

ಹಾವೇರಿ: ತೀವ್ರ ಉಸಿರಾಟದ ತೊಂದರೆ, ನೆಗಡಿ, ಕಫದಿಂದ ಬಳಲುತ್ತಿದ್ದ 120 ಜನರ ಮಾದರಿಗಳನ್ನು ಮಂಗಳವಾರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಡಿಎಚ್ಒ ಡಾ. ರಾಜೇಂದ್ರ ದೊಡ್ಡಮನಿ ತಿಳಿಸಿದ್ದಾರೆ.
ತೀವ್ರ ಉಸಿರಾಟದ ತೊಂದರೆ, ನೆಗಡಿ, ಕಫದಿಂದ ಬಳಲುತ್ತಿದ್ದವರ ಒಟ್ಟು 3,180ಜನರ ರಕ್ತ, ಗಂಟಲ ದ್ರವದ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಅದರಲ್ಲಿ ಈವರೆಗೆ 2,876ಮಾದರಿಗಳು ನೆಗೆಟಿವ್, ಮೂರು ಪಾಸಿಟಿವ್ ಬಂದಿವೆ. ಇನ್ನುಳಿದ ವರದಿ ಬರಬೇಕಿದೆ. ಕರೊನಾ ಲಕ್ಷಣಗಳ ಆಧಾರದ ಮೇಲೆ ಸರ್ಕಾರಿ ಕ್ವಾರಂಟೈನ್ನಲ್ಲಿ 120 ಜನರನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಸೀಲ್ಡೌನ್ ಪ್ರದೇಶದಲ್ಲಿ ಜನಜಾಗೃತಿ
ಶಿಗ್ಗಾಂವಿ: ಕರೊನಾ ಪಾಸಿಟಿವ್ ಪ್ರಕರಣದ ಹಿನ್ನೆಲೆಯಲ್ಲಿ ಸೀಲ್ಡೌನ್ ಆಗಿರುವ ತಾಲೂಕಿನ ಅಂದಲಗಿ ಗ್ರಾಮದಲ್ಲಿ ಅಧಿಕಾರಿಗಳ ತಂಡ ಮಂಗಳವಾರ ತೀವ್ರ ನಿಗಾವಹಿಸಿತ್ತು.
ಜಿಪಂ ಸಿಇಒ ರಮೇಶ ದೇಸಾಯಿ, ಅಪರ ಜಿಲ್ಲಾಧಿಕಾರಿ ಎಂ. ಯೋಗೇಶ್ವರ, ಉಪವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮವರ ಇತರರು ಅಂದಲಗಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಅರಿವು ಮೂಡಿಸಿದರು.
ಗ್ರಾಮಸ್ಥರಿಗೆ ಅಗತ್ಯವಾದ ದಿನಸಿ ವಿತರಿಸಿ, ಆರೋಗ್ಯ ತಪಾಸಣೆ, ಕರೊನಾ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಸತತವಾಗಿ ನಡೆಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು.
ಗ್ರಾಮದ ಸುತ್ತಲೂ ಚೆಕ್ಪೋಸ್ಟ್ಗಳನ್ನು ಸ್ಥಾಪಿಸಿ ಸಾರ್ವಜನಿಕ ಓಡಾಟದ ಮೇಲೆ ನಿಗಾವಹಿಸಲಾಗಿದೆ. ಶುದ್ಧ ಕುಡಿಯುವ ನೀರು ಪೂರೈಸಲಾಗಿದೆ. ಗ್ರಾಮದಲ್ಲಿ ಕ್ರಿಮಿನಾಶಕ ಸಿಂಪಡಣೆ ಕಾರ್ಯವನ್ನೂ ಕೈಗೊಳ್ಳಲಾಗಿದೆ. ಅಂದಲಗಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ವಾರಂಟೈನ್ ಹಾಗೂ ಫಿವರ್ ಕ್ಲಿನಿಕ್ ಕೇಂದ್ರವನ್ನು ಸ್ಥಾಪಿಸಲಾಗಿದೆ ಎಂದು ಎಸಿ ಅನ್ನಪೂರ್ಣ ಮುದಕಮ್ಮನವರ ತಿಳಿಸಿದ್ದಾರೆ.
EndFragment