ವಯನಾಡು ಭೂಕುಸಿತ; ಸಾವಿನ ಸಂಖ್ಯೆ 84ಕ್ಕೆ ಏರಿಕೆ, ಶೋಕಾಚರಣೆ ಘೋಷಿಸಿದ ಸರ್ಕಾರ

Wayanad
Published on

ವಯನಾಡು: ದೇವರ ನಾಡು ಕೇರಳದ ವಯನಾಡಿನಲ್ಲಿ ಭಾರಿ ಮಳೆಗೆ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ ಏರುತ್ತಲೇ ಇದೆ. ಸದ್ಯ ಮಾಹಿತಿ ಪ್ರಕಾರ ಸಾವಿನ ಸಂಖ್ಯೆ 84ಕ್ಕೆ ಏರಿಕೆಯಾಗಿದೆ. 100ಕ್ಕೂ ಅಧಿಕ ಮಂದಿ ಮಣ್ಣಿನಡಿ ಸಿಲುಕಿಕೊಂಡಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.

ಘಟನೆ ಸಂಬಂಧ ಕೇರಳ ಸರ್ಕಾರ ರಾಜ್ಯಾದ್ಯಂತ ಇಂದು (ಜುಲೈ 30) ಮತ್ತು ನಾಳೆ (ಜುಲೈ 31) ರಾಜ್ಯಾದ್ಯಂತ ಶೋಕಾಚರಣೆ ಘೋಷಿಸಿದೆ. ರಾಷ್ಟ್ರೀಯ ಮತ್ತು ರಾಜ್ಯ ವಿಪತ್ತು ನಿರ್ವಹಣ ತಂಡ ಸೇರಿದಂತೆ ಎಲ್ಲ ರಕ್ಷಣಾ ಏಜೆನ್ಸಿಗಳು ಸ್ಥಳದಲ್ಲಿ ಬೀಡುಬಿಟ್ಟು, ರಕ್ಷಣಾ ಕಾರ್ಯದಲ್ಲಿ ತೊಡಗಿವೆ.

ವಯನಾಡಿನಲ್ಲಿ ಮುಂಡಕ್ಕಯ್ಯಿಲ್ ಪ್ರದೇಶದಲ್ಲಿ ಭೂಕುಸಿತ ಸಂಭವಿಸಿದ್ದು, ಐವರು ಮಕ್ಕಳು ಸೇರಿ ಈವರೆಗೂ 84ಮಂದಿ ಮೃತಪಟ್ಟಿದ್ದಾರೆ. ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ನೂರಾರು ಮಂದಿ ಮಣ್ಣಿನಡಿ ಸಿಲುಕಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಕುಟುಂಬ ಸದಸ್ಯರನ್ನು ಕಳೆದುಕೊಂಡವ ಆಕ್ರಂದನ ಮುಗಿಲು ಮುಟ್ಟಿದೆ. ಭೂಕುಸಿತದಿಂದ ಅಟ್ಟಮಾಲ ಮತ್ತು ಮುಂಡಕ್ಕಯ್ಯಿಲ್ ಪ್ರದೇಶಗಳು ಸೇರಿದಂತೆ ಜಿಲ್ಲೆಯ ಉಳಿದ ಭಾಗಗಳ ಸಂಪರ್ಕ ಕಡಿತಗೊಂಡಿವೆ. ಪಾಲಕ್ಕಾಡ್‌ನಲ್ಲಿ ಗುಡ್ಡಗಾಡು ಪ್ರದೇಶದ ಮೂರು ಸ್ಥಳಗಳಲ್ಲಿ ಮಂಗಳಂ ಅಣೆಕಟ್ಟು ಕುಸಿದಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ಚರ್ಚಸಿ, ಸರ್ಕಾರಕ್ಕೆ ಅಗತ್ಯವಾಗಿ ಬೇಕಾದ ಎಲ್ಲ ನೆರವು ನೀಡುವುದಾಗಿ ಭರವಸೆಯನ್ನು ನೀಡಿದ್ದಾರೆ. ಅಲ್ಲದೆ, ರಕ್ಷಣಾ ಕಾರ್ಯದಲ್ಲಿ ಪಕ್ಷದ ಕಾರ್ಯಕರ್ತರು ತೊಡಗಿಕೊಳ್ಳಲು ಸೂಚನೆ ನೀಡುವಂತೆ ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಅವರನ್ನು ಕೇಳಿದ್ದಾರೆ. ಈ ಸಂಬಂಧ ಕೇರಳದ ಬಿಜೆಪಿಯ ಏಕೈಕ ಸಂಸದ, ಕೇಂದ್ರ ಸಚಿವ ಸುರೇಶ್ ಗೋಪಿ ಅವರೊಂದಿಗೂ ಪ್ರಧಾನಿ ಮೋದಿ ಮಾತನಾಡಿದ್ದಾರೆ.

ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿಪಕ್ಷ ನಾಯಕ ರಾಹುಲ್​ ಗಾಂಧಿ ಸಂತಾಪ ಸೂಚಿಸಿದ್ದು, ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಿ ಮೋದಿ ಕಾರ್ಯಾಲಯ 2 ಲಕ್ಷ ರೂ. ಗಾಯಾಳುಗಳಿಗೆ 50 ಸಾವಿರ ರೂ ಪರಿಹಾರವನ್ನು ಘೋಷಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net