10 ಲಕ್ಷ ಮನೆಗಳ ನಿರ್ಮಾಣ ಗುರಿ ; ಸಿದ್ಧಗಂಗಾ ಮಠದಲ್ಲಿ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆ

05Tmk_Minister_Somanna
Published on

ತುಮಕೂರು : ಗುಡಿಸಲುಮುಕ್ತ ರಾಜ್ಯ ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರವು 10 ಲಕ್ಷ ಮನೆಗಳನ್ನು ನಿರ್ಮಿಸುವ ಮಹತ್ತರ ಗುರಿ ಹೊಂದಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ಹೇಳಿದರು.

ಸಿದ್ಧಗಂಗಾ ಮಠಕ್ಕೆ ಶನಿವಾರ ಭೇಟಿ ನೀಡಿ ಶಿವಕುಮಾರ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ ಆರ್ಶೀವಾದ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಸುಮಾರು 3 ಲಕ್ಷ ಮನೆಗಳನ್ನು ನಿರ್ಮಿಸಿ ನಗರ ಹಾಗೂ ಗ್ರಾಮೀಣ ಭಾಗದ ವಸತಿರಹಿತರಿಗೆ ಹಂಚಿಕೆ ಮಾಡಲಾಗಿದೆ ಎಂದರು.

ಕರೊನಾ ಆರ್ಭಟಕ್ಕೆ ಸಿಲುಕಿರುವವರ ಜತೆಗೆ ಸರ್ಕಾರ ಸದಾ ಇರುತ್ತದೆ. ಕರೊನಾ ಪರಿಹಾರ ಘೋಷಿಸಿದ್ದು ಸೋಂಕು ನಿಯಂತ್ರಣಕ್ಕೆ ಸಾರ್ವಜನಿಕರು ಸಹಕರಿಸಬೇಕು. ಸದ್ಯ ಕರೊನಾ ನಿಯಂತ್ರಣಕ್ಕೆ ಬರುತ್ತಿದೆ. ಸೋಂಕಿತರ ಚಿಕಿತ್ಸೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಫೋಟೋ ಕ್ಯಾಪ್ಷನ್: ಸಿದ್ಧಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಶ್ರೀಗಳನ್ನು ವಸತಿ ಸಚಿವ ವಿ.ಸೋಮಣ್ಣ ಭೇಟಿ ಮಾಡಿ ಆಶೀರ್ವಾದ ಪಡೆದರು. ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್, ವೆುೀಯರ್ ಬಿ.ಜಿ.ಕೃಷ್ಣಪ್ಪ, ಮಾಜಿ ಸಚಿವ ಸೊಗಡು ಶಿವಣ್ಣ ಮತ್ತಿತರರು ಇದ್ದರು.

ಕೊರಟಗೆರೆ ಕ್ಷೇತ್ರಕ್ಕೆ 5 ಸಾವಿರ ಮನೆ ಭರವಸೆ: ಕೊರಟಗೆರೆ: ತುಮಕೂರು ಜಿಲ್ಲೆಗೆ ಸುಮಾರು 15600 ವಸತಿ ಮನೆಗಳನ್ನು ಅಲೆಮಾರಿ, ಅರೆಅಲೆಮಾರಿ, ಜೋಗರುಗಳಿಗೆ ಮಂಜೂರು ಮಾಡಲಾಗಿದೆ. ಕೊರಟಗೆರೆ ಕ್ಷೇತ್ರಕ್ಕೆ 5 ಸಾವಿರ ಮನೆ ನೀಡಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದರು. ಸಿದ್ದರಬೆಟ್ಟಕ್ಕೆ ಭೇಟಿ ನೀಡಿ ಶ್ರೀ ವೀರಭದ್ರ ಶಿವಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದು ಮಾತನಾಡಿದ ಅವರು, ಕರೊನಾದಂತಹ ಕ್ಲಿಷ್ಟ ಪರಿಸ್ಥಿತಿಯಲ್ಲೂ ಬಡವರಿಗೆ ಆಶ್ರಯ ಮನೆಗಳನ್ನು ನೀಡುವುದು, ನಿರ್ಮಾಣಗೊಂಡ ಮನೆಗಳಿಗೆ ಹಣ ಬಿಡುಗಡೆ ಮಾಡಲಾಗುತ್ತಿದೆ. ಶಾಸಕ ಡಾ.ಜಿ.ಪರಮೇಶ್ವರ್ ಮತ್ತು ಸಿದ್ದರಬೆಟ್ಟದ ಶ್ರೀಗಳು ಬಡವರಿಗೆ ಮನೆ ಮಂಜೂರಾತಿಗೆ ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಯಂತೆ ಕ್ಷೇತ್ರಕ್ಕೆ ಸಾಕಷ್ಟು ಮನೆಗಳನ್ನು ಮಂಜೂರು ಮಾಡಲಾಗುವುದು ಎಂದರು. ಶಾಸಕರಾದ ಜ್ಯೋತಿಗಣೇಶ್, ಮಾಜಿ ಸಚಿವ ಸೊಗಡುಶಿವಣ್ಣ, ಕೊರಟಗೆರೆ ತಾಲೂಕು ಬಿಜೆಪಿ ಅಧ್ಯಕ್ಷ ಪವನ್‌ಕುಮಾರ್, ಮುಖಂಡರಾದ ನಟರಾಜು, ಹೆಬ್ಬಾಕ ರವಿ ಸೇರಿ ಹಲವು ಮುಖಂಡರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net