More

    ಜಿಲ್ಲಾಸ್ಪತ್ರೆಯಲ್ಲಿ ಎಲ್ಲ ರೋಗಿಗಳಿಗೂ ಚಿಕಿತ್ಸೆ

    ಬೆಳಗಾವಿ: ಎಂಟು ತಿಂಗಳಿನಿಂದ ಕರೊನಾ ಸೋಂಕಿತರ ಚಿಕಿತ್ಸೆಗಾಗಿ ಮಾತ್ರ ಮೀಸಲಾಗಿದ್ದ ಜಿಲ್ಲಾಸ್ಪತ್ರೆ ಇದೀಗ ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಣಕ್ಕೆ ಬಂದಿದ್ದರಿಂದ ಮತ್ತೆ ಮೊದಲಿನಂತೆ ಪೂರ್ಣ ಪ್ರಮಾಣದಲ್ಲಿ ಹೊರ ರೋಗಿಗಳ ಚಿಕಿತ್ಸೆಗೆ ಅಣಿಯಾಗುತ್ತಿದೆ. ಆ ನಿಟ್ಟಿನಲ್ಲಿ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

    ಹೊರ ರೋಗಿಗಳ ಚಿಕಿತ್ಸಾ ಘಟಕ, ಐಸಿಯು, ಶಸ್ತ್ರಚಿಕಿತ್ಸಾ ವಿಭಾಗ ಸೇರಿ ಜಿಲ್ಲಾಸ್ಪತ್ರೆಯ ಎಲ್ಲ ಘಟಕಗಳನ್ನು ಮೊದಲಿನಂತೆ ಕಾರ್ಯಾರಂಭ ಮಾಡುವ ನಿಟ್ಟಿನಲ್ಲಿ ಶುಕ್ರವಾರ ಎಂಐಸಿಯು ಸೇರಿ ಇಡೀ ಆಸ್ಪತ್ರೆ ಸ್ವಚ್ಛಗೊಳಿಸಿ, ಸ್ಯಾನಿಟೈಸ್ ಮಾಡಲಾಯಿತು. ಉಳಿದಂತೆ ಬಿಮ್ಸ್ ನಿರ್ದೇಶಕರು ವೈದ್ಯಾಧಿಕಾರಿಗಳ ನಿಯೋಜನೆ, ಬೆಡ್ ಹಾಗೂ ಚಿಕಿತ್ಸಾ ಸಲಕರಣೆಗಳ ವ್ಯವಸ್ಥೆ ಮಾಡಲು ಸಿದ್ಧತೆ ನಡೆಸಿದ್ದಾರೆ.

    ಕರೊನಾ ಹಾವಳಿ ಶುರುವಾದಾಗಿನಿಂದ ಜನ ಸಾಮಾನ್ಯರಿಗೆ ಸಣ್ಣಪುಟ್ಟ ಕಾಯಿಲೆಗಳಿಗೂ ಚಿಕಿತ್ಸೆ ಗಗನ ಕುಸುಮವಾಗಿ, ತೀವ್ರ ತೊಂದರೆ ಅನುಭವಿಸುವಂತಾಗಿತ್ತು. ಈ ನಡುವೆ ಹಲವು ಸಂಘಟನೆಗಳು ಆಸ್ಪತ್ರೆಯಲ್ಲಿ ಇತರ ರೋಗಿಗಳಿಗೂ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದವು. ಸೋಂಕು ತಗುಲುವ ಆತಂಕದಿಂದ ಮುನ್ನೆಚ್ಚರಿಕೆ ಕ್ರಮವಾಗಿ ಇತರ ರೋಗಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಸ್ಥಗಿತಗೊಳಿಸಲಾಗಿತ್ತು. ಮತ್ತೆ ಜಿಲ್ಲಾಸ್ಪತ್ರೆಯ ಎಲ್ಲ ಘಟಕಗಳು ಕಾರ್ಯಾರಂಭ ಮಾಡುತ್ತಿರುವುದರಿಂದ ಇತರ ಕಾಯಿಲೆಗಳಿಂದ ಬಳಲುತ್ತಿರುವ ಬಡರೋಗಿಗಳಿಗೆ ಅನುಕೂಲವಾಗಲಿದೆ. ಖಾಸಗಿ ಆಸ್ಪತ್ರೆಗಳಿಗೆ ಜನರು ಅಲೆದಾಡುವುದು ತಪ್ಪಲಿದೆ.

    ವೈದ್ಯಕೀಯ ತಜ್ಞರ ಅಭಿಪ್ರಾಯದಂತೆ ಚಳಿಗಾಲದಲ್ಲಿ ಕರೊನಾ ಸೋಂಕು ಗಣನೀಯವಾಗಿ ಹರಡುವ ಸಾಧ್ಯತೆ ಇತ್ತು. ಆದರೆ, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮ ಮತ್ತು ಜನಜಾಗೃತಿಯಿಂದ ಸೋಂಕು ನಿಯಂತ್ರಣಕ್ಕೆ ಬಂದಿದೆ. ಆರೋಗ್ಯ ಇಲಾಖೆ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡು ಎಲ್ಲ ರೋಗಿಗಳಿಗೂ ಚಿಕಿತ್ಸೆ ನೀಡಲು ಸನ್ನದ್ಧಗೊಂಡಿದೆ.

    25 ಸಾವಿರ ಸೋಂಕಿತರ ಆರೈಕೆ: ಕುಡಚಿ, ಹಿರೇಬಾಗೇವಾಡಿ ಹಾಗೂ ಬೆಳಗಾವಿಯ ಕ್ಯಾಂಪ್ ಪ್ರದೇಶದ ಕೆಲವರಲ್ಲಿ ಏಪ್ರಿಲ್ ತಿಂಗಳಿನಲ್ಲಿ ಕರೊನಾ ಸೋಂಕು ಪತ್ತೆಯಾಗಿತ್ತು. ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ವಿಶೇಷ ವಾರ್ಡ್ ಆರಂಭಿಸಲಾಗಿತ್ತು.
    ದಿನೇದಿನೆ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದರಿಂದ ಇಡೀ ಜಿಲ್ಲಾಸ್ಪತ್ರೆಯನ್ನೇ ಕೊವಿಡ್-19 ಆಸ್ಪತ್ರೆಯನ್ನಾಗಿ ಪರಿವರ್ತಿಸಿ, ಈವರೆಗೂ ಸುಮಾರು 25 ಸಾವಿರಕ್ಕೂ ಅಧಿಕ ಸೋಂಕಿತರಿಗೆ ಚಿಕಿತ್ಸೆ ನೀಡಿ, ಆರೈಕೆ ಮಾಡಲಾಗಿದೆ.

    ಮಾರ್ಚ್ ತಿಂಗಳಾಂತ್ಯದಲ್ಲಿ ಜಿಲ್ಲೆಯಲ್ಲಿಯೇ ಮೊದಲು ಸೋಂಕು ದೃಢಪಟ್ಟಿದ್ದ ರೋಗಿ ಸಂಖ್ಯೆ 126 ಅವರನ್ನು ಏಪ್ರಿಲ್ ತಿಂಗಳ ಮೂರನೇ ವಾರದಲ್ಲಿ ಸೋಂಕಿನಿಂದ ಗುಣಮುಖರಾಗಿಸುವ ಮೂಲಕ ಜಿಲ್ಲಾ ರೋಗ್ಯ ಇಲಾಖೆ ಹಾಗೂ ಬಿಮ್ಸ್ ಸಿಬ್ಬಂದಿ ನಡೆಸಿದ ಕರೊನಾ ವಿರುದ್ಧದ ಹೋರಾಟದಲ್ಲಿ ಜಿಲ್ಲೆಯಲ್ಲಿನ ಜನತೆಗೆ ಧೈರ್ಯ ತುಂಬಿ, ಜ್ಲಿಲಾಡಳಿತದ ಜತೆಗೆ ಕೈ ಜೋಡಿಸಿ ಜಿಲ್ಲಾದ್ಯಂತ ಜಾಗೃತಿ ಮೂಡಿಸಿದ್ದರು.

    ಈಗಾಗಲೇ ಜಿಲ್ಲಾಸ್ಪತ್ರೆಯ ಎಲ್ಲ ಘಟಕಗಳನ್ನು ಕಾರ್ಯಾರಂಭ ಮಾಡಲು ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಜಿಲ್ಲೆಯಲ್ಲಿ ಕರೊನಾ ಸೋಂಕು ಇಳಿಮುಖವಾಗಿದೆಯೇ ಹೊರತು ಕೊನೆಗೊಂಡಿಲ್ಲ. ಹೀಗಾಗಿ, ಸಾರ್ವಜನಿಕರು ಇನ್ನೂ ಹೆಚ್ಚಿನ ಮುಂಜಾಗ್ರತೆ ವಹಿಸಬೇಕಿದೆ.
    | ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ

    ಇಷ್ಟು ದಿನ ಕೇವಲ ಕರೊನಾ ಸೋಂಕಿತರ ಚಿಕಿತ್ಸೆಗೆ ಮೀಸಲಾಗಿದ್ದ ಬಿಮ್ಸ್ ಆಸ್ಪತ್ರೆಯಲ್ಲಿ ದೀಪಾವಳಿ ಹಬ್ಬದ ನಂತರ ಎಲ್ಲ ರೋಗಿಗಳಿಗೂ ಚಿಕಿತ್ಸೆ ಲಭಿಸಲಿದೆ. ಈ ನಿಟಿನಲ್ಲಿ ಎಲ್ಲ ಸಿದ್ಧತೆ ನಡೆದಿದ್ದು, ಮುಂದಿನ ದಿನಗಳಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾದರೂ ಅವರಿಗೆಲ್ಲ ಪ್ರತ್ಯೇಕ ಕರೊನಾ ಘಟಕದ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
    | ಡಾ.ವಿನಯ ದಾಸ್ತಿಕೊಪ್ಪ, ಬಿಮ್ಸ್ ನಿರ್ದೇಶಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts