More

    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

    ಹನೂರು: ಕಾಡು ಪ್ರಾಣಿಗಳ ಹಾವಳಿ ತಡೆಗಟ್ಟುವುದು ಸೇರಿದಂತೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಸೋಮವಾರ ರೈತ ಸಂಘ ಹಾಗೂ ಹಸಿರು ಸೇನೆಯ ಪದಾಧಿಕಾರಿಗಳು ರೈತರ ಜತೆಗೂಡಿ ತಾಲೂಕಿನ ಲೊಕ್ಕನಹಳ್ಳಿ ಗ್ರಾಮದಲ್ಲಿ ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.
    ಗ್ರಾಮದ ಅರಣ್ಯ ಇಲಾಖೆ ಕಚೇರಿ ಮುಂಭಾಗದ ರಸ್ತೆಯಲ್ಲಿ ಜಮಾಯಿಸಿದ್ದ ನೂರಾರು ರೈತರು ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಈ ವೇಳೆ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಒಡೆಯರಪಾಳ್ಯ, ಪಿ.ಜಿ ಪಾಳ್ಯ, ಬೋರೆದೊಡ್ಡಿ, ಬೂದಿಪಡಗ, ಆಂಡಿಪಾಳ್ಯ ಹಾಗೂ ಈ ಭಾಗದ ಇನ್ನಿತರೆ ಗ್ರಾಮಗಳಲ್ಲಿ ಕಾಡು ಪ್ರಾಣಿಗಳು ಜಮೀನಿಗೆ ನುಗ್ಗಿ ಫಸಲನ್ನು ಹಾಳು ಮಾಡುತ್ತಿರುವ ಘಟನೆಗಳು ಇತ್ತೀಚೆಗೆ ಹೆಚ್ಚಾಗಿವೆ. ಆದರೆ ಸರ್ಕಾರದಿಂದ ಬೆಳೆನಷ್ಟಕ್ಕೆ ಅನುಗುಣವಾಗಿ ಪರಿಹಾರ ಸಿಗುತ್ತಿಲ್ಲ. ಇತ್ತ ಹಂದಿ ದಾಳಿಯಿಂದಾದ ಬೆಳೆನಷ್ಟಕ್ಕೆ ಪರಿಹಾರ ನೀಡುತ್ತಿಲ್ಲ. ಇದರಿಂದ ರೈತರು ನಷ್ಟವನ್ನು ಅನುಭವಿಸಬೇಕಾಗಿದೆ. ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಇತ್ತ ಸ್ಥಳೀಯ ಶಾಸಕರು ರೈತರ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ ಇದು ಎಷ್ಟರ ಮಟ್ಟಿಗೆ ಸರಿ? ಜತೆಗೆ ರೈತರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕಳೆದ ವಾರದ ಹಿಂದೆ ಮಹದೇಶ್ವರ ಬೆಟ್ಟದಿಂದ ಚಾಮರಾಜನಗರಕ್ಕೆ ಕೈಗೊಂಡಿದ್ದ ಪಾದಯಾತ್ರೆಯ ಸಂಬಂಧ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅವರು, ಸಮಸ್ಯೆಗಳಿದ್ದರೆ ನಮ್ಮ ಗಮನಕ್ಕೆ ತನ್ನಿ. ಸಮಸ್ಯೆಯನ್ನು ಬಗೆಹರಿಸಲಾಗುವುದು. ಯಾವುದೇ ಕಾರಣಕ್ಕೂ ಪ್ರತಿಭಟನೆ ಬೇಡ ಎಂದು ತಿಳಿಸಿದ್ದರು. ಆದರೆ ಯಾವುದೇ ಕ್ರಮ ವಹಿಸಿಲ್ಲ. ಈ ದಿಸೆಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಕೂಡಲೇ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಹೋರಾಟ ಮುಂದುವರಿಕೆ: ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಮಲೆಮಹದೇಶ್ವರ ವನ್ಯಜೀವಿ ವಿಭಾಗದ ಎಸಿಎಫ್ ಶಶಿಧರ್, ಬಿಆರ್‌ಟಿಯ ನಂದಗೋಪಾಲ್ ಅವರನ್ನು ರೈತರು ತೀವ್ರ ತರಾಟೆಗೆ ತೆಗೆದುಕೊಂಡರು. ಆದರೆ ಯಾವುದೇ ಅಧಿಕಾರಿಗಳಿಂದ ಯಾವುದೇ ಅಗತ್ಯ ಭರವಸೆ ಸಿಗಲಿಲ್ಲ. ಇದರಿಂದ ರೊಚ್ಚಿಗೆದ್ದ ಪ್ರತಿಭಟನಕಾರರು ಸ್ಥಳಕ್ಕೆ 2 ವಿಭಾಗದ ಡಿಸಿಎಫ್‌ಗಳು ಸ್ಥಳಕ್ಕಾಗಮಿಸಿ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ಮುಂದುವರಿಸಲಾಗುವುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದು, ಮಂಗಳವಾರವೂ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ.

    ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಸೋಮಣ್ಣ, ಚಿಕ್ಕರಾಜು, ಶ್ರೀನಿವಾಸ್, ಕುಮಾರ್, ಮನೋಹರ್, ನವೀನ್, ಪ್ರಕಾಶ್, ರಾಜಶೇಖರ್, ಮಾದೇವ ಹಾಗೂ ಇನ್ನಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts