More

    ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳಕ್ಕೆ ವಿರೋಧ ; ಜಿಲ್ಲೆಯ ಹಲವೆಡೆ ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

    ತುಮಕೂರು : ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜೆಡಿಎಸ್ ಜಿಲ್ಲಾ ಘಟಕದ ನೇತೃತ್ವದಲ್ಲಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಲಾಯಿತು.

    ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಸೋಮವಾರ ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ಇಂಧನ ಬೆಲೆಗಳ ಹೆಚ್ಚಳದಿಂದ ಜನಸಾಮಾನ್ಯರ ಬದುಕು ದುಸ್ತರವಾಗಿದೆ. ಇನ್ನೂ ರಸಗೊಬ್ಬರ ದರ ಹೆಚ್ಚಳದಿಂದ ಅನ್ನದಾತ ಕಂಗಾಲಾಗಿದ್ದಾನೆ ಎಂದು ಆಕ್ರೋಶ ಹೊರಹಾಕಿದರು.

    ಜಿಲ್ಲಾಧ್ಯಕ್ಷ ಆರ್.ಸಿ.ಆಂಜನಪ್ಪ ಮಾತನಾಡಿ, ಕರೊನಾ ಸಂಕಷ್ಟದಿಂದ ಪಾರಾಗಲು ಲಾಕ್‌ಡೌನ್ ಜಾರಿಗೊಳಿಸಿದ ಪರಿಣಾಮ ಲಕ್ಷಾಂತರ ಜನರು ಕೆಲಸ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಎಲ್ಲ ವಲಯಗಳು ಆರ್ಥಿಕ ಸಂಕಷ್ಟಕ್ಕೀಡಾಗಿರುವ ಸಂದರ್ಭದಲ್ಲೇ ಕೇಂದ್ರ ಸರ್ಕಾರ ನಿರಂತರವಾಗಿ ಇಂಧನ ಬೆಲೆಗಳ ಹೆಚ್ಚಳದಿಂದ ಜನಸಾಮಾನ್ಯರು ಪರದಾಡುವಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ. ಮೇ 4 ರಿಂದ ಈವರೆಗೆ 24 ಬಾರಿ ತೈಲ ಬೆಲೆ ಹೆಚ್ಚಳ ಮಾಡಿ ಲೀಟರ್ ಪೆಟ್ರೋಲ್ ಬೆಲೆ 100 ರೂ., ದಾಟಿದೆ. ಡಿಸೇಲ್ ಕೂಡ ಶತಕದ ಸಮೀಪ ಧಾವಿಸಿದೆ ಎಂದು ಹರಿಹಾಯ್ದರು.

    ರಸಗೊಬ್ಬರ ಬೆಲೆ ಹೆಚ್ಚಳದಿಂದ ಕೈ ಸುಟ್ಟು ಕೊಂಡಿರುವ ರೈತ ತೈಲಬೆಲೆ ಹೆಚ್ಚಳದಿಂದ ಇನ್ನಷ್ಟು ಸಂಕಷ್ಟಕ್ಕೆ ಸಿಲುಕಿದ್ದಾನೆ. ಕೇಂದ್ರ ಸರ್ಕಾರ ಇನ್ನಾದರೂ ಇಂಧನ, ರಸಗೊಬ್ಬರ ಬೆಲೆ ಕಡಿತ ಮಾಡಬೇಕು. ಕರೊನಾದಿಂದ ಮೃತಪಟ್ಟ ಕುಟುಂಬಗಳಿಗೆ 5 ಲಕ್ಷ ರೂ., ಪರಿಹಾರಧನ ನೀಡಬೇಕು ಎಂದು ಒತ್ತಾಯಿಸಿದರು.

    ಕರೊನಾದಿಂದ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಮನವಿ ಮಾಡಿದರೆ ನಮ್ಮ ಬಳಿ ಹಣವಿಲ್ಲವೆನ್ನುವ ಸಿಎಂ ಯಡಿಯೂರಪ್ಪನವರ ಬಳಿ ಶಾಸಕರನ್ನು ಖರೀದಿಸಲು ಮಾತ್ರ ಹಣವಿದೆ. ಇಂಧನಗಳ ಮೇಲೆ ಹತ್ತಾರು ಬಾರಿ ತೆರಿಗೆ ವಿಧಿಸಿದರೂ ಯಾವೊಬ್ಬ ಮಂತ್ರಿ, ಸಂಸದರು ಮಾತನಾಡುತ್ತಿಲ್ಲ. ಅಧಿಕಾರ ಯಾರಿಗೂ ಶಾಶ್ವತವಲ್ಲ ಎಂಬುದನ್ನು ಬಿಜೆಪಿಯವರು ಅರ್ಥಮಾಡಿಕೊಳ್ಳಲಿ ಎಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts