ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪರವರ ೧೨೪ ನೇ ಜನ್ಮ ದಿನಾಚರಣೆ

28adarshkdga10
Published on

ಮಡಿಕೇರಿ: ಸ್ವಾತಂತ್ರ್ಯ ಭಾರತದ ಮೊದಲ ಸೇನಾ ಮಹಾ ದಂಡನಾಯಕ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪರವರ ೧೨೪ ನೇ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶನಿವಾರ ಆಚರಿಸಲಾಯಿತು.


ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ವೃತ್ತದಲ್ಲಿರುವ ಕಾರ್ಯಪ್ಪರವರ ಪ್ರತಿಮೆಗೆ ಮಡಿಕೇರಿ ಶಾಸಕರು, ಕೆ.ಜಿ.ಬೋಪಯ್ಯ, ನಗರಸಭೆ ಅಧ್ಯಕ್ಷೆ ಅನಿತಾ ಪೂವಯ್ಯ, ಏರ್ ಮಾರ್ಷಲ್(ನಿವೃತ್ತ) ಕೆ.ಸಿ.ಕಾರ್ಯಪ್ಪ, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಯಾಪ್ಟನ್ ಎಂ.ಎ.ಅಯ್ಯಪ್ಪ, ಕೂಡಿಗೆ ಸೈನಿಕ ಶಾಲೆಯ ಪ್ರಾಂಶುಪಾಲ ಕರ್ನಲ್ ಜಿ.ಕಣ್ಣನ್, ಕರ್ನಲ್ ನಾರಾಯಣ ಮೂರ್ತಿ(ನಿವೃತ್ತ), ಪದ್ಮಶ್ರೀ ಪ್ರಶಸ್ತಿಗೆ ಭಾಜನರಾಗಿರುವ ಐಮುಡಿಯಂಡ ರಾಣಿ ಮಾಚಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ತಹಶೀಲ್ದಾರ್ ಪಿ.ಎಸ್.ಮಹೇಶ್ ಇತರರು ಪುಷ್ಪಗುಚ್ಛ ಇರಿಸಿ, ಗೌರವ ನಮನ ಸಲ್ಲಿಸಿದರು.


ಈ ಸಂದರ್ಭ ಮಾತನಾಡಿದ ಶಾಸಕ ಕೆ.ಜಿ.ಬೋಪಯ್ಯ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರು ಶಿಸ್ತಿನ ಸಿಪಾಯಿ ಆಗಿದ್ದರು. ಕಾರ್ಯಪ್ಪ ಅವರ ಶಿಸ್ತು, ಸಮಯ ಪ್ರಜ್ಞೆ ಎಲ್ಲರಿಗೂ ಮಾದರಿ ಎಂದ ಅವರು, ಸ್ವಾತಂತ್ರ್ಯ ಭಾರತದ ಮಹಾ ದಂಡನಾಯಕರಾಗಿ ರಾಷ್ಟ್ರ ರಕ್ಷಣೆ ಹಾಗೂ ಭದ್ರತೆಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಸೇನಾ ಕ್ಷೇತ್ರದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರು ಮಹತ್ತರ ಸಾಧನೆ ಮಾಡಿದ್ದಾರೆ ಎಂದರು.


ಫೀಲ್ಡ್ ಮಾರ್ಷಲ್ ಕಾರ್ಯಪ್ಪರವರು ಕೊಡಗು ಜಿಲ್ಲೆಯ ಸುಪುತ್ರರಾಗಿ ರಾಷ್ಟ್ರ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಜಿಲ್ಲೆಗೆ ಹೆಸರು ತಂದು ಕೊಟ್ಟಿದ್ದಾರೆ ಎಂದು ಕೆ.ಜಿ.ಬೋಪಯ್ಯ ಸ್ಮರಿಸಿದರು.


ಜಿಲ್ಲಾ ಪೊಲೀಸ್ ವಾದ್ಯ ತಂಡ ಸಿದ್ದೇಶ್ ಅವರ ನೇತೃತ್ವದಲ್ಲಿ ವೀರ ಸೇನಾನಿಗೆ ಗೌರವ ನಮನ ಸಲ್ಲಿಸಿ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಕೂಡಿಗೆ ಸೈನಿಕ ಶಾಲೆ, ಮಡಿಕೇರಿಯ ಸಂತ ಮೈಕೆಲರ ಶಾಲೆ, ಕೊಡಗು ವಿದ್ಯಾಲಯ, ಜನರಲ್ ತಿಮ್ಮಯ್ಯ, ಬ್ಲಾಸಂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


ಪ್ರಶಸ್ತಿ ಪತ್ರ ವಿತರಣೆ: ಫೀ.ಮಾ.ಕೆ.ಎಂ.ಕಾರ್ಯಪ್ಪ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಏರ್ಪಡಿಸಲಾಗಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದ ಸಂತ ಮೈಕೆಲರ ಶಾಲೆಯ ಭೂಮಿಕ ಎನ್., ದ್ವಿತೀಯ ಸ್ಥಾನ ಪಡೆದ ಕೊಡಗು ವಿದ್ಯಾಲಯದ ಕೀರ್ತಿ ಅಯ್ಯಪ್ಪ, ಮಡಿಕೇರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕೆನೆತ್ ರಾಯ್ ಅವರಿಗೆ ಪ್ರಶಸ್ತಿ ಪತ್ರ ವಿತರಿಸಲಾಯಿತು.


ಕಾರ್ಯಕ್ರಮದಲ್ಲಿ ಸೈನಿಕ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಾಲಸುಬ್ರಮಣ್ಯಂ, ಮಡಿಕೇರಿ ಕೊಡವ ಸಮಾಜದ ಗೌರವ ಕಾರ್ಯದರ್ಶಿ ಕನ್ನಂಡ ಸಂಪತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ರಂಗಧಾಮಯ್ಯ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿದೇಶಕ ಪುಟ್ಟರಾಜು, ಸ್ಕೌಟ್ಸ್ ಮತ್ತು ಗೈಡ್ಸ್‌ನ ಜಿಲ್ಲಾ ಸಹ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೆದ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಪ್ರಮೋದ್, ಜಿಲ್ಲಾ ಕಾರ್ಮಿಕ ಅಧಿಕಾರಿ ಅನಿಲ್ ಬಗಟಿ, ಇತರರು ಪುಷ್ಪಾರ್ಚನೆ ಮಾಡಿ, ಗೌರವ ನಮನ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net