ಡೊನೇಷನ್‌ಗೆ ಕಡಿವಾಣ ಹಾಕಲು ಆಗ್ರಹ

ಚಾಮರಾಜನಗರ: ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಹೆಚ್ಚಿನ ಡೊನೇಷನ್ ಪಡೆಯುತ್ತಿದ್ದು, ಇದರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದ ಗೇಟ್ ಆವರಣದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಅಲ್ಲಿಂದ ಜಿಲ್ಲಾಡಳಿತ ಭವನ ತನಕ ಮೆರವಣಿಗೆಯಲ್ಲಿ ತೆರಳಿ ಪ್ರತಿಭಟನೆ ನಡೆಸಿದರು. ಜಿಲ್ಲಾಡಳಿತ, ಡಿಡಿಪಿಐ, ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಧಿಕ್ಕಾರ ಕೂಗಿದರು.

ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಜಿಲ್ಲೆಯ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣದ ಹೆಸರಿನಲ್ಲಿ ಪಾಲಕರಿಂದ ಹೆಚ್ಚಿನ ಡೊನೇಷನ್ ಪಡೆಯಲಾಗುತ್ತಿದೆ. ಇದರಿಂದಾಗಿ ಜಿಲ್ಲೆಯ ಬಡ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಡೊನೇಷನ್ ಹೆಸರಲ್ಲಿ ಹಗಲು ದರೋಡೆ ಮಾಡುತ್ತಿವೆ ಎಂದು ಕಿಡಿಕಾರಿದರು.

ಶಿಕ್ಷಣ ಸಂಸ್ಥೆಗಳ ಜತೆಯಲ್ಲಿ ಜಿಲ್ಲಾಡಳಿತ, ಶಿಕ್ಷಣ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದು, ಡೊನೇಷನ್ ದಂಧೆಗೆ ಸಹಕಾರ ನೀಡುತ್ತಿದ್ದಾರೆ. ಕೆಲ ಶಿಕ್ಷಣ ಸಂಸ್ಥೆಗಳು ನೇರವಾಗಿ ಡೊನೇಷನ್ ಪಡೆಯದೆ ತಮ್ಮ ಬ್ಯಾಂಕ್‌ಗಳ ಖಾತೆಗೆ ಪಾಲಕರಿಂದ ಹಣ ಪಡೆಯುತ್ತಿದ್ದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ತನಿಖೆ ಮಾಡಿಸಿ ಅವರ ಆಸ್ತಿಯನ್ನು ಸರ್ಕಾರ ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಒತ್ತಾಯಿಸಿದರು.
ಹಿಂದಿನ ಜಿಲ್ಲಾಧಿಕಾರಿ ಅವರು ಪ್ರತಿವರ್ಷ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಸಭೆ ಕರೆದು ಅವರಿಗೆ ಡೊನೇಷನ್, ಶಾಲಾ ಶುಲ್ಕದ ಬಗ್ಗೆ ಕಟ್ಟುನಿಟ್ಟಾಗಿ ಆದೇಶ ಪಾಲಿಸುವಂತೆ ಸೂಚನೆಗಳನ್ನು ನೀಡುತ್ತಿದ್ದರು. ಕಳೆದ 2 ವರ್ಷಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳ ಸಭೆ ಕರೆದಿಲ್ಲ. ಕೂಡಲೇ ಜಿಲ್ಲಾಧಿಕಾರಿ ಅವರು ಸಭೆ ಕರೆದು ಡೊನೇಷನ್‌ಗೆ ಕಡಿವಾಣ ಹಾಕಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್ ಅವರಿಗೆ ಮನವಿ ಸಲ್ಲಿಸಿ ಪ್ರತಿಭಟನೆಯನ್ನು ಅಂತ್ಯಗೊಳಿಸಲಾಯಿತು. ಪ್ರತಿಭಟನೆಯಲ್ಲಿ ಕನ್ನಡಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಮುರಳಿ, ಪದಾಧಿಕಾರಿಗಳಾದ ನಾಗರಾಜು, ಪುರುಷೋತ್ತಮ್, ನಿಜಧ್ವನಿ ಗೋವಿಂದರಾಜು, ಶಿವರಾಜ್, ನಟರಾಜು, ನಂಜುಂಡಸ್ವಾಮಿ, ನಂಜುಂಡಸ್ವಾಮಿ, ಶಿವಶಂಕರ್‌ನಾಯಕ, ಶಿವಕುಮಾರ್, ತಾಂಡವಮೂರ್ತಿ, ಸ್ವಾಮಿ, ರಾಜು, ಸಿದ್ದರಾಜು, ಶಿವಣ್ಣ, ರಾಜಶೇಖರ್ ಇತರರಿದ್ದರು.