

ಮೈಸೂರು: ಕಾಯಕ ಶರಣರ ಜಯಂತಿಯನ್ನು ಫೆ.10ರಂದು ಬೆಳಗ್ಗೆ 11.30ಗಂಟೆಗೆ ಕಿರುರಂಗಮಂದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಆರ್.ಲೋಕನಾಥ್ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಕಾಯಕ ಶರಣರ ಜಯಂತಿ ಆಚರಣೆ ಸಂಬಂಧ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ಸರ್ಕಾರದ ಶಿಷ್ಟಾಚಾರದಂತೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು. ಈ ಸಂಬಂಧ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲು ಅಗತ್ಯ ಕ್ರಮ ವಹಿಸಲಾಗುವುದು. ಜಯಂತಿ ಕಾರ್ಯಕ್ರಮ ನಡೆಯುವ ಸ್ಥಳದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ. ಸುದರ್ಶನ್ ಮಾತನಾಡಿ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಕಲಾತಂಡಗಳಿಂದ ಪ್ರದರ್ಶನ ಏರ್ಪಡಿಸಲಾಗುವುದು. ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಸರ್ಕಾರದ ಶಿಷ್ಟಾಚಾರದಂತೆ ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬಂಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು.
ಕರುನಾಡ ಸರ್ವೋದಯ ಸೇನೆಯ ಎಸ್.ವಿ.ರೇವನಾಯ್ಕ, ಪರಿಸರ ಸಂರಕ್ಷಣಾ ಸಮಿತಿ ಅಧ್ಯಕ್ಷಿ ಭಾನು ಮೋಹನ್, ಮಾನವ ಹಕ್ಕುಗಳ ಜಾಗೃತಿ ದಳದ ಎಸ್.ಮೋಹನ್, ತನುಮನ ಸಂಸ್ಥೆಯ ಲಕ್ಷ್ಮೀರಾಮ್, ಮೈಸೂರು ಕನ್ನಡ ವೇದಿಕೆಯ ಎಸ್.ಬಾಲಕೃಷ್ಣ, ಚಿಕ್ಕ ಜವರಪ್ಪ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.