More

    ತುಂಗೆಗೆ ಕೊಳಚೆ ತಡೆಗೆ ಡೆಡ್‌ಲೈನ್

    ಶಿವಮೊಗ್ಗ: ತುಂಗಾ ನದಿಗೆ ಕೊಳಚೆ ನೀರು ಹರಿಯುವುದನ್ನು ತಪ್ಪಿಸುವ ಸಲುವಾಗಿ ಮುಂದಿನ 15 ದಿನಗಳಲ್ಲಿ ಕ್ರಮ ಕೈಗೊಂಡು ವರದಿ ನೀಡಬೇಕು. ತಪ್ಪಿದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡುವ ಜತೆಗೆ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಆರ್.ಸೆಲ್ವಮಣಿ ಎಚ್ಚರಿಕೆ ನೀಡಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ತುಂಗಾ ಉಳಿಸಿ ಅಭಿಯಾನದ ಪದಾಧಿಕಾರಿಗಳು, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಮಹಾನಗರ ಪಾಲಿಕೆ ಸೇರಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿದ ಅವರು, ನದಿಯಲ್ಲಿ ಸ್ವಚ್ಛತೆ ಕಾಪಾಡುವ ಬಗ್ಗೆ ಪಾಲಿಕೆ ಹಾಗೂ ಸಂಬಂಧಿತ ಇಲಾಖೆಗಳ ಅಧಿಕಾರಿಗಳು ಕೂಡಲೆ ಕ್ರಮ ಕೈಗೊಳ್ಳಬೇಕು ಎಂದರು.
    ಕಳೆದ ಕೆಲ ತಿಂಗಳ ಹಿಂದೆಯೇ ತ್ಯಾಜ್ಯ ನದಿಗೆ ಸೇರುತ್ತಿರುವುದರ ಬಗ್ಗೆ ಕ್ರಮ ಕೈಗೊಂಡು ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿತ್ತು. ಆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರವೆನಿಸಿದೆ. ಈ ಬಾರಿಯೂ ಅದೇ ಪುನರಾವರ್ತನೆಯಾದರೆ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದರು.
    ಶಿವಮೊಗ್ಗ ನಗರದ ಕೊಳಚೆ ನೀರು ತುಂಗೆಯ ಇಕ್ಕೆಲಗಳ ಅನೇಕ ಕಡೆ ನದಿಗೆ ಸೇರಿ ಕಲುಷಿತಗೊಳ್ಳುತ್ತಿರುವುದನ್ನು ಜಿಲ್ಲಾಡಳಿತ ಗಂಭೀರವಾಗಿ ಪರಿಗಣಿಸಿದ್ದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕೂಡಲೇ ಕ್ರಮ ವಹಿಸಿ ಮಲಿನ ನೀರು ತುಂಗೆಗೆ ಸೇರದಂತೆ ತುರ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ನಗರದ ಭಾರಿ ಪ್ರಮಾಣದ ಕಸ ಚರಂಡಿಗಳ ಮೂಲಕ ನದಿಗೆ ಸೇರುತ್ತಿದೆ. ಅಲ್ಲದೆ ವಿದ್ಯಾವಂತರೇ ಘನತ್ಯಾಜ್ಯವನ್ನು ನದಿಗೆ ಎಸೆದು ಕಸದಬುಟ್ಟಿಯನ್ನಾಗಿ ಮಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
    ನದಿ ತೀರದಲ್ಲಿ ಬಾಕಿ ಇರುವ ಕಾಮಗಾರಿಗಳನ್ನು ಕೂಡಲೆ ಪೂರ್ಣಗೊಳಿಸಿ, ಕಲುಷಿತ ನೀರು ನದಿಗೆ ಸೇರದಂತೆ ಕ್ರಮ ಕೈಗೊಂಡು ವರದಿ ನೀಡಬೇಕು. ನಂತರ ತುಂಗಾ ಅಭಿಯಾನ ಸಮಿತಿಯ ಪದಾಧಿಕಾರಿಗಳೊಂದಿಗೆ ಖುದ್ದು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸುವುದಾಗಿ ತಿಳಿಸಿದ ಅವರು, ಕೈಗೊಳ್ಳಬಹುದಾದ ಕಾಮಗಾರಿಗಳ ಕುರಿತು ಸಂಬಂಧಿತ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಸಾಧಿಸಿಕೊಂಡು ಕ್ರಿಯಾಯೋಜನೆಯನ್ನು ರೂಪಿಸಿ ಸಲ್ಲಿಸುವಂತೆ ಸಲಹೆ ನೀಡಿದರು.
    ನಗರ ಯೋಜನಾ ನಿರ್ದೇಶಕ ಮನೋಹರ್, ತುಂಗಾ ಅಭಿಯಾನ ಸಮಿತಿ ಸಂಚಾಲಕ ಬಿ.ಎಂ.ಕುಮಾರಸ್ವಾಮಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಕಾರ್ಯಪಾಲಕ ಅಭಿಯಂತ ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts