ನವದೆಹಲಿ: ಈಶಾನ್ಯ ದೆಹಲಿಯಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಂದಿದೆ. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಸುಳ್ಳು ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಈಶಾನ್ಯ ದೆಹಲಿಯಲ್ಲಿ ಸಂಘರ್ಷ ಮುಗಿಯುತ್ತಿದ್ದಂತೆ, ದೆಹಲಿಯ ಆಗ್ನೇಯ ಹಾಗೂ ಪಶ್ಚಿಮ ಭಾಗಗಳಲ್ಲಿ ಹಿಂಸಾಚಾರ ಭುಗಿಲೆದ್ದಿದೆ ಎಂಬಂತಹ ಪೋಸ್ಟ್ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಟ್ವೀಟ್ ಮಾಡುವ ಮೂಲಕ ಪ್ರತಿಕ್ರಿಯೆ ನೀಡಿರುವ ದೆಹಲಿ ಪೊಲೀಸರು, ಯಾವ ರೂಮರ್ಗಳನ್ನೂ ಯಾರೂ ನಂಬಬೇಡಿ. ಇಡೀ ದೆಹಲಿ ಸಹಜಸ್ಥಿತಿಗೆ ಮರಳಿದೆ. ಎಲ್ಲೂ ಹಿಂಸಾಚಾರ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಅಷ್ಟೇ ಅಲ್ಲ, ಹೀಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವವರ ಬಗ್ಗೆ ದೆಹಲಿ ಪೊಲೀಸರು ನಿಗಾ ಇಟ್ಟಿದ್ದು, ಅವರ ವಿರುದ್ಧ ನಿಶ್ಚಿತವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ದೆಹಲಿ ಪೊಲೀಸ್ ಪಿಆರ್ಒ ಎಂ.ಎಸ್.ರಾಂಧವಾ ಅವರು ದೆಹಲಿ ಜನರು ಶಾಂತಿಯನ್ನು ಕಾಪಾಡಿ ಎಂದು ಮನವಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಷ್ಟ್ರರಾಜಧಾನಿಯಲ್ಲಿ ಹಿಂಸಾಚಾರ ನಿಯಂತ್ರಣಕ್ಕೆ ಬಂದಿದೆ. ಅಷ್ಟಾದರೂ ರೂಮರ್ಗಳನ್ನು ಹಬ್ಬಿಸುತ್ತಿರುವವರ ವಿರುದ್ಧ ಕ್ರಮವಹಿಸುತ್ತೇವೆ ಎಂದಿದ್ದಾರೆ.
ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸ್ಥಳ ಪರಿಶೀಲನಾ ಪ್ರಕ್ರಿಯೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ಸೋಷಿಯಲ್ ಮೀಡಿಯಾ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುತ್ತಿರುವ ಹಲವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಿಸಲಾಗಿದ್ದು, ಹೀಗೆ ಮುಂದುವರಿದರೆ ನಾವೂ ಕಠಿಣವಾಗಬೇಕಾಗುತ್ತದೆ ಎಂದು ಹೇಳಿದ್ದಾರೆ. (ಏಜೆನ್ಸೀಸ್)
Some unsubstantiated reports of tense situation in SouthEast & West District are being circulated on social media. It is to reiterate that these are all rumours. Don't pay attention to such rumours. Delhi Police is closely monitoring accounts spreading rumours and taking action.
— Delhi Police (@DelhiPolice) March 1, 2020