ಡಿಸಿ, ಎಸ್‌ಪಿ, ಎಡಿಸಿ, ಸಿಇಒ ಹಗ್ಗಜಗ್ಗಾಟ!

ವಿಜಯವಾಣಿ ಸುದ್ದಿಜಾಲ ಉಡುಪಿ

ಮಲ್ಪೆ ಬೀಚ್‌ನಲ್ಲಿ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಗ್ಗಜಗ್ಗಾಟದಲ್ಲಿ ಪಾಲ್ಗೊಂಡು ಗಮನ ಸೆಳೆದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಮತದಾನ ಬಗ್ಗೆ ಜಾಗೃತಿ ಮೂಡಿಸಲು ಮಹಿಳೆಯರಿಗೆ ವಿವಿಧ ಕ್ರೀಡಾಕೂಟ ಶುಕ್ರವಾರ ಮಲ್ಪೆ ಬೀಚ್‌ನಲ್ಲಿ ನಡೆಯಿತು. ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಉದ್ಘಾಟಿಸಿದರು.

ಜಿಲ್ಲಾಧಿಕಾರಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸಿಂಧೂ ಬಿ. ರೂಪೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಶಾ ಜೇಮ್ಸ್, ಅಪರ ಜಿಲ್ಲಾಧಿಕಾರಿ ವಿದ್ಯಾಕುಮಾರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಗ್ರೇಸಿ ಎನ್. ಗೊನ್ಸಾಲ್ವಿಸ್ ಅವರನ್ನು ಒಳಗೊಂಡ ತಂಡ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ವಿಜೇತರಾದರು.

ಕ್ರೀಡಾಕೂಟದಲ್ಲಿ ಸ್ತ್ರೀ ಶಕ್ತಿ ಸಂಘಟನೆ ಸದಸ್ಯರು, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವಿವಿಧ ಇಲಾಖೆ ಮಹಿಳಾ ಸಿಬ್ಬಂದಿ ಭಾಗವಹಿಸಿದರು. ಮಹಿಳೆಯರಿಗೆ ತ್ರೋಬಾಲ್, ಹಗ್ಗ ಜಗ್ಗಾಟ ಹಾಗೂ ಮೆಹೆಂದಿ ಮೂಲಕ ಮತದಾನ ಸಂದೇಶ ನೀಡುವ ಕಾರ್ಯಕ್ರಮ ನಡೆಯಿತು.

ಮತದಾನದ ಬಗ್ಗೆ ಜಾಗೃತಿ ಮೂಡಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ವರೂ ಪಾಲ್ಗೊಳ್ಳುವಂತಾಗಲು ಮಹಿಳೆಯರಿಗೆ ವಿವಿಧ ಕ್ರೀಡಾಕೂಟ ಆಯೋಜಿಸಲಾಗಿದೆ ಸಂವಿದಾನವು ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದ್ದು, ಎಲ್ಲರೂ ಮತದಾನ ಮಾಡಬೇಕು.
| ಹೆಪ್ಸಿಬಾ ರಾಣಿ ಕೊರ್ಲಪಾಟಿ, ಜಿಲ್ಲಾಧಿಕಾರಿ