

ಚಿತ್ರದುರ್ಗ: ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜೂ.12ರಂದು ವಿಶ್ವ ಬಾಲಕಾರ್ಮಿಕ ವಿರೋಧಿ ದಿನವನ್ನು ಆಚರಿಸಲಾಗುವುದೆಂದು ಡಿಸಿ ಜಿಆರ್‌ಜೆ ದಿವ್ಯಾಪ್ರಭು ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು,ದಿನಾಚರಣೆಯ ಅಂಗವಾಗಿ ಅಂದು ಬೆಳಗ್ಗೆ 11ಕ್ಕೆ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿ ಪ್ರಮಾಣ ವಚನ ಸ್ವೀಕರಿಸ ಬೇಕು. ಬಾಲ ಕಾರ್ಮಿಕರನ್ನು ಮನೆಗಳಲ್ಲಿ ಅಥವಾ ಅವರ ಸಂಸ್ಥೆಗಳಲ್ಲಿ ನೇಮಿಸಿಕೊಂಡಿಲ್ಲ ಎಂಬ ಘೋಷಣೆಯನ್ನು ಪಡೆದುಕೊಳ್ಳ ಬೇಕೆಂದರು.
ಕಾರ್ಮಿಕ ಅಧಿಕಾರಿ ಸಿ.ಎನ್.ಯಶೋಧರ ಮಾತನಾಡಿ, ಅಂದು ಬೆಳಗ್ಗೆ 8.30ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಸಂಪಿಗೆ ಸಿದ್ದೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಜಾಗೃತಿ ಜಾಥಾ ಉದ್ಘಾಟನೆಯಾಗಲಿದೆ. ತರಾಸು ರಂಗಮಂದಿರದಲ್ಲಿ ವೇದಿಕೆ ಕಾರ‌್ಯಕ್ರಮ ನಡೆಯಲಿದೆ.
ಶಾಲಾ ಕಾಲೇಜುಗಳಲ್ಲಿ ಚಿತ್ರಕಲೆ,ಪ್ರಬಂಧ ಮತ್ತಿತರ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಪ್ರಭಾಕರ್,ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ಪಿ.ಸತೀಶ್ ಕುಮಾರ್,ಡಿಡಿಪಿಐ ರವಿಶಂಕರ್ ರೆಡ್ಡಿ,ಪಪೂ ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ರಾಜು,ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್,ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರೇಖಾ,ಕಾರ್ಮಿಕ ಇಲಾಖೆ ಕಾರ್ಮಿಕ ನಿರೀಕ್ಷಕ ಡಿ.ರಾಜಣ್ಣ,ಟಿ.ಕುಸುಮ,ಅಲ್ಲಾಭಕ್ಷಿ,ಗಿರಿತಿಮ್ಮಕ್ಕ ಮತ್ತಿತರರು ಇದ್ದರು.