More

    ಪ್ರಥಮ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಆತಂಕ ನಿಗಾವಹಿಸಲು ಡಿಸಿ ಸೂಚನೆ

    ತುಮಕೂರು:  ಪ್ರಥಮ ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಜಿಲ್ಲೆಗೆ ಕುಖ್ಯಾತಿ ತಂದಿಟ್ಟಿರುವ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಮಾ.9ರಿಂದ 29ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆ ಮೇಲೆ ನಿಗಾವಹಿಸಿದೆ.

    ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಪೂರ್ವಭಾವಿ ಸಭೆ ನಡೆಸಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆಗೆ ಉತ್ತೇಜನ ನೀಡಿದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

    ಜಿಲ್ಲೆಯಲ್ಲಿ ದ್ವಿತೀಯ ಪಿಯು ಪರೀಕ್ಷೆ ನಡೆಯಲಿರುವ 35 ಕೇಂದ್ರಗಳಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮರಾ ಅಳವಡಿಸಬೇಕು. ಪ್ರಶ್ನೆಪತ್ರಿಕೆ ಠೇವಣಿಸುವ ಜಿಲ್ಲಾ ಖಜಾನೆ ಮತ್ತು ಮಧುಗಿರಿ ಉಪ ಖಜಾನೆಗಳಲ್ಲಿ ಸುಸ್ಥಿತಿಯಲ್ಲಿರುವ ಸಿಸಿ ಟಿವಿ ಕ್ಯಾಮರಾ ಅಳವಡಿಕೆ ಹಾಗೂ ಬಯೋಮೆಟ್ರಿಕ್ ವ್ಯವಸ್ಥೆ ಕಲ್ಪಿಸಿ ಅವುಗಳ ನಿರ್ವಹಣೆ ಮಾಡಬೇಕು ಎಂದರು.

    ಪರೀಕ್ಷೆಗೆ ಸಂಬಂಧಿಸಿದ ಗೌಪ್ಯ ವಸ್ತುಗಳ ಸಾಗಣೆ ಮಾಡುವ ವಾಹನಗಳಿಗೆ ಜಿಪಿಎಸ್ ಉಪಕರಣ ಅಳವಡಿಸಬೇಕು. ಖಜಾನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಲಕೋಟೆ ಸಾಗಿಸುವ ಕಾರ್ಯದಲ್ಲಿ ಗೊಂದಲ, ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

    ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಸಾಕಷ್ಟು ಗಾಳಿ, ಬೆಳಕು ಇರುವ ಕೊಠಡಿಗಳನ್ನು ಉಪಯೋಗಿಸಬೇಕು.

    ಉತ್ತಮ ರೀತಿಯ ಪೀಠೋಪಕರಣ ವ್ಯವಸ್ಥೆ ಮಾಡಬೇಕು. ಪರೀಕ್ಷಾ ಕೇಂದ್ರಗಳಲ್ಲಿ ಕುಡಿಯುವ ನೀರು, ಶೌಚಾಲಯ ಸೌಲಭ್ಯ ಇರುವ ಬಗ್ಗೆ ಪರಿಶೀಲಿಸಬೇಕು. ನಿಯೋಜಿತ ಅಧಿಕಾರಿಗಳು ಪರೀಕ್ಷೆ ಪಾವಿತ್ರ್ಯತೆ ಕಾಯ್ದುಕೊಂಡು ಯಾವುದೇ ಅಕ್ರಮ ನಡೆಯದಂತೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು ಎಂದರು.

    ಪರೀಕ್ಷಾ ದಿನಗಳಂದು ಕೇಂದ್ರದ ಸುತ್ತಮುತ್ತ 200 ಮೀಟರ್ ವ್ಯಾಪ್ತಿಯನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಲಾಗುವುದು. ನಿರ್ಬಂಧಿತ ಪ್ರದೇಶಗಳಿಗೆ ಯಾವುದೇ ಅನಧಿಕೃತ ವ್ಯಕ್ತಿಗಳಿಗೆ ಪ್ರವೇಶ ನೀಡಬಾರದು ಎಂದರು. ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಿ.ಬಸವಲಿಂಗಪ್ಪ ಪರೀಕ್ಷೆ ಸಿದ್ಧತೆಗಳ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

    ವಾರ್ಷಿಕ ಪರೀಕ್ಷೆ ವೇಳಾಪಟ್ಟಿ: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, ಮಾ.9ರಂದು ಕನ್ನಡ ಮತ್ತು ಅರೇಬಿಕ್, ಮಾ.11ರಂದು ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ; ಮಾ.13ರಂದು ಅರ್ಥಶಾಸ್ತ್ರ; ಮಾ.14ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲಗಣಿತ; ಮಾ.15ರಂದು ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಮಾ.16ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಮಾ.17ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್‌ನೆಸ್, ಮಾ.18ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ, ಮಾ.20ರಂದು ಇತಿಹಾಸ, ಭೌತಶಾಸ್ತ್ರ, ಮಾ.21ರಂದು ಹಿಂದಿ; ಮಾ.23ರಂದು ಇಂಗ್ಲೀಷ್, ಮಾ.25ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಮಾ.27ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹವಿಜ್ಞಾನ, ಮಾ.29ರಂದು ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ ಹಾಗೂ ಗಣಕ ವಿಜ್ಞಾನ ಪರೀಕ್ಷೆ ನಡೆಯಲಿದೆ.

    27857 ವಿದ್ಯಾರ್ಥಿಗಳ ನೋಂದಣಿ: ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 12889 ವಿದ್ಯಾರ್ಥಿಗಳು ಹಾಗೂ 14968 ವಿದ್ಯಾರ್ಥಿನಿಯರು ಸೇರಿ ಒಟ್ಟು 27857 ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. 24386 (10932 + 13454) ಹೊಸ ವಿದ್ಯಾರ್ಥಿಗಳು, 2925 (1718 + 1207) ಪುನರಾವರ್ತಿತ, 546 (239 + 307) ಖಾಸಗಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಜ್ಞಾನ ವಿಭಾಗದಲ್ಲಿ 3578 ವಿದ್ಯಾರ್ಥಿಗಳು ಹಾಗೂ 5120 ವಿದ್ಯಾರ್ಥಿನಿಯರು ಸೇರಿದಂತೆ 8698, ವಾಣಿಜ್ಯ ವಿಭಾಗದಲ್ಲಿ 4008 ವಿದ್ಯಾರ್ಥಿಗಳು ಹಾಗೂ 5452 ವಿದ್ಯಾರ್ಥಿನಿಯರು ಸೇರಿದಂತೆ 9460, ಕಲಾ ವಿಭಾಗದಲ್ಲಿ
    3346 ವಿದ್ಯಾರ್ಥಿಗಳು ಹಾಗೂ 2882 ವಿದ್ಯಾರ್ಥಿನಿಯರು ಸೇರಿ ಒಟ್ಟು 6228 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts