ಆದಿವಾಸಿಗಳ ಸಮಸ್ಯೆಗೆ ಸ್ಪಂದಿಸಲು ೧೫ದಿನ ಗಡುವು

R.K.CHANDRA
Published on

ಮಡಿಕೇರಿ: ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆದಿವಾಸಿ ಸಮುದಾಯಗಳ ಸಮಸ್ಯೆಗಳಿಗೆ ಮುಂದಿನ ೧೫ ದಿನಗಳೊಳಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ನೂರಾರು ಆದಿವಾಸಿಗಳು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಿದ್ದಾರೆ ಎಂದು ಆದಿವಾಸಿ ಮುಖಂಡ ಆರ್.ಕೆ.ಚಂದ್ರ ಎಚ್ಚರಿಕೆ ನೀಡಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕೊಡಗು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಜೇನುಕುರುಬ, ಬೆಟ್ಟಕುರುಬ, ಸೋಲಿಗ, ಯರವ, ಮಲೆಕುಡಿಯ ಸೇರಿದಂತೆ ಆದಿವಾಸಿ ಸಮುದಾಯಕ್ಕೆ ಸೇರಿದ ಜನರು ತಲೆತಲಾಂತರಗಳಿಂದ ಸಂಕಷ್ಟದ ಬದುಕು ಸಾಗಿಸುತ್ತಿದ್ದಾರೆ. ಇವರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಬೇಕೆಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಲಾಗಿದೆ, ಮುಂದಿನ ೧೫ ದಿನಗಳೊಳಗೆ ಸೂಕ್ತ ಸ್ಪಂದನೆ ದೊರೆಯದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಬಂದು ೭೫ ವರ್ಷಗಳೇ ಕಳೆದಿದ್ದರೂ ಕೊಡಗು ಜಿಲ್ಲೆಯ ಮೂಲ ನಿವಾಸಿಗಳಾದ ಆದಿವಾಸಿಗಳು ಮೂಲಭೂತ ಸೌಲಭ್ಯಗಳ ಕೊರತೆಯನ್ನು ಎದುರಿಸುತ್ತಿದ್ದಾರೆ. ಇಂದಿಗೂ ಸ್ವಂತ ಸೂರಿಲ್ಲದೆ, ಟಾರ್ಪಲ್ ಶೀಟ್ ನಂತಹ ಗುಡಿಸಲುಗಳಲ್ಲಿ ವಾಸಿಸುತ್ತಿದ್ದು, ಶುದ್ಧ ಕುಡಿಯುವ ನೀರು ಕೂಡ ಲಭಿಸದ ದುಸ್ಥಿತಿ ಇದೆ. ಆದಿವಾಸಿಗಳು ದುರ್ಬಲ ಸಮುದಾಯಕ್ಕೆ ಸೇರಿದವರಾಗಿದ್ದು, ಸ್ವಾವಲಂಬಿಗಳಾಗಿ ಬದುಕುವ ಹಕ್ಕನ್ನು ಇಂದಿನ ಸಮಾಜ ಕಸಿದುಕೊಳ್ಳುತ್ತಿದೆ. ತೋಟಗಳಲ್ಲಿ ಮತ್ತು ಉದ್ದಿಮೆಗಳಲ್ಲಿ ಕೂಲಿ ಕಾರ್ಮಿಕರಾಗಿ ಜೀವನ ಸಾಗಿಸುತ್ತಿರುವ ಆದಿವಾಸಿಗಳು ಎಲ್ಲಾ ಕ್ಷೇತ್ರಗಳಲ್ಲೂ ಹಿನ್ನಡೆಯನ್ನು ಅನುಭವಿಸುತ್ತಿದ್ದಾರೆ. ಆದಿವಾಸಿಗಳ ಕುಟುಂಬಗಳ ಮಕ್ಕಳು ವಿದ್ಯಾವಂತರಾಗಿದ್ದರೂ ಉದ್ಯೋಗ ಲಭಿಸದೆ ಕೂಲಿ ಕೆಲಸವನ್ನೇ ಅವಲಂಭಿಸುವಂತಾಗಿದೆ ಎಂದು ಆರ್.ಕೆ.ಚಂದ್ರ ಆರೋಪಿಸಿದ್ದಾರೆ.

ಜಿಲ್ಲೆಯಲ್ಲಿರುವ ಹಾಡಿಗಳಲ್ಲಿ ಹೀನಾಯ ಬದುಕು ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಇಂದಿಗೂ ಕುಡಿಯುವ ನೀರು, ವಿದ್ಯುತ್ ಮತ್ತು ರಸ್ತೆ ಸೌಲಭ್ಯಗಳಿಲ್ಲ. ಇತ್ತೀಚಿನ ವರ್ಷಗಳಲ್ಲಿ ಅಧಿಕಾರಕ್ಕೆ ಬರುವ ಸರ್ಕಾರಗಳೆಲ್ಲವೂ ಆದಿವಾಸಿಗಳ ಅಭಿವೃದ್ಧಿಗಾಗಿ ಕೋಟಿಗಟ್ಟಲೆ ಹಣವನ್ನು ಮೀಸಲಿಟ್ಟಿರುವುದಾಗಿ ಘೋಷಿಸಿಕೊಳ್ಳುತ್ತಿವೆ. ಆದರೆ, ಇಲ್ಲಿಯವರೆಗೆ ಈ ಹಣದಿಂದ ಆದಿವಾಸಿ ಸಮುದಾಯದ ಅಭಿವೃದ್ಧಿಯಾಗಿಲ್ಲ ಎಂದು ದೂರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net