ಸೋಮವಾರಪೇಟೆ: ರೈತರ ಕೃಷಿ ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ಅರಣ್ಯ ಇಲಾಖೆಗೆ ಸೇರ್ಪಡೆಗೊಳಿಸುವುದಕ್ಕೆ ಸರ್ಕಾರ ಸೆಕ್ಷನ್-4 ಸರ್ವೇಗೆ ಮುಂದಾಗಿರುವುದನ್ನು ಖಂಡಿಸಿ ಆ.12ರಂದು ಸೋಮವಾರಪೇಟೆ ತಾಲೂಕು ಬಂದ್ ನಡೆಸಲಾಗುವುದು ಎಂದು ರೈತ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಕೆ.ಬಿ.ಸುರೇಶ್ ಹೇಳಿದರು.
ಆ.11ರಂದು ನಡೆಸಬೇಕಿದ್ದ ತಾಲೂಕು ಬಂದ್ ಅನ್ನು ಆ.12ಕ್ಕೆ ಮುಂದೂಡಲಾಗಿದ್ದು, ವರ್ತಕರು, ಸಾರ್ವಜನಿಕರು ಸಹಕಾರ ನೀಡಬೇಕು. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್‌ಗೆ ಕರೆ ನೀಡಲಾಗಿದೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರೈತರು ಕೃಷಿ ಭೂಮಿಯನ್ನು ಕಳೆದುಕೊಂಡು ಬದುಕು ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಕೊಡಗು ಜಿಲ್ಲೆಯಲ್ಲಿ 25 ಸಾವಿರ ಎಕರೆಯಷ್ಟು ಭೂಮಿಯನ್ನು ಸಿ ಆ್ಯಂಡ್ ಡಿ ಹೆಸರಿನಲ್ಲಿ ರೈತರು ಕಳೆದುಕೊಳ್ಳಬೇಕಾಗಿದ್ದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ದಶಕಗಳ ಹಿಂದೆಯೇ ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡಿಕೊಂಡು ಬಂದಿದ್ದಾರೆ. ಅನೇಕ ವರ್ಷಗಳಿಂದ ಕಂದಾಯ ಇಲಾಖೆಗೆ ನಮೂನೆ 50,53, 57 ಅರ್ಜಿ ಸಲ್ಲಿಸಿಕೊಂಡು ಹಕ್ಕುಪತ್ರಕ್ಕಾಗಿ ಕಾಯುತ್ತಿದ್ದಾರೆ. ಇದ್ದಕ್ಕಿದ್ದಂತೆ ಕೃಷಿ ಭೂಮಿಯನ್ನೇ ಸಿ ಆ್ಯಂಡ್ ಡಿ ಭೂಮಿಯೆಂದು ಸರ್ವೇಗೆ ಮುಂದಾಗಿರುವುದು ಖಂಡನೀಯ ಎಂದರು.
ಸೋಮವಾರಪೇಟೆ ತಾಲೂಕಿನ ಶಾಂತಳ್ಳಿ ಹೋಬಳಿ ವ್ಯಾಪ್ತಿಯಲ್ಲಿನ ಬಹುತೇಕ ರೈತರು ಸಿ ಆ್ಯಂಡ್ ಡಿ ಭೂಮಿಯಲ್ಲೇ ಕೃಷಿ ಮಾಡುತ್ತಿದ್ದಾರೆ. ಮನೆ ನಿರ್ಮಿಸಿಕೊಂಡಿದ್ದಾರೆ. ಭತ್ತ, ಕಾಫಿ, ಏಲಕ್ಕಿ, ಬಾಳೆ, ತರಕಾರಿ ಬೆಳೆಯುತ್ತಿದ್ದಾರೆ. ಈ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ಎಂದು ಘೋಷಣೆ ಮಾಡಿದರೆ ರೈತರು ಆತ್ಮಹತ್ಯೆ ಮಾಡಿಕೊಳ್ಳಬೇಕಾಗುತ್ತದೆ. ಹಿಂದೆ ಬೆಳಗಾವಿ ಅಧಿವೇಶನದಲ್ಲಿ ಸಿ ಆ್ಯಂಡ್ ಡಿ ವಿಷಯ ಚರ್ಚೆಯಾಗಿದ್ದು, ಉನ್ನತ ಮಟ್ಟದ ಸಮಿತಿ ರಚಿಸಿ, ಸಮಸ್ಯೆ ಬಗೆಹರಿಸಲಾಗುವುದು ಅರಣ್ಯ, ಕಂದಾಯ ಸಚಿವರು ಭರವಸೆ ನೀಡಿದ್ದರು. ಈವರೆಗೂ ಸಮಸ್ಯೆ ಬಗೆಹರಿಸಿಲ್ಲ. ಈ ಕಾರಣದಿಂದ ಹೋರಾಟ ಪ್ರಾರಂಭಿಸಲಾಗುವುದು. ತಾಲೂಕು ಬಂದ್ ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಅಹೋರಾತ್ರಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಸಮಿತಿ ಸಂಚಾಲಕ ಬಿ.ಜೆ.ದೀಪಕ್ ಮಾತನಾಡಿ. 1974ರಲ್ಲಿ ಸರ್ಕಾರದ ಸುತ್ತೋಲೆಯಂತೆ ಸಿ ಆ್ಯಂಡ್ ಡಿ ಭೂಮಿ ಗುರುತು ಮಾಡಲಾಯಿತು. ಆದರೆ, ಕಂದಾಯ ಅಧಿಕಾರಿಗಳು ಜಾಗದ ಸರ್ವೇ ಮಾಡದೆ ಕಚೇರಿಯಲ್ಲಿ ಕುಳಿತುಕೊಂಡೆ ಕೊಡಗು ಜಿಲ್ಲೆಯಲ್ಲಿ ಸಾವಿರಾರು ಎಕರೆ ಜಾಗವನ್ನು ಸಿ ಆ್ಯಂಡ್ ಡಿ ಭೂಮಿ ಎಂದು ಗುರುತಿಸಿ ಸರ್ಕಾರಕ್ಕೆ ಲಿಖಿತ ವರದಿ ಕೊಟ್ಟರು. ಸರ್ಕಾರ ಈ ಅವೈಜ್ಞಾನಿಕ ವರದಿಯನ್ನೇ ಹೈಕೋರ್ಟ್ ಮತ್ತು ಸುಪ್ರಿಂಕೋರ್ಟ್‌ಗೆ ಸಲ್ಲಿಸಿರುವುದರಿಂದ ರೈತರು ಭೂಮಿ ಕಳೆದುಕೊಳ್ಳುವ ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದರು.
ಸರ್ಕಾರ ಸಮಸ್ಯೆ ಬಗೆಹರಿಸಲು ಕೂಡಲೇ ಉನ್ನತ ಮಟ್ಟದ ಸಮಿತಿ ರಚಿಸಬೇಕು. ಸರ್ವೇ, ಕಂದಾಯ, ಅರಣ್ಯ ಇಲಾಖೆಗಳಿಂದ ಜಂಟಿ ಸರ್ವೇ ನಡೆಸಿ ಸಿ ಆ್ಯಂಡ್ ಡಿ ಭೂಮಿ ಗುರುತು ಮಾಡಬೇಕು. ಯಾವುದೇ ಸರ್ಕಾರಗಳು ಸಮಸ್ಯೆಯನ್ನು ಬಗೆಹರಿಸಿಲ್ಲ ಎಂದು ದೂರಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಕೆ.ಎಂ.ದಿನೇಶ್, ಇಂದಿರಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ.ನಾಗರಾಜ್, ಕೂತಿ ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಜಯರಾಮ್ ಇದ್ದರು.