ಖಾಸಗಿ ಸಂಸ್ಥೆಗಳ ಚಟುವಟಿಕೆಗಳಿಗೆ ಪೂರ್ವಾನುಮತಿ ಕಡ್ಡಾಯ; ಸರ್ಕಾರದ ಆದೇಶಕ್ಕೆ Dharwad Highcourt ತಡೆಯಾಜ್ಞೆ

highcourt
Published on

ಬೆಂಗಳೂರು: ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳು ತನ್ನ ಚಟುವಟಿಕೆಗಳನ್ನು ನಡೆಸುವ ಮುನ್ನ ಪೂರ್ವಾನುಮತಿ ಪಡೆಯುವುದು ಕಡ್ಡಾಯ ಎಂಬ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ (Dharwad Highcourt ) ಮಂಗಳವಾರ (ಅ 28) ಮಧ್ಯಂತರ ತಡೆ ನೀಡಿದೆ.

ಸರ್ಕಾರದ ಆದೇಶವನ್ನು ಪ್ರಶ್ನಿಸಿ ಪುನಶ್ಚೈತನ್ಯ ಸೇವಾ ಸಂಸ್ಥೆ ಅರ್ಜಿ ಸಲ್ಲಿಸಿದ್ದು, ಈ ಕ್ರಮವು ಖಾಸಗಿ ಸಂಸ್ಥೆಗಳು ಕಾನೂನುಬದ್ಧ ಚಟುವಟಿಕೆಗಳನ್ನು ನಡೆಸುವ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ವಾದಿಸಿತು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠವು, ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಮುಂದಿನ ವಿಚಾರಣೆಯನ್ನು ನವೆಂಬರ್ 17ಕ್ಕೆ ಮುಂದೂಡಿದೆ.

ಅಕ್ಟೋಬರ್​ ಆರಂಭದಲ್ಲಿ ಹೊರಡಿಸಲಾದ ಸರ್ಕಾರಿ ಆದೇಶವು (Government Order) ಸಾರ್ವಜನಿಕ ಮತ್ತು ಸರ್ಕಾರಿ ಸ್ವಾಮ್ಯದ ಆಸ್ತಿಗಳನ್ನು ಹೇಗೆ ಬಳಸಬಹುದು ಎಂಬುದರ ಕುರಿತು ವಿವರವಾದ ಮಾರ್ಗಸೂಚಿಗಳನ್ನು ಒಳಗೊಂಡಿತ್ತು. ಯಾವುದೇ ಖಾಸಗಿ ಅಥವಾ ಸಾಮಾಜಿಕ ಸಂಸ್ಥೆಗಳು ಸರ್ಕಾರಿ ಶಾಲೆಗಳು, ಕಾಲೇಜು ಮೈದಾನಗಳು ಮತ್ತು ಇತರ ಸಾಂಸ್ಥಿಕ ಸ್ಥಳಗಳಲ್ಲಿ ಆಯಾ ಇಲಾಖೆಗಳ ಮುಖ್ಯಸ್ಥರ ಲಿಖಿತ ಅನುಮತಿ ಇಲ್ಲದೆ ಯಾವುದೇ ಕಾರ್ಯಕ್ರಮಗಳನ್ನು, ಸಭೆಗಳನ್ನು ನಡೆಸುವಂತಿಲ್ಲ ಎಂದು ಆದೇಶ ಹೇಳುತ್ತದೆ. ಇದರ ಉಲ್ಲಂಘನೆಗಳನ್ನು ಮೇಲ್ವಿಚಾರಣೆ ಮಾಡಲು ಮತ್ತು ಕ್ರಮ ಕೈಗೊಳ್ಳಲು ಕರ್ನಾಟಕ ಭೂ ಕಂದಾಯ ಮತ್ತು ಶಿಕ್ಷಣ ಕಾಯ್ದೆಗಳ ಅಡಿಯಲ್ಲಿ ಜಿಲ್ಲಾಡಳಿತಗಳಿಗೆ ನಿರ್ದೇಶನ ನೀಡಿದೆ.

ಕರ್ನಾಟಕ ಸರ್ಕಾರದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸರ್ಕಾರದ ಈ ಕ್ರಮವು ಯಾವುದೇ ನಿರ್ದಿಷ್ಟ ಸಂಸ್ಥೆಯನ್ನು ಗುರಿಯಾಗಿಸಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಈ ಸಂಸ್ಥೆ ಅಥವಾ ಆ ಸಂಸ್ಥೆಯ ಬಗ್ಗೆ ನಿರ್ದಿಷ್ಟವಾಗಿ ಏನೂ ಇಲ್ಲ, ಸರ್ಕಾರಿ ಅಥವಾ ಸಾಂಸ್ಥಿಕ ಆಸ್ತಿಗಳನ್ನು ಸರಿಯಾದ ಅನುಮತಿಯೊಂದಿಗೆ ಮತ್ತು ಸರಿಯಾದ ಉದ್ದೇಶಕ್ಕಾಗಿ ಮಾತ್ರ ಬಳಸಲಾಗುವುದು. ಇದರ ಹೊರತಾಗಿಯೂ ನಿಯಮಗಳನ್ನು ಉಲ್ಲಂಘಿಸಿದರೆ, ಅಸ್ತಿತ್ವದಲ್ಲಿರುವ ಕಾನೂನುಗಳ ಅಡಿಯಲ್ಲಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದರು.

ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್, ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಸಾರ್ವಜನಿಕ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ನಿಷೇಧಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬರೆದ ಪತ್ರವನ್ನು ಉಲ್ಲೇಖಿಸಿ ಸರ್ಕಾರ ಈ ಆದೇಶ ಹೊರಡಿಸಿತ್ತು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net