More

    ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ ಬಿಜೆಪಿ ಪ್ರೇರಿತ

    ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನಿವಾಸ ಮತ್ತು ಕಚೇರಿಗಳ ಮೇಲೆ ಸೋಮವಾರ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರುವುದನ್ನು ಖಂಡಿಸಿ ಬೆಳಗಾವಿ ನಗರದ ಚನ್ನಮ್ಮ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

    ಕೇಂದ್ರ ಸರ್ಕಾರವು ತನ್ನ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಮತ್ತು ಪ್ರತಿ ಪಕ್ಷಗಳಿಗೆ ಬೆದರಿಕೆ ಹಾಕುವ ಉದ್ದೇಶದಿಂದಲೇ ಸಿಬಿಐ, ಐಟಿ ದಾಳಿ ನಡೆಸಿಕೊಂಡು ಬರುತ್ತಿದೆ. ಇದೀಗ ಕರ್ನಾಟಕದಲ್ಲಿ ಶಿರಾ ಮತ್ತು ಆರ್‌ಆರ್‌ನಗರ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆ ಎದುರಿಸಲು ಸಾಧ್ಯವಾಗದೆ ರಾಜಕೀಯ ದುರುದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ ನಿವಾಸದ ಮೇಲೆ ಸಿಬಿಐ ದಾಳಿ ನಡೆಸಲು ಸೂಚಿಸಿದೆ ಎಂದು ಕಾರ್ಯಕರ್ತರು ಆರೋಪಿಸಿದರು.

    ಕಳೆದ ಬಾರಿಯೂ ರಾಜ್ಯಸಭಾ ಚುನಾವಣೆಯ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ ನಿವಾಸ ಮತ್ತು ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ನಡೆಸಿದ್ದರು. ಇದೀಗ ಉಪ ಚುನಾವಣೆ ಸಂದರ್ಭದಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ದಾಳಿಗಳ ಹಿಂದೆ ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳ ಪಾತ್ರವಿದೆ. ರಾಜಕೀಯವಾಗಿ ಕಾಂಗ್ರೆಸ್ ಎದುರಿಸಲು ಸಾಧ್ಯವಾಗದೆ ಬಿಜೆಪಿ ತನಿಖಾ ಸಂಸ್ಥೆಗಳನ್ನು ಮುಂದಿಟ್ಟುಕೊಂಡು ದಾಳಿ ನಡೆಸುತ್ತಿದೆ. ಇಂತಹ ದಾಳಿಗಳಿಗೆ ಕಾಂಗ್ರೆಸ್ ನಾಯಕರು, ಪಕ್ಷ ಯಾವತ್ತೂ ಹೆದರುವುದಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಾರ್ಯಕರ್ತರು ಘೋಷಣೆ ಕೂಗಿದರು. ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮೃಣಾಲ್ ಹೆಬ್ಬಾಳ್ಕರ್, ತಾಲೂಕು ಪಂಚಾಯಿತಿ ಅಧ್ಯಕ್ಷ ಶಂಕರಗೌಡ ಪಾಟೀಲ, ಎಪಿಎಂಸಿ ಅಧ್ಯಕ್ಷ ಯುವರಾಜ್ ಕದಂ ಕಾರ್ಯಕರ್ತರು ಉಪಸ್ಥಿತರಿದ್ದರು.

    ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ನಿವಾಸ ಮತ್ತು ಕಚೇರಿಗಳ ಮೇಲೆ ನಡೆದಿರುವ ಸಿಬಿಐ ದಾಳಿ ಯಾವುದೇ ರಾಜಕೀಯ ಪ್ರೇರಿತವಲ್ಲ. ಉಪ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ಈ ದಾಳಿಗೆ ಬಣ್ಣ ಹಚ್ಚಿ ಬಿಜೆಪಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಸತ್ಯವನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ.
    | ಈರಣ್ಣ ಕಡಾಡಿ ರಾಜ್ಯಸಭಾ ಸದಸ್ಯ

    ಬೆಂಗಳೂರಿನ ಆರ್‌ಆರ್‌ನಗರ ಮತ್ತು ತುಮಕೂರಿನ ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಂದರ್ಭದಲ್ಲಿ ನಮಗೆ ಡಿಸ್ಟರ್ಬ್ ಮಾಡಲೆಂದೇ ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರ ಸ್ವಾಯತ್ತ ಸಂಸ್ಥೆಗಳನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ನಮ್ಮದು ದೊಡ್ಡ ಪಕ್ಷ. ಇಂತಹ ದಾಳಿಗಳಿಗೆ ಹೆದರುವುದಿಲ್ಲ. ಸಿಬಿಐ ದಾಳಿ ಎದುರಿಸುವ ಸಾಮರ್ಥ್ಯ ಡಿ.ಕೆ. ಶಿವಕುಮಾರ ಅವರಿಗಿದೆ.
    | ಸತೀಶ ಜಾರಕಿಹೊಳಿ ಕೆಪಿಸಿಸಿ ಕಾರ್ಯಾಧ್ಯಕ್ಷ

    ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪ ಚುನಾವಣೆ ಸಂದರ್ಭದಲ್ಲಿ ರಾಜಕೀಯ ಉದ್ದೇಶವಿಟ್ಟುಕೊಂಡು ಬಿಜೆಪಿ ಸರ್ಕಾರ ಸಿಬಿಐ ಅಧಿಕಾರಿಗಳನ್ನು ಬಳಸಿಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಮತ್ತು ಸಂಸದ ಡಿ.ಕೆ.ಸುರೇಶ ಅವರ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ. ಇಂತಹ ದಾಳಿಗಳನ್ನು ಎದುರಿಸುವ ಶಕ್ತಿ ನಮ್ಮ ಪಕ್ಷದ ನಾಯಕರಿಗಿದೆ.
    | ಲಕ್ಷ್ಮೀ ಹೆಬ್ಬಾಳ್ಕರ್ ಶಾಸಕಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts