

ಬಳ್ಳಾರಿ : ಜಿಲ್ಲೆಯಲ್ಲಿ 22 ವರ್ಷದಿಂದ ಬೇಡಿಕೆಯಾಗಿಯೇ ಉಳಿದಿರುವ ಗುರುಭವನ ಕಟ್ಟಡವನ್ನು ಡಿಎಂಎಫ್ ಅನುದಾನದಡಿ 12 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿಕೊಡಲಾಗುವುದು ಎಂದು ಯುವಜನ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಹೇಳಿದರು.
ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ರಸ್ತೆಯ ಗೃಹರಕ್ಷಕದಳದ ಕಚೇರಿ ಪಕ್ಕದಲ್ಲಿನ ಗುರುಭವನ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಶಿಕ್ಷಕರ ದಿನಾಚರಣೆ ಹಾಗೂ ಉತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಾನಾ ವರ್ಷಗಳಿಂದ ಜಿಲ್ಲೆಯ ಎಲ್ಲ ಶಿಕ್ಷಕರ ಬಹುಬೇಡಿಕೆಯಾಗಿ ಉಳಿದಿದ್ದ ಗುರುಭವನ ಕಟ್ಟಡವನ್ನು ಡಿಎಂಎಫ್ ಅನುದಾನದಲ್ಲಿ ರಾಜ್ಯದಲ್ಲಿಯೇ ಮಾದರಿಯಾಗುವಂತಹ ಗುರುಭವನ ನಿರ್ಮಾಣ ಮಾಡಲಾಗುವುದು. ಈ ಸಂಬಂಧ ಜಿಲ್ಲಾಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂದರು.
ಒಂದು ದೇಶವನ್ನು ಪ್ರಬುದ್ಧವಾಗಿ ನಡೆಸಬೇಕೆಂದರೆ ವಿದ್ಯಾವಂತರಿಂದ ಮಾತ್ರ ಸಾಧ್ಯ. ಅಂತಹ ಪ್ರತಿಯೊಬ್ಬ ವಿದ್ಯಾವಂತರನ್ನು ರೂಪಿಸುವುದೇ ಶಿಕ್ಷಕರು. ಒಂದು ದೇಶ ಪ್ರಗತಿ ಹೊಂದಬೇಕಾದರೆ ಅಲ್ಲಿ ಶಿಕ್ಷಣ ಮತ್ತು ಶಿಕ್ಷಕರ ಪಾತ್ರ ಮಹತ್ವದ್ದಾಗಿರುತ್ತದೆ. ಜೀವನದಲ್ಲಿ ಪ್ರತಿಯೊಬ್ಬರೂ ಹುಟ್ಟಿನಿಂದ ಸಾಯುವವರೆಗೂ ನೆನಪಿಸಿಕೊಳ್ಳುವುದು ಎಂದರೆ ಅದು ಶಿಕ್ಷಕರನ್ನು ಮಾತ್ರ ಎಂದು ಪ್ರಶಂಸೆ ವ್ಯಕ್ತಪಡಿಸಿದರು.
ಒಬ್ಬ ಉತ್ತಮ ಶಿಕ್ಷಕ ವಿದ್ಯಾರ್ಥಿಗಳಲ್ಲಿ ಎಲ್ಲ ಧರ್ಮ, ಜಾತಿ, ಸಂಸ್ಕೃತಿಯನ್ನು ಕಲಿಸಬೇಕು. ಶಾಲೆಗಳಲ್ಲಿ ಮೂಲ ಸೌಕರ್ಯಗಳಾದ ಕುಡಿಯುವ ನೀರಿನ ವ್ಯವಸ್ಥೆ, ಶೌಚಗೃಹ ಒಳಗೊಂಡಂತೆ ಇತರ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು. ಹೆಣ್ಣು ಮಕ್ಕಳಿಗೆ ಶುಚಿತ್ವದ ಬಗ್ಗೆಯೂ ತಿಳಿಸಿಕೊಡಬೇಕು ಎಂದು ಹೇಳಿದರು.
ಕ್ರೀಡೆಗೆ ಪ್ರೋತ್ಸಾಹ ನೀಡಲು ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ದೈಹಿಕ ಶಿಕ್ಷಣ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲಾಗುವುದು ಎಂದರು.
ಬಳ್ಳಾರಿ ಜಿಲ್ಲೆಯು ಎಸ್‌ಎಸ್‌ಎಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದ್ದು, ಅದನ್ನು ಮುಂಚೂಣಿಗೆ ತರಲು ವಿಶೇಷ ಕಾಳಜಿ ವಹಿಸಬೇಕು ಎಂದು ಶಿಕ್ಷಕರಿಗೆ ಮನವಿ ಮಾಡಿದರು.
ಬಳ್ಳಾರಿ ನಗರ ಶಾಸಕ ನಾರಾ ಭರತ್‌ರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪಾಲಿಕೆ ಉಪ ಮೇಯರ್ ಬಿ.ಜಾನಕಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕಿ ಹನುಮಕ್ಕ.ಎ, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಎಂ.ಶಿವಾಜಿರಾವ್ ಸೇರಿದಂತೆ ಮಹಾನಗರ ಪಾಲಿಕೆ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕ್ಷೇತ್ರ ಸಮನ್ವಯ ಅಧಿಕಾರಿಗಳು, ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಎಲ್ಲಾ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಶಿಕ್ಷಕರು, ಸಾರ್ವಜನಿಕರು ಉಪಸ್ಥಿತರಿದ್ದರು.