

ನವದೆಹಲಿ: ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ ಜಾಮೀನು ಅರ್ಜಿ ಕುರಿತು ದೆಹಲಿ ಹೈಕೋರ್ಟ್ ಶುಕ್ರವಾರ (ಜುಲೈ 5) ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ನೋಟಿಸ್ ಜಾರಿ ಮಾಡಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರಿದ್ದ ಪೀಠವು ಸಿಬಿಐಗೆ ಉತ್ತರಿಸುವಂತೆ ಹೇಳಿದ್ದು, ಮುಂದಿನ ವಿಚಾರಣೆಯನ್ನು ಜುಲೈ 17ಕ್ಕೆ ಮುಂದೂಡಿದೆ.
ಮದ್ಯ ನೀತಿ ಪ್ರಕರಣದಲ್ಲಿ ಸಿಬಿಐ ಬಂಧನಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಅವರ ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಅವರು ಸಿಎಂ ಅರವಿಂದ್ ಕೇಜ್ರಿವಾಲ್ ಅವರಿಗೆ ಏಕೆ ಜಾಮೀನು ನೀಡುತ್ತಿಲ್ಲ. ಅವರು ಘೋಷಿತ ಕ್ರಿಮಿನಲ್ ಅಥವಾ ಭಯೋತ್ಪಾಕ ಅಲ್ಲ. ಜಾರಿ ನಿರ್ದೇಶನಾಲಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಸಿಬಿಐ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಕೇಂದ್ರ ತನಿಖಾ ದಳವನ್ನು ಪ್ರತಿನಿಧಿಸುವ ವಕೀಲರು ನೇರವಾಗಿ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿಯನ್ನು ಸಲ್ಲಿಸಲು ಆಕ್ಷೇಪಿಸಿದರು. ಕೇಜ್ರಿವಾಲ್ ಮೊದಲು ಜಾಮೀನಿಗಾಗಿ ವಿಚಾರಣಾ ನ್ಯಾಯಾಲಯದ ಮೊರೆ ಹೋಗಬೇಕಿತ್ತು. ಆದರೆ ಅವರು ಜಾಮೀನಿಗಾಗಿ ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿಸಿದರು. ಅರ್ಜಿದಾರರು ನೇರವಾಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಈ ವಿವಾದವನ್ನು ವಾದದ ಸಮಯದಲ್ಲಿ ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು. ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ಗೆ ಜೂನ್ 20ರಂದು ಕೆಳ ನ್ಯಾಯಾಲಯದಿಂದ ಜಾಮೀನು ನೀಡಲಾಗಿತ್ತು. ಆದರೆ ಜೂನ್ 25ರಂದು ದೆಹಲಿ ಹೈಕೋರ್ಟ್ ಜಾಮೀನನ್ನು ತಡೆಹಿಡಿಯಿತು. ನಂತರ ಸಿಬಿಐ ಅವರನ್ನು ಬಂಧಿಸಿತು.
ಜೂನ್ 26ರಂದು ಸಿಬಿಐ ಬಂಧಿಸಿದ ಬಳಿಕ ಅರವಿಂದ್ ಕೇಜ್ರಿವಾಲ್ ಅವರನ್ನು ಜೂನ್ 29ರವರೆಗೆ ಸಿಬಿಐ ಕಸ್ಟಡಿಗೆ ಕಳುಹಿಸಲಾಯಿತು. ಜೂನ್ 29ರ ಸಿಬಿಐ ಕಸ್ಟಡಿಯನ್ನು ಮುಂದುವರಿಸದಂತೆ ಕೇಳದ ಕಾರಣ ಜುಲೈ 12ರವರೆಗೆ ಅರವಿಂದ್ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಯಿತು. ಜುಲೈ 3ರಂದು ಸಿಬಿಐ ಪ್ರಕರಣದಲ್ಲಿ ಜಾಮೀನು ಕೋರಿ ಸಿಎಂ ಕೇಜ್ರಿವಾಲ್ ಅವರು ನೇರವಾಗಿ ಹೈಕೋರ್ಟ್ ಮೇಟ್ಟಿಲೇರಿದರು. (ಏಜೆನ್ಸೀಸ್)