

ಮುಂಬೈ: ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಸರ್ಕಾರದ ಭಾಗವಾಗಬೇಕು ಎಂದು ಬಿಜೆಪಿಯ ಕೇಂದ್ರ ನಾಯಕತ್ವ ನಿರ್ಧರಿಸಿದೆ. ಹೀಗಾಗಿ, ಅವರಿಗೆ ವೈಯಕ್ತಿಕ ಮನವಿ ಮಾಡಿದ್ದು, ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.
ಮಹಾರಾಷ್ಟ್ರ ರಾಜಕೀಯ ಬೆಳವಣಿಗೆಯಲ್ಲಿ ಅಚ್ಚರಿಯೆಂಬಂತೆ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೇ ಮುಖ್ಯಮಂತ್ರಿ ಪಟ್ಟ ನೀಡಲು ತೀರ್ಮಾನಿಸಲಾಗಿದೆ. ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ಉಪಮುಖ್ಯಮಂತ್ರಿ ಯಾಗಿ ಅಧಿಕಾರ ವಹಿಸಿಕೊಳ್ಳಬೇಕು ಎಂದು ಕೇಂದ್ರ ನಾಯಕರು ತಿಳಿಸಿದ್ದಾರೆ.
ಕೊನಕ್ಷಣದಲ್ಲಿ ಸಿಎಂ ಪಟ್ಟ; ಮುಖ್ಯಮಂತ್ರಿಯಾಗಿದ್ದ ಉದ್ಧವ್ ಠಾಕ್ರೆ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂದು ರಾತ್ರಿ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಆದರೆ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಿಸಬೇಕಿದ್ದ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಅವರಿಗೇ ಮುಖ್ಯಮಂತ್ರಿ ಪಟ್ಟ ನೀಡಲು ತೀರ್ಮಾನಿಸಲಾಗಿದೆ.
ಈ ಕುರಿತು ಪತ್ರಿಕಾಗೋಷ್ಠಿ ಕರೆದ ಫಡ್ನವಿಸ್ ಮಾಹಿತಿ ನೀಡಿದ್ದಾರೆ. ಸದ್ಯ ಏಕನಾಥ್ ಶಿಂಧೆ ಅವರನ್ನು ಮುಖ್ಯಮಂತ್ರಿ ಮಾಡಲು ನಿರ್ಧರಿಸಲಾಗಿದೆ. ಉಳಿದ ಬೆಳವಣಿಗೆಗಳ ಕುರಿತು ನಂತರದಲ್ಲಿ ಚರ್ಚಿಸಲಾಗುವುದು ಎಂದಿದ್ದಾರೆ.
ರಾತ್ರಿ ಪ್ರಮಾಣವಚನ: ಇಂದು ರಾತ್ರಿ 7.30ಕ್ಕೆ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದೂ ಅವರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಏಕನಾಥ ಶಿಂಧೆ, ಸಂಖ್ಯಾಬಲದ ಆಧಾರದ ಮೇಲೆ ಫಡ್ನವಿಸ್ ಅವರೇ ಮುಖ್ಯಮಂತ್ರಿಯಾಗಬಹುದಿತ್ತು. ಆದರೆ ಅವರು ವಿಶಾಲ ಹೃದಯವಂತಿಕೆ ಮೆರೆದಿದ್ದು, ನನ್ನನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅವರಿಗೆ ನಾನು ಧನ್ಯವಾದ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರಿಗೂ ಸಹ ಏಕನಾಥ ಶಿಂಧೆ ಧನ್ಯವಾದ ಅರ್ಪಿಸಿದ್ದಾರೆ.