ವಿಜಯವಾಣಿ ಸುದ್ದಿಜಾಲ ಮಂಗಳೂರು/ಉಡುಪಿ
ಸದ್ಯದ ಬೇಸಿಗೆ ಪರಿಸ್ಥಿತಿ ನಿಭಾಯಿಸಿ, ಕುಡಿಯುವ ನೀರಿನ ಕೊರತೆ ಎದುರಾಗದಂತೆ ಸಕಾಲ ಕ್ರಮಕೈಗೊಳ್ಳಲು ಕರಾವಳಿಯಲ್ಲಿ ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಳ್ಳುತ್ತಿವೆ.
ದ.ಕ. ಜಿಲ್ಲೆಯ ವ್ಯಾಪ್ತಿಯಲ್ಲಿ ವಾಣಿಜ್ಯ ಬಳಕೆಗೆ ಸಂಪರ್ಕ ನೀಡಿರುವ ನಲ್ಲಿ ನೀರಿನ ಸೌಲಭ್ಯವನ್ನು ತಾತ್ಕಾಲಿಕವಾಗಿ ನಿಲ್ಲಿಸಬೇಕು ಹಾಗೂ ನದಿ ಪಕ್ಕದ ಕೃಷಿ ಜಮೀನಿನಲ್ಲಿ ಅಳವಡಿಸಿರುವ ಅನಧಿಕೃತ ಪಂಪ್‌ಸೆಟ್ ತೆರವುಗೊಳಿಸುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಸೂಚಿಸಿದ್ದಾರೆ.
ಮಂಗಳವಾರ ಕುಡಿಯುವ ನೀರಿನ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ, ನದಿ ನೀರಿನ ಒಳಹರಿವಿನ ಲಭ್ಯತೆಯನ್ನು ಆಧರಿಸಿ ಎಚ್ಚರಿಕೆ ವಹಿಸಿಕೊಂಡು ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.
ನದಿಯ ನೀರಿನ ಲಭ್ಯತೆ ಅಲ್ಲದೆ ಇತರೆ ನೀರಿನ ಮೂಲಗಳನ್ನು ಗುರುತಿಸಿ ಅವುಗಳ ಬಳಕೆಗೆ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಲು ಮುಂದಾಗಬೇಕು. ನೀರಿನ ಲಭ್ಯತೆಯ ಪ್ರಮಾಣ ಅವುಗಳ ಸರಬರಾಜಿನ ಮೇಲ್ವಿಚಾರಣೆ ನಡೆಸಲು ಮಹಾನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳಿಂದ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕೆಂದು ಸೂಚನೆ ನೀಡಿದರು.
ಬೇಸಿಗೆಯಿಂದಾಗಿ ನದಿಯ ನೀರಿನ ಮೂಲ ಬತ್ತುವುದರೊಂದಿಗೆ ನದಿಯಲ್ಲಿ ನೀರಿನ ಹರಿವು ದಿನೇದಿನೆ ಕ್ಷೀಣಿಸುತ್ತಿದೆ, ಸಾಮಾನ್ಯವಾಗಿ ನಗರ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಮೂಲಗಳಿಗೆ ನದಿ ನೀರು ಆಧಾರವಾಗಿದ್ದು, ಮುಂದಿನ ಮಾನ್ಸೂನ್ ಮಳೆ ಆರಂಭದವರೆಗೆ ಲಭ್ಯತೆಯನ್ನು ಆಧರಿಸಿ ಕುಡಿಯುವ ನೀರು ಸರಬರಾಜು ಮಾಡುವಂತೆ ತಿಳಿಸಿದರು. ಸಾರ್ವಜನಿಕರು ಬೇಸಿಗೆಯಲ್ಲಿ ನೀರನ್ನು ಮಿತವಾಗಿ ಬಳಸಲು ಅರಿವು ಮೂಡಿಸುವುದರೊಂದಿಗೆ ಕಡಿಮೆ ಪ್ರಮಾಣದಲ್ಲಿ ಬಳಸುವಂತೆ ಮನವರಿಕೆ ಮಾಡಿಕೊಡಬೇಕು ಎಂದರು.
ಗ್ರಾಮೀಣ ಪ್ರದೇಶದಲ್ಲೂ ಮುನ್ನೆಚ್ಚರಿಕೆ: ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಗ್ರಾಮೀಣ ಭಾಗದ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಜಿಪಂ ಸಿಇಒ ಡಾ.ಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು.
ದ.ಕ ಜಿ.ಪಂ ಸಭಾಂಗಣದಲ್ಲಿ ನಡೆದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಳ್ಳಾಲ ನಗರಸಭೆ ಕೋಟೆಕಾರ್ ಪಪಂ ಸೇರಿದಂತೆ ಈ ವ್ಯಾಪ್ತಿಯ ಮಾರ್ಗ ಮಧ್ಯದಲ್ಲಿ ಬರುವ ಮಂಗಳೂರು ಹಾಗೂ ಬಂಟ್ವಾಳ ತಾಲೂಕಿನ 24 ಗ್ರಾಮಗಳಿಗೆ ಕುಡಿಯುವ ನೀರು ಒದಗಿಸಲು ನೇತ್ರಾವತಿ ನದಿ ನೀರಿನ ಮೂಲವನ್ನಾಧರಿಸಿ ಕೈರಂಗಳದ ಬಳಿ ನಿರ್ಮಿಸಲಾಗುತ್ತಿರುವ 72 ಎಂಎಲ್‌ಡಿ ಸಾಮರ್ಥ್ಯದ ನೀರು ಶುದ್ಧೀಕರಣ ಘಟಕದಿಂದ ನೀರು ಸರಬರಾಜು ಮಾಡುವ ಯೋಜನೆಯನ್ನು 249 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ ಎಂದರು.
ಖಾಸಗಿ ಬೋರ್‌ವೆಲ್‌ನಿಂದ ಪೂರೈಕೆಗೆ ಕ್ರಮ: ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ
ಉಡುಪಿ ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರು ಸಮಸ್ಯೆ ನಿವಾರಣೆ ಕ್ರಮಕೈಗೊಳ್ಳಬೇಕು. ಸಾಧ್ಯವಿದ್ದ ಕಡೆಗಳಲ್ಲಿ ಖಾಸಗಿ ಬೋರ್‌ವೆಲ್‌ಗಳನ್ನು ಬಾಡಿಗೆಗೆ ಪಡೆದು ನೀರು ಪೂರೈಕೆ ಮಾಡಬಹುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.
ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ತಹಸೀಲ್ದಾರ್‌ಗಳಿಗೆ ಸೂಚನೆ ನೀಡಿದರು.
ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ಕುರಿತು ಪಿಡಿಓ, ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳ ಅಭಿಪ್ರಾಯ ಪಡೆದು ಟೆಂಡರ್ ಪ್ರಕ್ರಿಯೆ ನಡೆಸಿ ಸಿದ್ಧವಾಗಿರಬೇಕು. ಸಮಸ್ಯೆ ತಲೆದೋರಿದ ಕೂಡಲೇ ನೀರು ಸರಬರಾಜು ಮಾಡಬೇಕು. ನಗರ ಸ್ಥಳಿಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯೂ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದರು.
ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಪ್ರವಾಹಕ್ಕೆ ತುತ್ತಾಗುವ ಪ್ರದೇಶಗಳನ್ನು ಗುರುತಿಸಿ ನಕ್ಷೆ ತಯಾರಿಸುವಂತೆ ಸೂಚಿಸಿದರು. ಜಿಲ್ಲಾ ವಿಪತ್ತು ನಿರ್ವಹಣಾ ಯೋಜನೆಗೆ ಅಗತ್ಯವಿರುವ ಉಪಕರಣಗಳ ಖರೀದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಗ್ರಾಪಂ ವಿಪತ್ತು ನಿರ್ವಹಣಾ ನಿಧಿಯಲ್ಲಿ ಸುರಕ್ಷತಾ ಉಪಕರಣಗಳನ್ನು ಒದಗಿಸಲಾಗುವುದು ಎಂದರು.