12ಕ್ಕೆ ರೈತ ಸಂಘ-ಹಸಿರು ಸೇನೆಯಿಂದ ವಿಧಾನಸೌಧ ಚಲೋ

SKP WEB
Published on

ಶಿಕಾರಿಪುರ: ರೈತರ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸರ್ಕಾರಗಳು ರೈತರ ಸಮಸ್ಯೆಗಳ ಬಗ್ಗೆ ಗಮನ ಹರಿಸುತ್ತಿಲ್ಲ. ಆದ್ದರಿಂದ ರೈತರ ಸಮಸ್ಯೆಗಳನ್ನು ಇತ್ಯರ್ಥ ಪಡಿಸಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯಿಂದ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಸೆ.12ರಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ತಾಲೂಕಿನಿಂದ ಅತಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಭಾಗವಹಿಸಬೇಕು ಎಂದು ರಾಜ್ಯ ಸಂಚಾಲಕ ಡಿ.ಎಸ್.ಈಶ್ವರಪ್ಪ ಹೇಳಿದರು.

ರೈತರ ಹೋರಾಟಕ್ಕೆ ಮಣಿದು ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದರೂ, ರಾಜ್ಯ ಸರ್ಕಾರ ಹಿಂಪಡೆಯದೆ ಮೊಂಡುತನ ಮಾಡುತ್ತಿದೆ. ಕೂಡಲೇ ಕಾಯ್ದೆ ಹಿಂಪಡೆಯಬೇಕು. ಕಾರ್ಪೋರೇಟ್ ಕಂಪನಿಗಳು ಹೈನೋದ್ಯಮ ಸ್ಥಾಪಿಸಿದರೆ ಶೇ.50 ಸಹಾಯಧನ ನೀಡುವುದನ್ನು ನಿಲ್ಲಿಸಿ, ಹೈನುಗಾರಿಕೆಯಲ್ಲಿ ತೊಡಗಿಸಿಕೊಂಡಿರುವ ರೈತರಿಗೆ ಪ್ರೋತ್ಸಾಹಧನ ನೀಡಬೇಕ. ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರ ಮೇಲೆ ಕೇಸ್ ಹಾಕಿ, ಒಕ್ಕಲೆಬ್ಬಿಸುತ್ತಿರುವುದನ್ನು ತಕ್ಷಣ ನಿಲ್ಲಿಸಬೇಕು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

ತಾಲೂಕು ಅಧ್ಯಕ್ಷ ಪಿ.ವೈ.ರವಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೃಷಿ ಪಂಪ್‌ಸೆಟ್‌ಗಳಿಗೆ ಮೀಟರ್ ಅಳವಡಿಸುವುದನ್ನು ನಿಲ್ಲಿಸಬೇಕು. ವಿದ್ಯುತ್ ಸಾಗಣೆ, ವಿತರಣೆ ಖಾಸಗೀಕರಣವನ್ನು ಹಿಂಪಡೆಯಬೇಕು ಮತ್ತು ಅತಿವೃಷ್ಠಿಯಿಂದ ಬೆಳೆಗಳು ಸಂಪೂರ್ಣ ಹಾಳಾಗಿದ್ದು ಸಾಮೂಹಿಕವಾಗಿ ಎಕರೆವಾರು ಪರಿಹಾರ ನೀಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net