More

    ವಾರದಲ್ಲಿ 62 ಕೋವಿಡ್ ಕೇರ್ ಕೇಂದ್ರ ಆರಂಭ ; ಡಿಸಿಎಂ ಅಶ್ವತ್ಥನಾರಾಯಣ ಭರವಸೆ

    ರಾಮನಗರ : ಜಿಲ್ಲಾ ಕೇಂದ್ರದಲ್ಲಿ ಇನ್ನೊಂದು ವಾರದಲ್ಲಿ 240 ಆಕ್ಸಿಜನ್ ಬೆಡ್‌ಗಳನ್ನು ವ್ಯವಸ್ಥೆ ಮಾಡಲಾಗುವುದು. ಜಿಲ್ಲೆಯ ಒಟ್ಟು 62 ಪ್ರಾಥಮಿಕ ಆರೋಗ್ಯ ಕೇಂದ್ರಗಳ ವ್ಯಾಪ್ತಿಯಲ್ಲಿ ತಲಾ ಒಂದೊಂದು ಕೋವಿಡ್ ಕೇರ್ ಸೆಂಟರ್ ತೆರೆಯಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಭರವಸೆ ನೀಡಿದರು.

    ಬೆಂಗಳೂರಿನಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಜಿಲ್ಲೆಯ ಉನ್ನತ ಅಧಿಕಾರಿಗಳ ಜತೆ ಶುಕ್ರವಾರ ನಡೆಸಿದ ವರ್ಚುಯಲ್ ಸಭೆಯಲ್ಲಿ ಡಿಸಿಎಂ ಮಾತನಾಡಿದರು. ರಾಮನಗರದ ಹೊಸ ಜಿಲ್ಲಾಸ್ಪತ್ರೆಯಲ್ಲಿ 120 ಹಾಗೂ ಕಂದಾಯ ಭವನದಲ್ಲಿ 120 ಆಕ್ಸಿಜನ್ ಬೆಡ್‌ಗಳನ್ನು ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.

    ಸದ್ಯಕ್ಕೆ ಸೋಂಕಿತರ ಸಂಖ್ಯೆಗೆ ಹೋಲಿಸಿದರೆ ಜಿಲ್ಲೆಯಲ್ಲಿ ಆಕ್ಸಿಜನ್ ಬೆಡ್‌ಗಳ ಸಮಸ್ಯೆ ಇಲ್ಲ. ಆದರೂ ಮುನ್ನೆಚ್ಚರಿಕೆ ಕ್ರಮವಾಗಿ ಹೊಸ ಬೆಡ್‌ಗಳನ್ನು ಹಾಕಲಾಗುತ್ತಿದೆ. ಅದೇ ರೀತಿ ಎಲ್ಲ ಪಿಎಚ್‌ಸಿಗಳ ವ್ಯಾಪ್ತಿಯ ಶಾಲೆ-ಹಾಸ್ಟೆಲ್‌ಗಳಲ್ಲಿ ಕೋವಿಡ್ ಕೇರ್ ಸೆಂಟರ್‌ಗಳನ್ನು ತೆರೆಯಲಾಗುವುದು. ಈಗಿನ ಅಂಕಿ-ಅಂಶಗಳ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 2,800 ಸೋಂಕಿತರು ಮನೆಗಳಲ್ಲೇ ಕ್ವಾರಂಟೈನ್ ಆಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರನ್ನೂ ಕೋವಿಡ್ ಕೇರ್ ಸೆಂಟರ್‌ಗಳಿಗೆ ಸ್ಥಳಾಂತರಿಸಲಾಗುವುದು ಎಂದು ಹೇಳಿದರು. ಸಂಸದ ಡಿ.ಕೆ. ಸುರೇಶ್, ವಿಧಾನಪರಿಷತ್ ಸದಸ್ಯ ಅ. ದೇವೇಗೌಡ, ಜಿಲ್ಲಾಧಿಕಾರಿ ರಾಕೇಶ್‌ಕುಮಾರ್, ಎಸ್‌ಪಿ ಗಿರೀಶ್, ಡಿಎಚ್‌ಒ ಡಾ. ನಿರಂಜನ ಮತ್ತಿತರರಿದ್ದರು.

    ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ: ಜಿಲ್ಲಾಸ್ಪತ್ರೆಯಲ್ಲಿ ನಿಮಿಷಕ್ಕೆ 1 ಸಾವಿರ ಕೆಎಲ್ ಆಮ್ಲಜನಕ ಪೂರೈಕೆ ಮಾಡುವ ಘಟಕವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ನೆರವಿನಿಂದ ಸ್ಥಾಪನೆ ಮಾಡಲಾಗುತ್ತಿದೆ. ಪ್ರಾಧಿಕಾರವು 1.08 ಕೋಟಿ ರೂ. ನೆರವು ನೀಡುತ್ತಿದೆ. ಜತೆಗೆ, ಕನಕಪುರ, ಮಾಗಡಿ, ಚನ್ನಪಟ್ಟಣ ತಾಲೂಕು ಆಸ್ಪತ್ರೆಗಳಲ್ಲಿ 500 ಎಲ್‌ಎಂಪಿ ಆಕ್ಸಿಜನ್ ಪೂರೈಕೆ ಘಟಕಗಳನ್ನು ಸ್ಥಾಪಿಸಲಾಗುತ್ತಿದೆ. ಇವೆಲ್ಲ ತ್ವರಿತವಾಗಿ ಕಾರ್ಯಗತವಾಗುತ್ತವೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.
    ಸತೀಶ್‌ಕುಮಾರ್ ನೋಡಲ್ ಅಧಿಕಾರಿ: ಉಪ ಮುಖ್ಯಮಂತ್ರಿಯವರ ಆಪ್ತ ಕಾರ್ಯದರ್ಶಿ ಆಗಿರುವ ಹಿರಿಯ ಕೆಎಎಸ್ ಅಧಿಕಾರಿ ಸತೀಶ್‌ಕುಮಾರ್ ಅವರನ್ನು ರಾಮನಗರ ಜಿಲ್ಲೆಯ ಕೋವಿಡ್ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

    ಸಿಟಿ ಸ್ಕ್ಯಾನ್ಗೆ ಖಾಸಗಿ ಆಸ್ಪತ್ರೆಗಳ ಜತೆ ಒಪ್ಪಂದ : ಗಂಭೀರ ಸೋಂಕಿತರನ್ನು ಸಿಟಿ ಸ್ಕ್ಯಾನ್ ಒಳಪಡಿಸಲು ಖಾಸಗಿ ಆಸ್ಪತ್ರೆಗಳ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಜಿಲ್ಲಾಸ್ಪತ್ರೆಯಲ್ಲಿ ಟೊಯೋಟಾ ಕಿರ್ಲೋಸ್ಕರ್ ಕಂಪನಿ ನೆರವಿನಿಂದ ಸಿಟಿ ಸ್ಕ್ಯಾನ್ ಯಂತ್ರವನ್ನು ಸ್ಥಾಪಿಸಲಾಗುವುದು ಎಂದು ಡಿಸಿಎಂ ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts