More

    ದೇವದುರ್ಗದಲ್ಲಿ 12 ರಿಂದ 14ರವರೆಗೆ ಹಾಲುಮತ ಸಂಸ್ಕೃತಿ ವೈಭವ – ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಮಾಹಿತಿ

    ರಾಯಚೂರು: ದೇವದುರ್ಗ ತಾಲೂಕಿನ ಕಾಗಿನೆಲೆ ಕನಕ ಗುರುಪೀಠದಲ್ಲಿ ಜ.12 ರಿಂದ 14ರವರೆಗೆ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುರುಪೀಠದ ಧರ್ಮದರ್ಶಿ ಹಾಗೂ ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ತಿಳಿಸಿದರು.

    ಸ್ಥಳೀಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಗುರುಪೀಠದ ಸಿದ್ಧರಾಮಾನಂದ ಸ್ವಾಮೀಜಿ ನೇತೃತ್ವದಲ್ಲಿ ಹಾಲುಮತ ಪರಂಪರೆ ಜೀವಂತವಾಗಿಡುವ ನಿಟ್ಟಿನಲ್ಲಿ ಮೂರು ದಿನಗಳ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

    ಜ.12ರಂದು ಬೆಳಗ್ಗೆ 9ಕ್ಕೆ 108 ದೇವ ಭಂಡಾರ ಪೂಜೆ ನಡೆಯಲಿದ್ದು, ಮಧ್ಯಾಹ್ನ 12ಕ್ಕೆ ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ಥಾಮೀಜಿ, ಪಂಚಮಸಾಲಿ ಗುರುಪೀಠದ ಜಯಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ಹಾಲುಮತ-ಗಂಗಾಮತ ಸಮಾವೇಶ ನಡೆಯಲಿದೆ. ಮಾಜಿ ಸಚಿವ ಬಾಬುರಾವ್ ಚಿಂಚನಸೂರು ಉದ್ಘಾಟನೆ ನೆರವೇರಿಸಲಿದ್ದಾರೆ.

    ಜ.13ರಂದು ಬೆಳಗ್ಗೆ 11.30ಕ್ಕೆ ಆದಿವಾಸಿ ಸಂಸ್ಕೃತಿ ಸಮಾವೇಶ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ಫಗ್ಗನ್‌ಸಿಂಗ್ ಕುಲಸ್ತೆ, ರೇಣುಕಾಸಿಂಗ್ ಸರುತಾ, ಸಚಿವ ಬಿ.ಶ್ರೀರಾಮುಲು, ಮಾಜಿ ಸಚಿವ ಎಚ್.ವಿಶ್ವನಾಥ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಕನಕ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದೆ.

    14ರಂದು ಬೆಳಗ್ಗೆ 11ಕ್ಕೆ ರೇವಣಸಿದ್ಧೇಶ್ವರ ಹಾಗೂ ಸಿದ್ಧರಾಮೇಶ್ವರ ಸ್ಮರಣೋತ್ಸವ ಕಾರ್ಯಕ್ರಮ ನಡೆಯಲಿದ್ದು, ಹೊಸದುರ್ಗ ಕನಕಗುರುಪೀಠದ ಈಶ್ವರಾನಂದಪುರಿ ಸ್ವಾಮೀಜಿ, ಭಗೀರಥ ಪೀಠದ ಪುರುಷೋತ್ತಮಾನಂದಪುರಿ ಸ್ವಾಮೀಜಿ, ಸಿದ್ಧರಾಮೇಶ್ವರ ಗುರುಪೀಠದ ಇಮ್ಮಡಿ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಮಾಜಿ ಸಚಿವ ಶಿವರಾಜ ತಂಗಡಗಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಕೆ.ವಿರೂಪಾಕ್ಷಪ್ಪ ತಿಳಿಸಿದರು. ಹಾಲುಮತ ಸಮುದಾಯದ ಮುಖಂಡರಾದ ಎಂ.ಈರಣ್ಣ, ಬಿ.ಬಸವರಾಜ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts