More

    ಶೀಘ್ರ ಎಲ್ಲ ಕಡತಗಳು ವಿಲೇವಾರಿ: ಸಂಸದ ಬಿ.ವೈ.ರಾಘವೇಂದ್ರ

    ಬೈಂದೂರು: ಬೈಂದೂರು ಪಟ್ಟಣ ಪಂಚಾಯಿತಿ ಅಭಿವೃದ್ಧಿ ಕಾರ್ಯಗಳ ಬಗ್ಗೆ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ ನೇತೃತ್ವದಲ್ಲಿ ಬುಧವಾರ ಕೊಲ್ಲೂರಿನ ಅಮ್ಮ ವಿಶ್ರಾಂತಿಗೃಹದಲ್ಲಿ ಅಧಿಕಾರಿಗಳ ಸಭೆ ನಡೆಯಿತು.
    ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಯೋಜನಾ ಪ್ರಾಧಿಕಾರದ 60ರಿಂದ 70ಕ್ಕೂ ಅಧಿಕ ಕಡತಗಳು ವಿಲೇವಾರಿಯಾಗದ ಹಿನ್ನೆಲೆಯಲ್ಲಿ ಬಡವರು ಮನೆ ನಿರ್ಮಿಸಿಕೊಳ್ಳಲು ಸಂಕಷ್ಟ ಎದುರಿಸುವಂತಾಗಿದೆ ಎಂದು ಬಿ.ವೈ.ರಾಘವೇಂದ್ರ ಯೋಜನಾ ಪ್ರಾಧಿಕಾರದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಶೀಘ್ರ ಎಲ್ಲ ಕಡತಗಳನ್ನು ವಿಲೇವಾರಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕು ಎಂದು ಎಚ್ಚರಿಸಿದರು.
    ಪ್ರಗತಿ ಹೊಂದುತ್ತಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗುವಂತೆ ಕೊಲ್ಲೂರಿನಲ್ಲಿ ಸುಮಾರು 6.5 ಕೋಟಿ ರೂ. ವೆಚ್ಚದಲ್ಲಿ ವರ್ತುಲ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ. ಲೋಕೋಪಯೋಗಿ ಇಲಾಖೆಯಿಂದ ಸರ್ವೇ ಕಾರ್ಯ ನಡೆದಿದ್ದು, ಭೂಸ್ವಾಧೀನಕ್ಕೆ 3.5 ಕೋಟಿ ರೂ. ಹಾಗೂ 3 ಕೋಟಿ ರೂ. ವೆಚ್ಚದಲ್ಲಿ ರಿಂಗ್ ರಸ್ತೆ ಅಭಿವೃದ್ಧಿಪಡಿಸಲಾಗುವುದು ಎಂದರು.

    ಚತುಷ್ಪಥ ಹೆದ್ದಾರಿ ಅಸಮರ್ಪಕ ಕಾಮಗಾರಿಯಿಂದ ಬೈಂದೂರು ಭಾಗದಲ್ಲಿ ಸರ್ವೀಸ್ ರಸ್ತೆ, ಚರಂಡಿ, ಬೀದಿದೀಪದ ಸಮಸ್ಯೆಯಿಂದ ಜನ ಹೈರಾಣಾಗಿದ್ದಾರೆ. ಮಳೆಗಾಲದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರವಾಗುತ್ತಿವೆ. ಈ ಬಗ್ಗೆ ತುರ್ತು ಅಗತ್ಯ ಕ್ರಮ ಕೈಗೊಳ್ಳಬೇಕು. ಜನರಿಗೆ ಅನುಕೂಲವಾಗುವಂತೆ ಕಾಮಗಾರಿ ಕೈಗೆತ್ತಿಕೊಳ್ಳಬೇಕು ಎಂದು ತಾಕೀತು ಮಾಡಿದರು.
    ಜಿಲ್ಲಾಧಿಕಾರಿ ಜಿ.ಜಗದೀಶ, ಡಿಎಫ್‌ಒ ಆಶಿಷ್ ರೆಡ್ಡಿ, ಕುಂದಾಪುರ ಸಹಾಯಕ ಕಮಿಷನರ್ ಕೆ.ರಾಜು, ರಮೇಶ, ಜಿಪಂ ಸದಸ್ಯರಾದ ಶಂಕರ ಪೂಜಾರಿ, ಕೆ.ಬಾಬು ಶೆಟ್ಟಿ, ರೋಹಿತ್ ಶೆಟ್ಟಿ ಉಪಸ್ಥಿತರಿದ್ದರು.

    ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಆರ್‌ಜಡ್ ಮಿತಿಯನ್ನು ವಿಸ್ತರಿಸಬೇಕೆಂಬ ಬೇಡಿಕೆಯಿದ್ದು, ಇದರ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲಾಗಿದೆ. ಬೈಂದೂರು ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಸಜ್ಜಿತ ರುದ್ರಭೂಮಿ ನಿರ್ಮಾಣಕ್ಕೆ 5.56 ಎಕರೆ ಹಾಗೂ ಕಸ ವಿಲೇವಾರಿಗೆ 8.6 ಎಕರೆ ಜಾಗ ಗುರುತಿಸಲಾಗಿದ್ದು, ಕಟ್ಟಡ ಸೇರಿದಂತೆ ಅಗತ್ಯ ಮೂಲಸೌಕರ್ಯಗಳಿಗಾಗಿ ಅನುದಾನ ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು.
    | ಬಿ.ವೈ.ರಾಘವೇಂದ್ರ, ಶಿವಮೊಗ್ಗ ಸಂಸದ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts