More

    ಎಲ್ಲ ವಿದ್ಯಾರ್ಥಿಗಳಿಗೂ ಲ್ಯಾಪ್​ಟಾಪ್ ವಿತರಿಸಿ

    ಅಕ್ಕಿಆಲೂರ: ದ್ವಿತೀಯ ಮತ್ತು ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್ ವಿತರಣೆಯಲ್ಲಿ ಸರ್ಕಾರ ಮೀನಮೇಷ ಎಣಿಸುತ್ತಿದೆ ಎಂದು ಆರೋಪಿಸಿ ಪಟ್ಟಣದ ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ಹಾಗೂ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಗಳ ಕಾರ್ಯಕರ್ತರು ಶುಕ್ರವಾರ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

    ನೇತೃತ್ವ ವಹಿಸಿದ್ದ ವಿದ್ಯಾರ್ಥಿ ಅನಿಲಕುಮಾರ ಎಂ. ಜೆ. ಮಾತನಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಪದವಿ ಕಲಿಯುತ್ತಿರುವ ಮೊದಲ ವರ್ಷ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಲ್ಯಾಪ್ ಟಾಪ್ ವಿತರಿಸುತ್ತಿದ್ದಾರೆ. ಇದರಿಂದ ದ್ವಿತೀಯ ಮತ್ತು ಅಂತಿಮ ವರ್ಷ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ. ಪದವಿಯ ಅಂತಿಮ ಹಂತದಲ್ಲಿರುವ ವಿದ್ಯಾರ್ಥಿಗಳಿಗೆ ಲ್ಯಾಪ್​ಟಾಪ್ ಅಗತ್ಯವಾಗಿರುತ್ತದೆ. ಆದ್ದರಿಂದ ಮುಖ್ಯಮಂತ್ರಿಗಳು ನಿಲುವು ಬದಲಿಸಿ, ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್​ಟಾಪ್ ವಿತರಿಸಲು ಕ್ರಮ ಕೈಗೊಳ್ಳಬೇಕು ಎಂದರು.

    ವಿದ್ಯಾರ್ಥಿಗಳು ಶಿರಸಿ -ಹಾವೇರಿ ರಾಜ್ಯ ಹೆದ್ದಾರಿ ತಡೆದು ಆಕ್ರೋಶ ವ್ಯಕ್ತ ಪಡಿಸಿದ್ದರಿಂದ ಸುಮಾರು ಮೂರು ಕಿಲೋಮೀಟರ್ ರಸ್ತೆ ಸಂಚಾರ ಸ್ಥಗಿತವಾಗಿತ್ತು. ಪ್ರತಿಭಟನೆಯ ಮಾಹಿತಿ ತಾಲೂಕು ಪೊಲೀಸ್ ಅಧಿಕಾರಿಗಳು ಮತ್ತು ತಹಸೀಲ್ದಾರ್ ಕಚೇರಿಗೆ ತಿಳಿಸಿದ್ದರೂ ಯಾವ ಅಧಿಕಾರಿಗಳು ಮನವಿ ಸ್ವೀಕರಿಸಲು ಆಗಮಿಸಿರಲಿಲ್ಲ. ಇದರಿಂದ ವಿದ್ಯಾರ್ಥಿಗಳ ಆಕ್ರೋಶ ಮತ್ತಷ್ಟು ತೀವ್ರವಾಗಿತ್ತು. ನಂತರ ಪ್ರತಿಭಟನೆ ಸ್ಥಳಕ್ಕಾಗಮಿಸಿದ ಪ್ರಚಾರ್ಯ ಮಲ್ಲಿಕಾರ್ಜುನ ಕಡ್ಡಿಪುಡಿ, ವಿದ್ಯಾರ್ಥಿಗಳ ಮನವೊಲಿಸಿ, ಈ ಕುರಿತು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಮನವಿ ತಲುಪಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು.

    ವಿದ್ಯಾರ್ಥಿಗಳಾದ ಶ್ರೀಧರ ಪರಶಿಕ್ಯಾತಿ, ಸಾಗರ ಕೋರಿ, ಚೇತನ ಪಾಟೀಲ, ಪ್ರವೀಣ ಸಂಗೂರ, ಸುನೀಲ ಬೊಮ್ಮಣ್ಣನವರ, ಸುನೀಲ ಬರಡಿ, ಚಿನ್ಮಯ, ವಾಣಿ ಹಾಗೂ ನೂರಾರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts