಾವುದೇ ಅನುಮತಿ ಪಡೆಯುವ ಅಗತ್ಯವಿರುವುದಿಲ್ಲ ಎಂದು ಡಿಸಿ ಡಾ.ಕುಮಾರ ಸ್ಪಷ್ಟಪಡಿಸಿದರು.
    ಯಾವುದೇ ಕಾರ್ಯಕ್ರಮದಲ್ಲಿ ಚುನಾವಣಾ ಪ್ರಚಾರ ಅಥವಾ ಮತದಾರರನ್ನು ಸೆಳೆಯುವ ಪ್ರಕಿಯೆಯನ್ನು ಕಡ್ಡಾಯವಾಗಿ ನಡೆಸಬಾರದು. ಇನ್ನು ಕಾರ್ಯಕ್ರಮದ ಕುರಿತು ಸ್ಥಳೀಯ ತಾಲೂಕು ಆಡಳಿತಕ್ಕೆ ಮಾಹಿತಿ ನೀಡಬೇಕೆಂದು ತಿಳಿಸಿದರು.
    ಪ್ರಜಾಪ್ರಭುತ್ವವನ್ನು ಬಲಗೊಳಿಸುವ ಸದುದ್ದೇಶದಿಂದ ಎಲ್ಲರೂ ಕಡ್ಡಾಯ ಮತದಾನ ಪ್ರಕಿಯೆಯಲ್ಲಿ ಪಾಲ್ಲೊಳ್ಳುವಂತೆ ಮತದಾರರನ್ನು ಪ್ರೇರೆಪಿಸಲು ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಹಾಗೂ ನಟ ಮಂಡ್ಯ ರಮೇಶ್ ಅವರನ್ನು ಚುನಾವಣಾ ರಾಯಭಾರಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts