More

    ಕ್ರೀಡೆಗಿಲ್ಲ ವಯಸ್ಸಿನ ಇತಿ-ಮಿತಿ: ಬಿ.ವೈ.ರಾಘವೇಂದ್ರ

    ಶಿವಮೊಗ್ಗ: ಕ್ರೀಡಾಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು ಯಾವುದೇ ವಯಸ್ಸಿನ ಇತಿ ಮಿತಿ ಇಲ್ಲ. ಕ್ರೀಡೆಗಳು ದೇಹ ಮತ್ತು ಮನಸ್ಸನ್ನು ಸದೃಢಗೊಳಿಸಲು ಸಹಕಾರಿ ಆಗುತ್ತವೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.
    ನಗರದ ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ವಿವಿಧ ಕ್ರೀಡಾ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಗುರುವಾರ ಪ್ರಸಕ್ತ ಸಾಲಿನ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.
    ಆರೋಗ್ಯವಂತರ ದೇಹದಲ್ಲಿ ಆರೋಗ್ಯಕರ ಮನಸ್ಸು ಇರುತ್ತದೆ. ಕ್ರೀಡೆಯಿಂದ ಇವೆರಡು ಸಾಧ್ಯವಾಗಲಿದೆ. ಮನಸ್ಸು ಉಲ್ಲಸಿತ ಮತ್ತು ಸಂತಸದಿಂದ ಇರಲು ಕ್ರೀಡೆ ಸಹಕಾರಿಯಾಗುತ್ತದೆ. ಆದ್ದರಿಂದ ಎಲ್ಲರೂ ಉತ್ಸಾಹದಿಂದ ನಾಡಹಬ್ಬ ದಸರಾ ಪ್ರಯುಕ್ತ ಹಮ್ಮಿಕೊಂಡಿರುವ ಕ್ರೀಡಾ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಕರೆ ನೀಡಿದರು.
    ಮೇಯರ್ ಸುನೀತಾ ಅಣ್ಣಪ್ಪ ಮಾತನಾಡಿ, ಬಹುಮಾನಕ್ಕಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಬಹುಮುಖ್ಯವಾಗಿದ್ದು, ಜಿಲ್ಲಾಮಟ್ಟದ ಈ ಕ್ರೀಡಾಕೂಟದಲ್ಲಿ ಎಲ್ಲರೂ ಸ್ಪರ್ಧಾತ್ಮಕ ಮನೋಭಾವ ಮತ್ತು ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಹೇಳಿದರು.
    ಜಂಗಲ್ ರೆಸಾರ್ಟ್ ನಿರ್ದೇಶಕ ರಾಜೇಶ್ ಕಾಮತ್, ಸಿಮ್ಸ್ ಆಡಳಿತ ಮಂಡಳಿ ನಿರ್ದೇಶಕ ದಿವಾಕರ್ ಶೆಟ್ಟಿ, ಜಿಪಂ ಮಾಜಿ ಸದಸ್ಯ ವೀರಭದ್ರಪ್ಪ ಪುಜಾರಿ, ಜಿಪಂ ಯೋಜನಾ ನಿರ್ದೇಶಕಿ ನಂದಿನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥಸ್ವಾಮಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts