ಗ್ರಾಮ ಪಂಚಾಯಿತಿಗಳಿಗೆ ಸಿಇಒ ಕೆ.ಎಂ.ಗಾಯಿತ್ರಿ ಭೇಟಿ

25 charan 3
ಕೊಳ್ಳೇಗಾಲ ತಾಪಂ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.ಧರಣೇಶ್, ಪ್ರಭುಸ್ವಾಮಿ, ಮಹೇಶ್ ಇದ್ದರು.
Published on

ಚಾಮರಾಜನಗರ: ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ.ಗಾಯಿತ್ರಿ ಬುಧವಾರ ಕೊಳ್ಳೇಗಾಲ ತಾಲೂಕು ಪಂಚಾಯಿತಿ ಕಚೇರಿ ಹಾಗೂ ಇತರ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಕೊಳ್ಳೇಗಾಲ ತಾಪಂ ಕಚೇರಿಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಅಧಿಕಾರಿ, ಸಿಬ್ಬಂದಿಯ ಕಾರ್ಯವೈಖರಿ ವೀಕ್ಷಿಸಿದರು. ಬಳಿಕ ಕೊಳ್ಳೇಗಾಲ ತಾಪಂ ಸಭಾಂಗಣದಲ್ಲಿ ತಾಲೂಕಿಗೆ ಸಂಬಂಧಿಸಿದಂತೆ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಗಳ ಪ್ರಗತಿ ಪರಿಶೀಲಿಸಿದರು.


ನರೇಗಾದಡಿ ಗುರಿಗೆ ಅನುಗುಣವಾಗಿ ಹೆಚ್ಚಿನ ಮಾನವ ದಿನಗಳ ಸೃಜನೆ ಮಾಡಿ ಪ್ರಗತಿ ಸಾಧಿಸಬೇಕು. ನರೇಗಾಯಡಿ ಕೆಲಸ ನಿರ್ವಹಿಸಿದ ಕಾರ್ಮಿಕರಿಗೆ ಶೀಘ್ರವೇ ಹಣ ಪಾವತಿಸಬೇಕು ಎಂದು ಜಿಪಂ ಸಿಇಒ ಸೂಚಿಸಿದರು. ಸಮಗ್ರ ಶಾಲಾ ಅಭಿವೃದ್ಧಿ ಹಾಗೂ ಕೆರೆ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚು ಆದ್ಯತೆ ನೀಡಬೇಕು. ಅಮೃತ ಸರೋವರ 2ನೇ ಹಂತದ ಯೋಜನೆಯನ್ನು ಡಿಸೆಂಬರ್ ಒಳಗೆ ಪೂರ್ಣಗೊಳಿಸುವಂತೆ ತಿಳಿಸಿದರು.


ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ವೈಯಕ್ತಿಕ ಶೌಚ ಗೃಹಗಳನ್ನು ನಿರ್ಮಾಣ ಮಾಡಿಕೊಡಬೇಕು. ಮನೆ ಮನೆಗೆ ಕಸದ ಬುಟ್ಟಿಗಳನ್ನು ಖರೀದಿ ಮಾಡುವ ಪ್ರಕ್ರಿಯೆಯನ್ನು ಇನ್ನೂ 15 ದಿನಗಳೊಳಗೆ ಪೂರ್ಣಗೊಳಿಸಬೇಕು. ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ ಪ್ರಗತಿಯಲ್ಲಿರುವ ಘನತ್ಯಾಜ್ಯ ವಿಲೇವಾರಿ ಘಟಕ ಕೆಲಸ ಶೀಘ್ರ ಮುಗಿಸಬೇಕು. ಎಲ್ಲಿ ಕಾಮಗಾರಿ ಇನ್ನೂ ಆರಂಭವಾಗಿಲ್ಲವೋ ಅಂತಹ ಕಡೆ ಪ್ರಾರಂಭಕ್ಕೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದರು.


ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಂಥಾಲಯಗಳ ಡಿಜಿಟಲೀಕರಣ ಕಾರ್ಯವನ್ನು ಪೂರ್ಣಗೊಳಿಸಬೇಕು. ಗ್ರಂಥಾಲಯ ಸೇವೆ ಸಮರ್ಪಕವಾಗಿ ಲಭ್ಯವಾಗಬೇಕೆಂದು ಸೂಚಿಸಿದರು. ಬಳಿಕ ಕೊಳ್ಳೇಗಾಲದಲ್ಲಿ ನಿರ್ಮಾಣವಾಗುತ್ತಿರುವ ಕುಡಿಯುವ ನೀರು ಪರೀಕ್ಷಾ ಪ್ರಯೋಗಾಲಯ ಕಟ್ಟಡದ ಕಾಮಗಾರಿ ವೀಕ್ಷಿಸಿದರು. ಯಳಂದೂರು ತಾಲೂಕಿನ ಅಗರ ಗ್ರಾಮ ಪಂಚಾಯಿತಿ ಕಚೇರಿ ಸೇರಿದಂತೆ ಇತರ ಭಾಗಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.


ಜಿಪಂ ಸಹಾಯಕ ಕಾರ್ಯದರ್ಶಿ ಧರಣೇಶ್, ಮುಖ್ಯ ಯೋಜನಾಧಿಕಾರಿ ಪ್ರಭುಸ್ವಾಮಿ, ತಾಪಂ ಇಒ ಮಹೇಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net