More

    ಮಹಿಳೆಯರ ಸಬಲೀಕರಣಕ್ಕೆ ಧರ್ಮಸ್ಥಳ ಯೋಜನೆ ನೆರವು

    ಶನಿವಾರಸಂತೆ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗ್ರಾಮೀಣ ಭಾಗದ ಮಹಿಳೆಯರ ಆರ್ಥಿಕ, ಶೈಕ್ಷಣಿಕ, ಕೃಷಿ, ಆರೋಗ್ಯ, ಸಾಮಾಜಿಕ ಸಬಲೀಕರಣ ಜತೆಯಲ್ಲಿ ಧಾರ್ಮಿಕ ತಳಹದಿಯಲ್ಲೂ ಕಾರ್ಯನಿರ್ವಹಿಸುತ್ತಿರುವ ದೇಶದ ಏಕೈಕ ಸಾಮಾಜಿಕ ಸೇವಾ ಸಂಸ್ಥೆಯಾಗಿದೆ ಎಂದು ತಪೋಕ್ಷೇತ್ರ ಮನೆಹಳ್ಳಿ ಮಠದ ಮಠಾಧೀಶ ಮಹಾಂತ ಶಿವಲಿಂಗ ಸ್ವಾಮೀಜಿ ಅಭಿಪ್ರಾಯಪಟ್ಟರು.


    ಈಚಲಬೀಡು ಶಾಲಾ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್, ಸಾಮೂಹಿಕ ಸತ್ಯನಾರಾಯಣ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಸ್ಥಳೀಯ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಧಾರ್ಮಿಕ ಸಭೆಯಲ್ಲಿ ಮಾತನಾಡಿದರು.


    ಮಹಿಳೆಯರು ಆತ್ಮಸ್ಥೈರ್ಯದೊಂದಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಸದೃಢರಾದರೆ ಸಮಾಜದಲ್ಲಿ ಸುಖಿ ಜೀವನ ನಡೆಸಬಹುದೆಂಬ ಮೂಲ ಆಶಯ ಇಟ್ಟುಕೊಂಡು ಗ್ರಾಮಾಭಿವೃದ್ಧಿ ಯೋಜನೆಯನ್ನು ಸ್ಥಾಪಿಸಿದ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ಕನಸು ನನಸಾಗಿದೆ ಎಂದು ಹೇಳಿದರು.


    ಧರ್ಮಸ್ಥಳ ಯೋಜನೆಯು ಗ್ರಾಮೀಣ ಪ್ರದೇಶಗಳಲ್ಲಿ ಹತ್ತು ಹಲವು ಯೋಜನೆಗಳ ಮೂಲಕ ಗ್ರಾಮೀಣ ಭಾಗವನ್ನು ಅಭಿವೃದ್ಧಿಗೊಳಿಸಲು ಸರ್ಕಾರದ ಜತೆ ಕೈಜೋಡಿಸುತ್ತಿದೆ. ಜತೆಯಲ್ಲಿ ಧಾರ್ಮಿಕ, ಜಾತ್ಯತೀತವಾಗಿ ಧರ್ಮದ ತಳಹದಿಯಲ್ಲಿ ಬೆರೆಯಲು ಅವಕಾಶ ಮಾಡಿಕೊಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


    ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ಮೈಸೂರು ಪ್ರಾದೇಶಿಕ ನಿರ್ದೇಶಕ ಬಿ.ಜಯರಾಮ ನೆಲ್ಲಿತ್ತಾಯ ಮಾತನಾಡಿ, ಗ್ರಾಮೀಣ ಮಹಿಳೆಯರ ಆರ್ಥಿಕ ಸದೃಢತೆ, ಆರ್ಥಿಕ ಸಶಕ್ತೀಕರಣ, ಗ್ರಾಮಾಭಿವೃದ್ಧಿ ಪರಿಕಲ್ಪನೆಯಲ್ಲಿ 4 ದಶಕಗಳ ಹಿಂದೆ ಸ್ಥಾಪಿಸಿದ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರ ಮೂಲ ಉದ್ದೇಶ ಹಲವಾರು ಕಾರ್ಯಕ್ರಮಗಳ ಮೂಲಕ ಗ್ರಾಮೀಣ ಪ್ರದೇಶದಲ್ಲಿ ಶೇ.75ರಷ್ಟು ಪ್ರಗತಿ ಸಾಧಿಸುತ್ತಿದೆ ಎಂದು ತಿಳಿಸಿದರು.


    ಈಚಲಬೀಡು ಸಾಮೂಹಿಕ ಸತ್ಯನಾರಾಯಣ ಪೂಜೆ ಸಮಿತಿ ಅಧ್ಯಕ್ಷ ಇ.ಎ.ಮೋಹನ್ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಪ್ರಾಂಶುಪಾಲ ಎಂ.ನಾಗೇಶ್, ಈಚಲಬೀಡು ಗ್ರಾಮಾಭಿವೃದ್ಧಿ ಸಮಿತಿ ಅಧ್ಯಕ್ಷ ಇ.ಆರ್.ದೊಡ್ಡೇಗೌಡ, ಹಾಸನ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರ್ದೇಶಕಿ ಮಮತಾ ಹರೀಶ್‌ರಾವ್, ಹೊಸೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಮತಾ, ಯೋಜನಾಧಿಕಾರಿ ಕೆ.ಪುರುಷೋತ್ತಮ್, ಆರ್.ಪಿ.ಲಕ್ಷ್ಮಣ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts