ದೇವದುರ್ಗ: ನಿರಂತರವಾಗಿ ಮಳೆಯಾಗುತ್ತಿದೆ. ಪಟ್ಟಣ ಸೇರಿ ತಾಲೂಕಿನ ವಿವಿಧೆಡೆ ಸಾಂಕ್ರಾಮಿಕ ರೋಗಗಳು ಹರಡಬಹುದು. ಅಲ್ಲದೆ ವಾಂತಿ-ಭೇದಿ ಪ್ರಕರಣ ಕಂಡುಬರುವ ಸಾಧ್ಯತೆ ಇರುತ್ತದೆ. ಸಾಂಕ್ರಾಮಿಕ ರೋಗಗಳ ಬಗ್ಗೆ ಅಧಿಕಾರಿಗಳು ಎಚ್ಚರಿಕೆವಹಿಸಿ ಜನರಿಗೆ ಅರಿವು ಮೂಡಿಸಬೇಕು ಎಂದು ತಹಸೀಲ್ದಾರ್ ಚನ್ನಮಲ್ಲಪ್ಪ ಘಂಟಿ ಸೂಚಿಸಿದರು.
ಪಟ್ಟಣದ ಮಿನಿವಿಧಾನಸೌಧದಲ್ಲಿ ಆಯೋಜಿಸಿದ್ದ ವಾಂತಿ-ಭೇದಿ ಹಾಗೂ ಡೆಂಘೆ ತಡೆಗಾಗಿ ಅಂತರ್ ಇಲಾಖೆಗಳ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಶುಕ್ರವಾರ ಮಾತನಾಡಿದರು. ಮಳೆಗಾಲ ಪ್ರಾರಂಭವಾಗಿದೆ. ಸಾಂಕ್ರಾಮಿಕ ರೋಗಗಳ ನಿಯಂತ್ರಣ ಎಲ್ಲರ ಜವಾಬ್ದಾರಿ. ಯಾವುದೇ ವಾಂತಿ-ಭೇದಿ ಪ್ರಕರಣ ಕಂಡುಬಂದರೆ ತಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡುವಂತೆ ತಿಳಿಸಿದರು.
ಗ್ರಾಪಂಯಲ್ಲಿ ಪ್ರತಿವಾರ ಆರೋಗ್ಯ ಇಲಾಖೆ, ಗ್ರಾಪಂ ಅಧಿಕಾರಿಗಳು ಸಭೆ ನಡೆಸಿ ವ್ಯಾಪ್ತಿಯಲ್ಲಿ ರೋಗಗಳ ನಿಯಂತ್ರಣ ಬಗ್ಗೆ ಅರಿವು ಮೂಡಿಸಬೇಕು ಎಂದು ಸೂಚಿಸಿದರು.
ಕುಷ್ಠರೋಗ ನಿರ್ಮೂಲನೆ ವಿಭಾಗ ನೋಡಲ್ ಅಧಿಕಾರಿ ಡಾ.ಯಶೋದಾ ಮಾತನಾಡಿ, ಗ್ರಾಮೀಣ ಭಾಗದ ಜನರಿಗೆ ಗ್ರಾಪಂ ಸಮರ್ಪಕ ಶುದ್ಧ ಕುಡಿವ ನೀರು ಪೂರೈಕೆ ಮಾಡಬೇಕು. ಕಲುಷಿತ ನೀರು ಸೇವನೆ, ಸೊಳ್ಳೆಗಳ ಕಡಿತದಿಂದ ನಾನಾ ರೋಗ ಬರುತ್ತವೆ. ಸಾಂಕ್ರಾಮಿಕ ರೋಗಗಳು ಹರಡದಂತೆ ತಡೆಯಲು ಹೊಳೆನೀರು ಹಾಗೂ ಬೋರ್‌ವೆಲ್ ನೀರು ಕುದಿಸಿ, ಸೋಸಿ ಕುಡಿಯಬೇಕು. ವಯಕ್ತಿಕ ಶುಚಿತ್ವ ಕಾಪಾಡಿಕೊಳ್ಳಬೇಕು ಎನ್ನುವ ಬಗ್ಗೆ ಜಾಗೃತಿ ಮೂಡಿಸುವ ಜತೆಗೆ ವಾರಕ್ಕೊಮ್ಮೆ ಗ್ರಾಮೀಣ ಭಾಗದಲ್ಲಿ ಫಾಗಿಂಗ್ ಮಾಡಬೇಕು ಎಂದು ತಾಕೀತು ಮಾಡಿದರು.
ಟಿಎಚ್‌ಒ ಡಾ.ಬನದೇಶ್ವರ ಮಾತನಾಡಿ, ಜು.29ರಿಂದ ಆ.14ರವರೆಗೆ ಕುಷ್ಠರೋಗ ಪತ್ತೆ ಹಚ್ಚುವ ಆಂದೋಲನ ಮತ್ತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಲಿದೆ. ಕುಷ್ಠರೋಗ ನಿರ್ಮೂಲನೆ ಮಾಡಲು ವಿವಿಧ ಇಲಾಖೆಗಳ ಸಹಕಾರ ಅಗತ್ಯವಿದೆ ಎಂದರು. ಪುರಸಭೆ ಮುಖ್ಯಾಧಿಕಾರಿ ಕೆ.ಹಂಪಯ್ಯ, ಗ್ರೇಡ್-2 ತಹಸೀಲ್ದಾರ್ ಗೋವಿಂದ ನಾಯಕ, ಆರೋಗ್ಯ ಇಲಾಖೆ ಅಧಿಕಾರಿ ಗೀತಮ್ಮ ಇತರರಿದ್ದರು.