ಬೆಂಗಳೂರು: ಶಕ್ತಿ ಯೋಜನೆ ಸೇರಿದಂತೆ ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಪ್ರಶ್ನೆಯೇ ಇಲ್ಲ. ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ತಿರುಚಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ನಗರದಲ್ಲಿ ಈ ಕುರಿತು ಮಾತನಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar), ಶಕ್ತಿ ಯೋಜನೆ ಮರುಪರಿಶೀಲನೆ ಸಂಬಂಧಿಸಿದಂತೆ ಕೇಳಿದಾಗ, “ಈ ವಿಚಾರದಲ್ಲಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ. ಆರ್ಥಿಕವಾಗಿ ಸದೃಢವಾಗಿರುವವರು, ಐಟಿಬಿಟಿ ಸಂಸ್ಥೆಗಳವರು , ಎಂಎನ್ ಸಿ ಕಂಪನಿಗಳ ಸಿಬ್ಬಂದಿ ಸೇರಿದಂತೆ ಅನೇಕ ಮಹಿಳೆಯರು ತಮಗೆ ಬಸ್ಗಳಲ್ಲಿ ಉಚಿತ ಪ್ರಯಾಣದ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ.
ತಾವು ಕೆಲಸ ಮಾಡುವ ಕಂಪನಿಗಳಲ್ಲಿ ಸಂಚಾರಕ್ಕಾಗಿ ಪ್ರತ್ಯೇಕ ಭತ್ಯೆ ನೀಡಲಾಗುತ್ತಿದೆ. ಹೀಗಾಗಿ ನಮಗೆ ಉಚಿತ ಬಸ್ ಪ್ರಯಾಣ ಸೌಲಭ್ಯ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಈ ವಿಚಾರದ ಬಗ್ಗೆ ನಾನು ಸಚಿವರ ಜತೆ ಚರ್ಚೆ ಮಾಡುತ್ತೇನೆ ಎಂದು ಹೇಳಿದ್ದೇನೆ ಅಷ್ಟೇ. ಯೋಜನೆ ನಿಲ್ಲಿಸುತ್ತೇವೆ ಎಂದು ಎಲ್ಲಿಯೂ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ನಮ್ಮ ಐದು ಗ್ಯಾರಂಟಿ ಯೋಜನೆಗಳ ಪೈಕಿ ಯಾವುದೇ ಯೋಜನೆಯನ್ನು ಹಿಂಪಡೆಯುವ ಪ್ರಶ್ನೆಯೇ ಇಲ್ಲ. ಈ ಯೋಜನೆ ಸೌಲಭ್ಯ ಬೇಡ ಎಂದು ಹೇಳುವವರಿಗೆ ಬಲವಂತ ಮಾಡಲು ಸಾಧ್ಯವೇ? ಅವರ ಸಂಖ್ಯೆ ಶೇಕಡಾ 7-8 ರಷ್ಟು ಇರಬಹುದು. ಹಿಂದೆ ಅಡುಗೆ ಅನಿಲಕ್ಕೆ ನೀಡಲಾಗುತ್ತಿದ್ದ ಸಬ್ಸಿಡಿ ವಿಚಾರದಲ್ಲಿ ಪ್ರಧಾನಿ ಮೋದಿ ಅವರು ಸ್ವಇಚ್ಛೆಯಿಂದ ಸಬ್ಸಿಡಿ ತ್ಯಜಿಸುವವರಿಗೆ ಅವಕಾಶ ನೀಡಿದರು. ಆ ರೀತಿ ಆಲೋಚನೆ ಮಾಡುವುದಾಗಿ ಹೇಳಿದ್ದೇನೆ.
ಕಾಂಗ್ರೆಸ್ ಅಧ್ಯಕ್ಷನಾಗಿ ಹಾಗೂ ಉಪಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಸ್ಪಷ್ಟ ಪಡಿಸುತ್ತೇನೆ. ಐದೂ ಗ್ಯಾರಂಟಿ ಯೋಜನೆ ಮುಂದುವರಿಯುತ್ತವೆ. ಜನರಿಗೆ ಈ ಸೌಲಭ್ಯ ಮುಂದುವರಿಯಲಿದೆ. ಬೆಲೆ ಏರಿಕೆ ಸಮಸ್ಯೆ ನಿವಾರಿಸಿ ಜನರ ಬದುಕಿನಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಜನ ನಮಗೆ ಆಶೀರ್ವಾದ ಮಾಡುತ್ತಾರೆ. ಈಗಿನ ಅವಧಿ ಜತೆಗೆ ಮುಂದಿನ ಐದು ವರ್ಷದ ಅವಧಿಯೂ ಸೇರಿ ಒಟ್ಟು ಎಂಟೂವರೆ ವರ್ಷ ಈ ಯೋಜನೆ ಮುಂದುವರಿಯಲಿದೆ.
ಯಾರಿಗೆ ಬೇಕೋ ಅವರು ಟಿಕೆಟ್ ಖರೀದಿ ಮಾಡಿ ಪ್ರಯಾಣ ಮಾಡಬಹುದಲ್ಲವೇ? ಪರಿಷ್ಕರಣೆ ಯಾಕೆ ಎಂದು ಕೇಳಿದಾಗ, “ಆ ರೀತಿ ಮಾಡಲು ಸಾರಿಗೆ ಸಿಬ್ಬಂದಿಗಳಿಗೆ ಸರ್ಕಾರ ಅನುಮತಿ ನೀಡಬೇಕಲ್ಲವೇ? ಇಲ್ಲದಿದ್ದರೆ ಕಂಡಕ್ಟರ್ ಗಳು ಮಹಿಳೆಯರಿಂದ ಹಣ ಪಡೆಯಲು ಹಿಂಜರಿಯುತ್ತಾರೆ. ನಾಳೆ ನೀವೇ ಹೇಳಬಹುದು, ಮಹಿಳೆಯರಿಂದ ಬಲವಂತವಾಗಿ ಹಣ ಕೀಳುತ್ತಿದ್ದಾರೆ ಎಂದು. ಹೀಗಾಗಿ ಕೆಲವು ಮಹಿಳಾ ಪ್ರಯಾಣಿಕರು ನೀಡಿರುವ ಸಲಹೆ ಬಗ್ಗೆ ನಾವು ಚರ್ಚೆ ಮಾಡಬೇಕಿದೆ. ಈ ವಿಚಾರದಲ್ಲಿ ಯಾವುದೇ ಆತುರವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ನಾಯಿ ಬಾಲಕ್ಕೆ ಪಟಾಕಿ ಕಟ್ಟಿ ಸಿಡಿಸಿದ ಕಿಡಿಗೇಡಿ; ದುಷ್ಕೃತ್ಯದ Video Viral