ಬಿಬಿಎಂಪಿ ವ್ಯಾಪ್ತಿಯಲ್ಲಿ ನಾಳೆಯಿಂದ 10 ದಿನ ಸ್ವಚ್ಛತಾ ಅಭಿಯಾನ

bbmp office
Published on

ಬೆಂಗಳೂರು: ಬೇಸಿಗೆ ಹಾಗೂ ಪೂರ್ವ ಮುಂಗಾರು ಅವಧಿಯಲ್ಲಿ ರೋಗಗಳನ್ನು ತಡೆಗಟ್ಟುವ ಹಿನ್ನೆಲೆ ನಗರದಾದ್ಯಂತ ಸೋಮವಾರದಿಂದ (ಏ.21) 10 ದಿನಗಳ ಕಾಲ ಬೃಹತ್ ಪ್ರಮಾಣದ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ (ಬಿಎಸ್‌ಡಬ್ಲ್ಯುಎಂಎಲ್) ನಿರ್ಧರಿಸಿದೆ.

ನಗರದ ಕೆಲ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕಸ ವಿಲೇವಾರಿ ಆಗಿಲ್ಲ. ಜತೆಗೆ ಕೆಲ ನಾಗರಿಕರು ಕಟ್ಟಡ ತ್ಯಾಜ್ಯವನ್ನು ರಸ್ತೆಬದಿಯಲ್ಲೇ ಸುರಿದು ಹೋಗಿ ಸಮಸ್ಯೆಗೆ ಕಾರಣರಾಗಿದ್ದಾರೆ. ಜತೆಗೆ ಮಳೆಗಾಲದ ಮುನ್ನ ಪಾಲಿಕೆ ವ್ಯಾಪ್ತಿಯಲ್ಲಿ ಶುಚಿತ್ವ ಕಾಪಾಡಲು ಬೆಂಗಳೂರು ನಗರಾಭಿವೃದ್ಧಿ ಸಚಿವರು ಸೂಚಿಸಿದ್ದಾರೆ. ಮುಖ್ಯವಾಗಿ ನೈರ್ಮಲ್ಯಕ್ಕೆ ಆದ್ಯತೆ ನೀಡಲು ಸ್ವಚ್ಛತಾ ಅಭಿಯಾನ ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ನಿಗಮದ ಮುಖ್ಯ ಕಾರ್ಯಾಚರಣಾಧಿಕಾರಿ ರಮಾಮಣಿ ಹೇಳಿದ್ದಾರೆ.

ಸಾರ್ವಜನಿಕ ಸ್ಥಳಗಳಾದ ರಸ್ತೆ ಬದಿ, ಪಾದಚಾರಿ ಮಾರ್ಗ, ಖಾಲಿ ಸ್ಥಳಗಳಲ್ಲಿ ತ್ಯಾಜ್ಯ ಎಸೆಯುತ್ತಿರುವುದರಿಂದ ನಗರದ ಸೌಂದರ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಜತೆಗೆ ಅಲ್ಲಿನ ಪರಿಸರ ಕೂಡಾ ಹಾಳಾಗುತ್ತಿದೆ. ಈ ಹಿನ್ನೆಲೆ ನಗರದಾದ್ಯಂತ ತ್ಯಾಜ್ಯ ಬಿಸಾಡುವ ಸ್ಥಳಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅಲ್ಲೆಲ್ಲ ಒಂದು ಬಾರಿಗೆ ಸ್ವಚ್ಛಗೊಳಿಸಲಾಗುವುದು. ನಾಗರಿಕರು ಸೇರಿ ಸರ್ಕಾರೇತರ ಸಂಘ-ಸಂಸ್ಥೆಗಳು, ನಿವಾಸಿ ಕಲ್ಯಾಣ ಸಂಘಗಳು, ಅಪಾರ್ಟ್‌ಮೆಂಟ್ ಮಾಲಿಕರ ಸಂಘಗಳ ಸಹಭಾಗಿತ್ವದಲ್ಲಿ ಪಾದಾಚಾರಿ ಮಾರ್ಗ, ರಸ್ತೆಗಳ ಮೀಡಿಯನ್ಸ್ ಹಾಗೂ ಸಾರ್ವಜನಿಕ ಸ್ಥಳಗಳನ್ನು ಸ್ವಚ್ಛಗೊಳಿಸುವ ಗುರಿ ಹೊಂದಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಕಟ್ಟಡ ಭಗ್ನಾವಶೇಷ ತೆರವಿಗೆ ಕ್ರಮ:

ನಗರದಲ್ಲಿ ಕಟ್ಟಡ ಭಗ್ನಾವಶೇಷಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಖಾಲಿ ಜಾಗದಲ್ಲಿ ಸುರಿದಿರುವ ಕಟ್ಟಡ ಭಗ್ನಾವಶೇಷಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗುವುದು. ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಬಿಸಾಡದಂತೆ ನಾಗರಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ತ್ಯಾಜ್ಯ ಸಂಗ್ರಹಿಸುವ ಆಟೋ ಟಿಪ್ಪರ್‌ಗಳಲ್ಲಿ ಧ್ವನಿವರ್ಧಕಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಕೂಡ ನಡೆಯುತ್ತಿದೆ ಎಂದು ಅವರು ವಿವರಿಸಿದ್ದಾರೆ.

ಬಿಬಿಎಂಪಿ, ಬಿಎಸ್‌ಡಬ್ಲ್ಯುಎಂಎಲ್, ಸರ್ಕಾರೇತರ ಸಂಘ-ಸಂಸ್ಥೆಗಳು, ಕ್ಷೇಮಾಭಿವೃದ್ಧಿ ಸಂಘಗಳು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಅಗತ್ಯ ಸಂಪನ್ಮೂಲ ಬಳಸಿಕೊಂಡು ಸ್ವಚ್ಛತಾ ಅಭಿಯಾನ ಕೈಗೊಳ್ಳಲಾಗುವುದು.

- ರಮಾಮಣಿ, ಬಿಎಸ್‌ಡಬ್ಲ್ಯುಎಂಎಲ್​​ ಮುಖ್ಯ ಕಾರ್ಯಾಚರಣಾಧಿಕಾರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net