More

    ಮಳೆಹಾನಿ ಸಂತ್ರಸ್ತರಿಗೆ ಶೀಘ್ರ ಪರಿಹಾರ, ಜಿಲ್ಲಾಧಿಕಾರಿ ಸೂಚನೆ

    ಉಡುಪಿ: ಜಿಲ್ಲೆಯಲ್ಲಿ ಈವರೆಗೂ ರಸ್ತೆ, ಸೇತುವೆ, ಕೃಷಿ, ತೋಟಗಾರಿಕೆ ಬೆಳೆ, ಮನೆ ಹಾನಿ ಸೇರಿದಂತೆ ಅಂದಾಜು 334.2 ಕೋಟಿ ರೂಪಾಯಿಯಷ್ಟು ಹಾನಿಯಾಗಿದ್ದು, ಅತಿವೃಷ್ಟಿಯಿಂದ ಹಾನಿಗೊಳಗಾದ ಕೃಷಿ, ತೋಟಗಾರಿಕಾ ಬೆಳೆ, ಮನೆಹಾನಿಯ ಬಗ್ಗೆ ಅಧಿಕಾರಿಗಳು ಪರಿಶೀಲಿಸಿ ಶೀಘ್ರ ನಷ್ಟ ಪರಿಹಾರವನ್ನು ನೀಡಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಈವರೆಗೆ 5040 ಮಿ.ಮೀ. ಮಳೆಯಾಗಿದ್ದು, ವಾಡಿಕೆ ಮಳೆಗಿಂತ ಶೇ.16ರಷ್ಟು ಹೆಚ್ಚುವರಿ ಮಳೆಯಾಗಿದೆ. ಗ್ರಾಪಂ ವ್ಯಾಪ್ತಿಯಲ್ಲಿ ವಿಪತ್ತು ನಿರ್ವಹಣಾ ಸಮಿತಿಗಳನ್ನು ರಚಿಸಲಾಗಿದೆ ಎಂದರು.

    ನಾಲೆ ಒತ್ತುವರಿ ಪರಿಶೀಲನೆ: ನಗರ ವ್ಯಾಪ್ತಿಯಲ್ಲಿ ಹೆಚ್ಚಿನ ಮಳೆಯಿಂದಾಗಿ ತಗ್ಗು ಪ್ರದೇಶದಲ್ಲಿರುವ ಮನೆಗಳು ಮುಳುಗಿವೆ. ಇವುಗಳನ್ನು ಗುರುತಿಸಿಕೊಂಡಲ್ಲಿ ಮುಂದಿನ ದಿನಗಳಲ್ಲಿ ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ. ನೀರು ಸರಾಗವಾಗಿ ಹರಿಯಲು ನಾಲೆ ಸುವ್ಯವಸ್ಥೆಯಲ್ಲಿರುವಂತೆ ನೋಡಿಕೊಳ್ಳಬೇಕು. ಒತ್ತುವರಿಯಾಗಿರುವ ಬಗ್ಗೆಯೂ ಪರಿಶೀಲಿಸುವಂತೆ ನಗರಸಭೆಯ ಪೌರಾಯುಕ್ತರಿಗೆ ಜಿಲ್ಲಾಧಿಕಾರಿ ಸೂಚನೆ ನೀಡಿದರು.

    ಅಗ್ನಿಶಾಮಕ ದಳಕ್ಕೆ ಅಗತ್ಯವಿದ್ದಲ್ಲಿ ಹೆಚ್ಚಿನ ಬೋಟ್‌ಗಳನ್ನು ವಿಪತ್ತು ನಿರ್ವಹಣಾ ನಿಧಿಯಡಿಯಲ್ಲಿ ವ್ಯವಸ್ಥೆ ಮಾಡಲಾಗುವುದು ಹಾಗೂ ತರಬೇತಿಯನ್ನೂ ನೀಡಲಾಗುವುದು ಎಂದರು.
    ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ದಿನಕರ ಬಾಬು, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಕಿರಣ್ ಫೆಡ್ನೇಕರ್ ಉಪಸ್ಥಿತರಿದ್ದರು.

    ಅಜ್ಜರಕಾಡಿನಲ್ಲಿ ಕನ್ನಡ ರಾಜ್ಯೋತ್ಸವ
    ಪ್ರತಿ ವರ್ಷದಂತೆ ಈ ಬಾರಿಯೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಸರ್ಕಾರದ ಮಾರ್ಗಸೂಚಿಯಂತೆ ನಡೆಸಲಾಗುವುದು. ನವೆಂಬರ್ 1 ರಂದು ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವ ಕಾರ‌್ಯಕ್ರಮ ಆಯೋಜಿಸಲಾಗುತ್ತದೆ. ಕಳೆದ ವರ್ಷ ನಡೆದಂತೆ ನಡೆಸಲು ಎಲ್ಲಾ ರೀತಿಯ ತಯಾರಿ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts