More

    ಮತದಾನದಲ್ಲಿ ಹಿಂದುಳಿದ ಮಹಿಳೆಯರು

    ದಾವಣಗೆರೆ: ನಗರ ಪ್ರದೇಶದಲ್ಲಿ ಮಹಿಳಾ ಮತದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಿದೆ. ಆದರೆ, ಹಕ್ಕು ಚಲಾವಣೆಯಲ್ಲಿ ಮಾತ್ರ ಮಹಿಳೆಯರು ಹಿಂದುಳಿದಿದ್ದಾರೆ ಎಂದು ಜಿಪಂ ಸಿಇಒ, ಸ್ವೀಪ್ ಸಮಿತಿ ಅಧ್ಯಕ್ಷ ಸುರೇಶ್ ಬಿ. ಇಟ್ನಾಳ್ ಹೇಳಿದರು.

    ಪಿಬಿ ರಸ್ತೆಯ ಡಿಆರ್‌ಆರ್ ಶಾಲೆ ಬಳಿ ಶನಿವಾರ ಜಿಲ್ಲಾಡಳಿತದಿಂದ ಮತದಾನ ಜಾಗೃತಿಗಾಗಿ ಹಮ್ಮಿಕೊಂಡಿದ್ದ ಮಹಿಳೆಯರ ಬೈಕ್ ರ‌್ಯಾಲಿ ಕಾರ್ಯಕ್ರಮದಲ್ಲಿ ಮಾತನಾಡಿ, ನಗರ ಪ್ರದೇಶದ ಯಾವ ಸ್ಥಳಗಳಲ್ಲಿ ಕಡಿಮೆ ಮತದಾನವಾಗಿದೆ ಎನ್ನುವುದನ್ನು ಗುರುತಿಸಿ, ಅಲ್ಲಿ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

    ಮತದಾನ ಪ್ರತಿಯೊಬ್ಬ ಪ್ರಜೆಯ ಹಕ್ಕು. ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ 18 ವರ್ಷ ತುಂಬಿದ ಎಲ್ಲರೂ ತಮ್ಮ ಹಕ್ಕನ್ನು ಚಲಾಯಿಸಬೇಕು. ಅದರಲ್ಲಿಯೂ ಹೆಣ್ಣುಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು ಎಂದು ತಿಳಿಸಿದರು.

    ಮಹಿಳಾ ಬೈಕ್ ರ‌್ಯಾಲಿಗೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ರಾಜೇಶ್ವರಿ ಎನ್. ಹೆಗಡೆ ಚಾಲನೆ ನೀಡಿದರು.

    ಜಾಗೃತಿ ಜಾಥಾದಲ್ಲಿ 200 ಬೈಕ್‌ಗಳು ಹಾಗೂ ನೂರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದ್ದರು. ರ‌್ಯಾಲಿಯು ಹೊಸ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ, ಭಗತ್‌ಸಿಂಗ್ ನಗರ, ಎಚ್‌ಕೆಆರ್ ಸರ್ಕಲ್, ದುರ್ಗಾಂಬಿಕಾ ದೇವಸ್ಥಾನದ ಮೂಲಕ ಐಟಿಐ ಗೇಟ್‌ವರೆಗೆ ಸಂಚರಿಸಿ ಮುಕ್ತಾಯಗೊಂಡಿತು.

    ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್, ಹೆಚ್ಚುವರಿ ಪೊಲೀಸ್ ಅಧಿಕಾರಿ ವಿಜಯಕುಮಾರ್ ಎಂ. ಸಂತೋಷ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ವಾಸಂತಿ ಉಪ್ಪಾರ್, ಪಾಲಿಕೆ ಆಯುಕ್ತೆ ರೇಣುಕಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts