

ಮಡಿಕೇರಿ: ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕೆಂಬುದು ರೋಟರಿ ಸಂಸ್ಥೆಯ ಉದ್ದೇಶವಾಗಿದ್ದು, ೨೦೨೮ರ ವೇಳೆಗೆ ಜಿಲ್ಲೆಯಲ್ಲಿ ಶೇ.೧೦೦ರಷ್ಟು ಸಾಕ್ಷರತೆಯ ಗುರಿ ಹೊಂದಲಾಗಿದೆ ಎಂದು ಎಂದು ರೋಟರಿ ೩೧೮೧ ಜಿಲ್ಲಾ ಗವರ್ನರ್ ಪ್ರಕಾಶ್ ಕಾರಂತ್ ತಿಳಿಸಿದರು.
ನಗರದ ಪತ್ರಿಕಾಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೋಟರಿ ಸಂಸ್ಥೆಯು ಬಡ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಜಿಲ್ಲೆಯ ಸಾಕ್ಷರತೆ ಪ್ರಮಾಣವನ್ನು ಹೆಚ್ಚಿಸುವ ಗುರಿ ಇಟ್ಟುಕೊಂಡಿದೆ. ಕೊರೊನಾದಿಂದ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿಲ್ಲ. ಆದರೂ ಗ್ರಾಮೀಣ ಭಾಗದ ಮಕ್ಕಳಿಗೆ ೩ ಲಕ್ಷಕ್ಕೂ ಹೆಚ್ಚಿನ ಟ್ಯಾಬ್ ವಿತರಿಸಲಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಮತ್ತೆ ಅವರು ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಪ್ರತಿಯೊಬ್ಬರೂ ವಿದ್ಯಾವಂತರಾಗಬೇಕೆಂಬುದು ರೋಟರಿ ಸಂಸ್ಥೆಯ ಉದ್ದೇಶ ಎಂದು ತಿಳಿಸಿದರು.
ರೋಟರಿ ಅಧ್ಯಕ್ಷ ಕೆ.ಸಿ.ಕಾರ್ಯಪ್ಪ ಮಾತನಾಡಿ, ರೋಟರಿ ಮಡಿಕೇರಿ ಸಂಸ್ಥೆಯು ಪ್ರಸಕ್ತ ವರ್ಷದಲ್ಲಿ ೩ ಬಾರಿ ರಕ್ತದಾನ ಶಿಬಿರ ಆಯೋಜಿಸಿ ಸುಮಾರು ೧೫ ಯೂನಿಟ್ ರಕ್ತವನ್ನು ಸಂಗ್ರಹಿಸಿದೆ. ರಾಜ್ಯಮಟ್ಟದ ಚದುರಂಗ ಸ್ಪರ್ಧೆ, ಪ್ರಕೃತಿ ಸಂರಕ್ಷಣೆ ಜೊತೆಗೆ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿದೆ. ವನಸಿರಿ, ಜಲಸಿರಿ, ವಿದ್ಯಾಸಿರಿ ಮತ್ತು ಆರೋಗ್ಯ ಸಿರಿ ಕಾರ್ಯಕ್ರಮಗಳನ್ನು ಸಂಸ್ಥೆ ರೂಪಿಸಿದ್ದು, ಸುಮಾರು ೧ ಲಕ್ಷ ಜನರನ್ನು ತಲುಪುವ ಗುರಿ ಹೊಂದಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪ್ರಮುಖರಾದ ಅನಿಲ್ ಕೃಷ್ಣಾನಿ, ರತನ್ ತಮ್ಮಯ್ಯ, ಅಚ್ಚಯ್ಯ, ಸುಜಯ್ ನಾಣಯ್ಯ ಹಾಜರಿದ್ದರು.