More

    ಕರೊನಾ ಮಾರ್ಗಸೂಚಿ ಉಲ್ಲಂಸದಿರಿ : ಸಂಸದ ಬಿ.ಎನ್.ಬಚ್ಚೇಗೌಡ ಕಿವಿಮಾತು

    ಬೆಂಗಳೂರು ಗ್ರಾಮಾಂತರ: ಕರೊನಾ ಮೂರನೇ ಅಲೆ ತೀವ್ರತೆ ತಡೆಯಲು, ಜಿಲ್ಲೆಯಲ್ಲಿ ಕೋವಿಡ್ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಬೇಕು. ಕೋವಿಡ್ ಪರೀಕ್ಷೆ ಹೆಚ್ಚಿಸಿ, ಲಸಿಕಾಕರಣ ವೇಗಗೊಳಿಸಬೇಕು ಸಂಸದ ಬಿ.ಎನ್.ಬಚ್ಚೇಗೌಡ ತಿಳಿಸಿದರು.

    ದೇವನಹಳ್ಳಿ ತಾಲೂಕಿನ ಬೀರಸಂದ್ರದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 2021-22ನೇ ಸಾಲಿನ ದಿಶಾ ಪ್ರಗತಿ ಪರಿಶೀಲನಾ ಸಭೆ ಹಾಗೂ ಸಂಸದರ ಆದರ್ಶ ಗ್ರಾಮ ಯೋಜನೆಯಡಿ ಆಯ್ಕೆಯಾಗಿರುವ ಗಣಗಲೂರು ಗ್ರಾಪಂ ಅಭಿವೃದ್ಧಿ ಕಾಮಗಾರಿಗಳ ಅಭಿವೃದ್ಧಿ ಯೋಜನೆ ಕುರಿತ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

    ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣ ನೂರರಷ್ಟು ಪ್ರಗತಿ ಸಾಧಿಸಬೇಕು. 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ,ಬೂಸ್ಟರ್ ಡೋಸ್ ಆರಂಭಗೊಂಡಿದ್ದು, ಶೀಘ್ರವಾಗಿ ಪ್ರಗತಿ ಸಾಧಿಸಬೇಕು ಎಂದರು. ಸರ್ಕಾರದ ನಿರ್ದೇಶನದಂತೆ 15ನೇ ಹಣಕಾಸು ಯೋಜನೆ ಅನುದಾನವನ್ನು ಗ್ರಾಪಂಗಳಲ್ಲಿ ಮಾಸ್ಕ್ ವಿತರಣೆ, ಸ್ಯಾನಿಟೈಸ್ ಮಾಡಲು, ಚರಂಡಿ ಸ್ವಚ್ಛತೆ, ಘನತ್ಯಾಜ್ಯ ವಿಲೇವಾರಿ ವಾಹನ ಖರೀದಿ, ಕೋವಿಡ್ ನಿಯಂತ್ರಣ ಕಾರ್ಯಕ್ರಮಗಳಿಗೆ ಬಳಸಿಕೊಳ್ಳಬಹುದು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಸ್ವ-ಇಚ್ಛೆಯಿಂದ ನೀಲಗಿರಿ ಮರ ತೆರವುಗೊಳಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಆಂದೋಲನದ ಮೂಲಕ ಅರಿವು ಮೂಡಿಸಬೇಕು. ನೀಲಗಿರಿ ತೆರವು ಜಾಗದಲ್ಲಿ ಮಹಾಗನಿ, ಹೆಬ್ಬೇವು, ತೆಂಗು, ರಕ್ತಚಂದನ ಸಸಿ ಬೆಳೆಸಲು ರೈತರನ್ನು ಉತ್ತೇಜಿಸಬೇಕು ಎಂದರು. ಕೆರೆಯಂಗಳದಲ್ಲಿ ಬೆಳೆದಿರುವ ಜಾಲಿ ಮರಗಳನ್ನು ಹರಾಜು ಮೂಲಕ ತೆರವುಗೊಳಿಸಿ, ಅದರಿಂದ ಬರುವ ಆದಾಯವನ್ನು ಸ್ಥಳೀಯ ಸಂಸ್ಥೆಗಳಿಗೆ ಅಥವಾ ಸರ್ಕಾರಕ್ಕೆ ಸಂದಾಯ ಮಾಡಬೇಕು ಎಂದು ತಿಳಿಸಿದರು.

    ಬೇಸಿಗೆ ಸಮೀಪಿಸುತ್ತಿದ್ದು, ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಜಿಲ್ಲೆಯ ನಾಲ್ಕು ಶಾಸಕರಿಂದ ಸರ್ಕಾರಕ್ಕೆ ಮನವಿ ಸಲ್ಲಿಸಿ, ಹೆಚ್ಚಿನ ಅನುದಾನ ತರುವ ಮೂಲಕ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದರು. ಜಿಲ್ಲೆಯ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಆಫ್‌ಲೈನ್‌ಅಥವಾ ಆನ್‌ಲೈನ್ ಮೂಲಕ ತರಗತಿಗಳನ್ನು ಉತ್ತಮವಾಗಿ ನಡೆಸಬೇಕು ಹಾಗೂ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಕೋವಿಡ್ ನಿಯಮಾನುಸಾರ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಪರೀಕ್ಷೆ ನಡೆಸಬೇಕು ಎಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

    ಮಳೆ ಹಾನಿ ಹಾಗೂ ಬೆಳೆ ಹಾನಿ ಪರಿಹಾರ ವಿತರಣೆಯಲ್ಲಿ ವಿಳಂಬ ತೋರದೆ, ಶೀಘ್ರ ಪರಿಹಾರ ನೀಡಬೇಕು. ರೇಷ್ಮೆ, ತೋಟಗಾರಿಕೆ ಬೆಳೆಗಳ ವಿಸ್ತರಣೆಗೆ ಕ್ರಮ ಕೈಗೊಳ್ಳಬೇಕು ಎಂದರು. ಹೊಸದಾಗಿ ಜಾರಿಗೆ ತಂದಿರುವ ರೈತ ಮಕ್ಕಳಿಗೆ ನೀಡಲಾಗುವ ವಿದ್ಯಾರ್ಥಿ ವೇತನ ಕಾರ್ಯಕ್ರಮವನ್ನು ಕೃಷಿ ಇಲಾಖೆ ಅನುಷ್ಠಾನಗೊಳಿಸಬೇಕು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ವಿಜಯಾ ಇ.ರವಿಕುಮಾರ್, ಜಿಪಂ ಉಪ ಕಾರ್ಯದರ್ಶಿ ಸಿ.ಎಂ.ಮುನಿಕೃಷ್ಣಪ್ಪ, ಮುಖ್ಯ ಯೋಜನಾಧಿಕಾರಿ ನರಸಿಂಹ ಎಂ.ಆರ್., ಮುಖ್ಯ ಲೆಕ್ಕಾಧಿಕಾರಿ ರಮೇಶರೆಡ್ಡಿ, ಯೋಜನಾ ನಿರ್ದೇಶಕ ನಾಗರಾಜು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts