

ತುಮಕೂರು: ಶಾಲಾ ಶಿಕ್ಷಕರ ಕೊರತೆ ನೀಗಿಸುವ ಹಿನ್ನೆಲೆಯಲ್ಲಿ 12ಸಾವಿರ ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದ್ದು ಹೆಚ್ಚುವರಿಯಾಗಿ ಇನ್ನು 12 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುವುದು ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ಕೆಡಿಪಿ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆಯ ಸುಧಾರಣೆಗೆ ಈಗಾಗಲೇ ಹಲವು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗಾಗಲೇ 12 ಸಾವಿರ ಶಿಕ್ಷಕರ ನೇಮಾತಿ ಮಾಡಲಾಗಿದ್ದು ಇನ್ನೂ 12 ಸಾವಿರ ಶಿಕ್ಷಕರನ್ನು ನೇವಿಸಿಕೊಳ್ಳಲಾಗುವುದು ಎಂದರು.
ಪ್ರಸಕ್ತ ಶೈಕ್ಷಣಿಕ ವರ್ಷಾರಂಭಕ್ಕೆ ಮುನ್ನವೇ 50 ಸಾವಿರ ಅತಿಥಿ ಶಿಕ್ಷಕರನ್ನು ನೇವಿಸಲಾಗಿದೆ. ಅಲ್ಲದೆ, ಅನುದಾನಿತ ಶಾಲೆಗಳಲ್ಲಿ ಐದು ವರ್ಷಗಳಿಂದಲೂ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಅನುಮತಿ ನೀಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 2ಸಾವಿರ ಇಂಗ್ಲೀಷ ಮಾಧ್ಯಮ ಶಾಲೆಗಳನ್ನು ತೆರೆಯಲಾಗಿದ್ದು 1008 ಅಂಗನವಾಡಿಗಳಲ್ಲಿ ಎಲ್ಕೆಜಿ, ಯುಕೆಜಿ ಆರಂಭಿಸಲಾಗಿದೆ. ಕೇವಲ 28 ದಿನಗಳಲ್ಲಿ 32ಸಾವಿರ ಮಕ್ಕಳು ದಾಖಲಾಗುವ ಮೂಲಕ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ತಿಳಿಸಿದರು.
ಶಾಲಾ ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸುವ ನಿಟ್ಟಿನಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಷನ್ ಅವರೊಂದಿಗೆ 1500ಕೋಟಿ ರೂ., ವೆಚ್ವದ ಯೋಜನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ಇದರಿಂದಾಗಿ ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿದಿನ ಮೊಟ್ಟೆ ನೀಡಲಾಗುವುದು. ಪೋಷಕರು ಮಕ್ಕಳನ್ನು ಸರಿಯಾಗಿ ಶಾಲೆಗೆ ಕಳಿಸಬೇಕು. ಇದರಿಂದ ಸರ್ಕಾರದ ಈ ಯೋಜನೆಗಳು ಸಾರ್ಥಕತೆ ಪಡೆಯುತ್ತವೆ ಎಂದರು.
ಅಲ್ಲದೆ ಸರ್ಕಾರಿ ಶಾಲೆಗಳಲ್ಲಿ ಎಸ್ಸೆಸ್ಸೆಲ್ಸಿಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಶಾಲಾ ಶಿಕ್ಷಕರು ವಾರಕ್ಕೊಮ್ಮೆ ವಿಶೇಷ ತರಗತಿ ತೆಗೆದುಕೊಳ್ಳಲು ಸೂಚಿಸಲಾಗಿದೆ ಎಂದು ಸಚಿವ ಮಧುಬಂಗಾರಪ್ಪ ತಿಳಿಸಿದರು.