

ಮಾನ್ವಿ: ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪಟ್ಟಣದ ಶಾಸಕರ ಭವನದ ಆವರಣದಲ್ಲಿ ದಲಿತ ಸಂಘಟನೆಗಳ ಸಂಯುಕ್ತ ವೇದಿಕೆ ತಾಲೂಕು ಘಟಕದಿಂದ ಶುಕ್ರವಾರ ಧರಣಿ ಹಮ್ಮಿಕೊಳ್ಳಲಾಗಿತ್ತು.
ತಾಲೂಕು ಪಂಚಾಯಿತಿಯ ವಾಣಿಜ್ಯ ಮಳಿಗೆಗಳನ್ನು ಕಳೆದ 20 ವರ್ಷಗಳಿಂದ ಮರು ಹರಾಜು ನಡೆಸದೆ ಇರುವುದರಿಂದ ಸರ್ಕಾರಕ್ಕೆ ನಷ್ಟವಾಗಿದ್ದು, ಕೂಡಲೇ ಹರಾಜು ಪ್ರಕ್ರಿಯೆ ನಡೆಸಬೇಕು. ಪಟ್ಟಣದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು, ದ್ರವತ್ಯಾಜ್ಯ ನಿರ್ವಹಣೆ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರಕ್ಕೆ ನೀಡುವ ಅದೇಶ ಉಲ್ಲಂಘಿಸಿ ಖಾಸಗಿ ವ್ಯಕ್ತಿಗಳಿಗೆ ನೀಡಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಎಸ್‌ಸಿಪಿ ಹಾಗೂ ಟಿಎಸ್‌ಪಿ ಪ್ರಗತಿ ಪರಿಶೀಲನಾ ಸಭೆಯನ್ನು ಪ್ರತಿ ತಿಂಗಳು ನಡೆಸದ ಸಮಾಜಕಲ್ಯಾಣ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ 15ನೇ ಹಣಕಾಸು ಯೋಜನೆಯಡಿ ನಡೆದಿರುವ ಅವ್ಯವಹಾರದ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕು.
ನಕ್ಕುಂದಿಯಿಂದ ಬ್ಯಾಗವಾಟ ಗ್ರಾಮಕ್ಕೆ ಸಂಪರ್ಕಿಸುವ ರಸ್ತೆ ಮಧ್ಯದ ಸಿ.ಡಿ ಕಾಮಗಾರಿ ಕಳಪೆಯಾಗಿದ್ದು ತನಿಖೆ ನಡೆಸಬೇಕು. ತಾಲೂಕಿನ ಅಮರಾವತಿ ಗ್ರಾಮದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ ಮಾಡಬೇಕು. ಸೀಕಲ್ ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಅಗ್ರಹಿಸಿದರು.