More

    ಬಿಜೆಪಿಯಿಂದ ರೈತರ ಹಿತಾಸಕ್ತಿ ಕಡೆಗಣನೆ

    ಶಿವಮೊಗ್ಗ: ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆ ಬೆಂಬಲಿಸಿ ಜಿಲ್ಲಾ ಕಾಂಗ್ರೆಸ್ ಪ್ರಮುಖರು ಸೋಮವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಜಿ.ಅನುರಾಧಾ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

    ರೈತರ ಉತ್ಪನ್ನಗಳ ವ್ಯಾಪಾರ ಮತ್ತು ವಾಣಿಜ್ಯ ವಿನಿಮಯ, ಅಗತ್ಯ ವಸ್ತುಗಳ ಖರೀದಿ, ಕೃಷಿ ಉತ್ಪನ್ನಗಳ ಬೆಲೆ ಖಾತ್ರಿ ಒಪ್ಪಂದದ ಭರವಸೆ ಮತ್ತು ಕೃಷಿ ಸೇವೆಗಳ ಸುಗ್ರೀವಾಜ್ಞೆ ರೈತರಿಗೆ ಮಾರಕವಾಗಿದೆ. ಬಿಜೆಪಿ ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ಬಂಡವಾಳಶಾಹಿಗಳ ಪರವಾಗಿ ಗಟ್ಟಿಯಾಗಿ ನಿಂತಿರುವುದನ್ನು ಖಂಡಿಸುತ್ತಿದ್ದೇವೆ ಎಂದು ಪ್ರತಿಭಟನಾಕಾರರು ತಿಳಿಸಿದರು.

    ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದಿರುವ ಕೇಂದ್ರ ಸರ್ಕಾರ ರೈತರಿಗೆ ಮಾರಕವಾಗಿರುವ ಕಾನೂನುಗಳನ್ನು ಜಾರಿಗೆ ತಂದಿರುವುದು ಸರಿಯಲ್ಲ. ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ರೈತರ 15 ಬೇಡಿಕೆಗಳಲ್ಲಿ 12ನ್ನು ಈಡೇರಿಸಲು ಒಪ್ಪಿರುವ ಕೇಂದ್ರ ಸರ್ಕಾರ ಮಾತುಕತೆ ನೆಪದಲ್ಲಿ ರೈತರ ಒಗ್ಗಟ್ಟನ್ನು ಛಿದ್ರ ಮಾಡಲು ತಂತ್ರಗಾರಿಕೆ ರೂಪಿಸುತ್ತಿದೆ ಎಂದು ದೂರಿದರು.

    ಕರಾಳ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಕೈ ಬಿಡಬೇಕು. ದೇಶದ ಅನ್ನದಾತರನ್ನು ರಕ್ಷಿಸಿ ಅವರು ಪ್ರತಿಭಟನೆ ಕೈಬಿಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಎಸ್.ಸುಂದರೇಶ್, ವಿಧಾನಪರಿಷತ್ ಸದಸ್ಯ ಆರ್. ಪ್ರಸನ್ನಕುಮಾರ್, ಪಾಲಿಕೆ ಪ್ರತಿಪಕ್ಷದ ನಾಯಕ ಎಚ್.ಸಿ. ಯೋಗೀಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ಕಾಶಿ, ಸೇವಾದಳ ಜಿಲ್ಲಾಧ್ಯಕ್ಷ ವೈ.ಎಚ್.ನಾಗರಾಜ್, ಪ್ರಮುಖರಾದ ರಾಮೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts