100 ಕಡೆ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ

h30-Congress 1
Published on

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ ಹಾಗೂ ಮೂವರು ಕಾರ್ಯಾಧ್ಯಕ್ಷರು ಜುಲೈ 2ರಂದು ಬೆಂಗಳೂರಿನಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದ ನೇರಪ್ರಸಾರದ ವೀಕ್ಷಣೆಗೆ ಹು-ಧಾ ಅವಳಿ ನಗರದಲ್ಲಿ ಸುಮಾರು ನೂರು ಕಡೆ ವ್ಯವಸ್ಥೆ ಮಾಡಲಾಗಿದೆ ಎಂದು ಮಹಾನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಲ್ತಾಫ್ ಹಳ್ಳೂರ ತಿಳಿಸಿದರು.

ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅವಳಿ ನಗರದ ಪ್ರತಿ ವಾರ್ಡ್​ನಲ್ಲಿ ಕನಿಷ್ಠ 1 ಸ್ಥಳದಲ್ಲಿ ನೇರ ಪ್ರಸಾರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿದೆ. ಕೆಲವು ವಾರ್ಡ್​ಗಳಲ್ಲಿ 2-3 ಕಡೆ ಇಂಥಾ ವ್ಯವಸ್ಥೆ ಇರಲಿದೆ. ಎಲ್​ಇಡಿ ಸ್ಕ್ರೀನ್ ಅಳವಡಿಸಲಾಗುತ್ತಿದೆ. ಪ್ರತಿಯೊಂದು ಕಡೆ ಸುಮಾರು ನೂರು ಜನ ಸೇರಬಹುದು. ಜಿಲ್ಲಾ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಮಟ್ಟದಲ್ಲಿ ದೊಡ್ಡದಾಗಿ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಹೇಳಿದರು.

ಎಲ್ಲರಿಗೂ ಮಾಸ್ಕ್ ವಿತರಣೆ ಮಾಡಲಾಗುವುದು. ಪರಸ್ಪರ ಅಂತರ ಕಾಯ್ದುಕೊಳ್ಳಲಾಗುವುದು. ಸ್ಯಾನಿಟೈಸರ್ ಬಳಕೆ ಮಾಡಲಾಗುವುದು. ಕರೊನಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಇದು ಹೊಸ ಅನುಭವ ನೀಡಲಿದೆ ಎಂದರು.

ಕೆಪಿಸಿಸಿ ಕೋವಿಡ್ ಟಾಸ್ಕ್ ಫೋರ್ಸ್ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷ ನಾಗರಾಜ ಛಬ್ಬಿ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ ಹಾಗೂ ಕಾರ್ಯಾಧ್ಯಕ್ಷರಾಗಿ ಸಲೀಂ ಅಹ್ಮದ್, ಸತೀಶ ಜಾರಕಿಹೊಳಿ ಮತ್ತು ಈಶ್ವರ ಖಂಡ್ರೆ ಗುರುವಾರ ಅಧಿಕಾರ ಸ್ವೀಕರಿಸಲಿದ್ದಾರೆ. ರಾಜ್ಯದಲ್ಲಿ ಸುಮಾರು 12 ಸಾವಿರ ಸ್ಥಳಗಳಲ್ಲಿ ಕಾರ್ಯಕ್ರಮದ ನೇರ ಪ್ರಸಾರದ ವೀಕ್ಷಣೆಗೆ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ ಪೂರ್ವಿಭಾವಿ ಸಭೆ ಮಾಡಿದ್ದೇವೆ ಎಂದು ಹೇಳಿದರು.

ಈಗ ಪರಿಸ್ಥಿತಿ ಭಿನ್ನವಾಗಿದೆ. ಕರೊನಾ ಹಿನ್ನೆಲೆಯಲ್ಲಿ ಸಾವಿರಾರು ಜನರನ್ನು ಸೇರಿಸಿ ಕಾರ್ಯಕ್ರಮ ನಡೆಸಲು ಬರುವುದಿಲ್ಲ. ಸಾಮಾಜಿಕ ಜಾಲತಾಣ ಹಾಗೂ ನವ ಮಾಧ್ಯಮಗಳ ಬಳಕೆ ಕಲಿಯಬೇಕಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಶಾಸಕಿ ಕುಸುಮಾವತಿ ಶಿವಳ್ಳಿ, ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನಿಲಕುಮಾರ ಪಾಟೀಲ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net