

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ಕುರಿತು ಸರಣಿ ಟ್ವೀಟ್ ಮಾಡುವ ಮುಖೇನ ವ್ಯಂಗ್ಯವಾಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಬಿಜೆಪಿಯ ಬಿ ಟೀಂ ಜೆಡಿಎಸ್ ಎಂದು ನಾವು ಅನೇಕ ಬಾರಿ ಹೇಳಿದ್ದೆವು ಎಂದು ಟ್ವೀಟ್ನಲ್ಲಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ದಿನೇಶ್ ಗುಂಡೂರಾವ್, "ಈಗ ಎಚ್.ಡಿ. ಕುಮಾರಸ್ವಾಮಿ ಅವರು ನಮ್ಮ ಮಾತು ಸತ್ಯ ಎಂಬುದನ್ನು ನಿರೂಪಿಸಲು ಹೊರಟಿದ್ದಾರೆ. ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ ಸಿದ್ದಾಂತಗಳಿಲ್ಲ. ಕೋಮುವಾದಿ ಪಕ್ಷ ಬಿಜೆಪಿ ಜತೆಗೆ ಮೈತ್ರಿ ಮಾಡಿಕೊಳ್ಳಲು ಹೊರಟಿರುವ ಜನತಾದಳಗೆ ಯಾವ ಸಿದ್ದಾಂತವಿದೆ? ಅದೊಂದು ಅವಕಾಶವಾದಿ ಪಕ್ಷ. ಅಧಿಕಾರಕ್ಕಾಗಿ ಯಾರ ಜೊತೆಗಾದರೂ ಸೈ" ಎಂದು ಟ್ವೀಟ್ ಮಾಡಿದ್ದಾರೆ.
"ಜೆಡಿಎಸ್ ಮುಂದಿರುವ ಜಾತ್ಯಾತೀತ ಎಂಬ ಪದ ಕೇವಲ ಸೋಗಲಾಡಿತನವಷ್ಟೆ. 2006 ರಲ್ಲಿ ಬಿಜೆಪಿ ಜತೆ ಸೇರಿ 20-20 ಸರ್ಕಾರ ಮಾಡಿದಾಗಲೇ ಜಾತ್ಯಾತೀತ ತತ್ವಕ್ಕೆ ಎಚ್ಡಿಕೆ ಎಳ್ಳು ನೀರು ಬಿಟ್ಟಿದ್ದರು. ಆಗಲೇ ಜೆಡಿಎಸ್ನ ಅವನತಿ ಶುರುವಾಗಿದ್ದು. 2004 ರಲ್ಲಿ 59 ಸ್ಥಾನ ಗೆದ್ದಿದ್ದ ಜನತಾದಳ ಈ ಬಾರಿ 19 ಸ್ಥಾನಕ್ಕೆ ಕುಸಿಯಲು ಈ ನಕಲಿ ಜಾತ್ಯಾತೀತ ಸಿದ್ದಾಂತವೇ ಕಾರಣ" ಎಂದು ಟ್ವೀಟ್ನಲ್ಲಿ ಉಲ್ಲೇಖಿಸಿದ್ದಾರೆ.
"ಬಿಜೆಪಿಗೆ ವಿಪಕ್ಷ ನಾಯಕನ ಎರವಲು ಸೇವೆ ನೀಡುತ್ತಿರುವ ಕುಮಾರಸ್ವಾಮಿ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬದಲು ವಿಲೀನ ಮಾಡಿಕೊಳ್ಳಲಿ. ಆಗ ತಾವೇ ಅಧಿಕೃತವಾಗಿ ವಿಪಕ್ಷ ನಾಯಕನಾಗಬಹುದು. ಈ ಮೂಲಕವಾದರೂ ಎಚ್ಡಿಕೆ ಅವರ ಸುಳ್ಳು ಜಾತ್ಯಾತೀತತೆಯ ನಕಲಿ ಶ್ಯಾಮನ ಅವತಾರ ಕೊನೆಯಾಗಲಿ" ಎಂದು ಟ್ವೀಟ್ ಮುಖೇನ ವ್ಯಂಗ್ಯವಾಡಿದ್ದಾರೆ.