ಗ್ಯಾರಂಟಿಗೆ 167.59 ಕೋಟಿ ವ್ಯಯ

guarantee meeting
ಗ್ಯಾರಂಟಿ ಅನುಷ್ಠಾನ ಯೋಜನೆ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
Published on

ವಿಜಯವಾಣಿ ಸುದ್ದಿಜಾಲ ಬೈಂದೂರು

ಪಂಚ ಗ್ಯಾರಂಟಿ ಯೋಜನೆಯಿಂದ ಬೈಂದೂರು ತಾಲೂಕಿಗೆ ಇದುವರೆಗೆ 167.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಬೈಂದೂರು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಮೋಹನ್ ಪೂಜಾರಿ ಹೇಳಿದರು.

ಬೈಂದೂರು ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಗ್ಯಾರಂಟಿ ಅನುಷ್ಠಾನ ಯೋಜನೆ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಬೈಂದೂರಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಕಾಮಗಾರಿ ಪೂರ್ಣಗೊಳಿಸಲು ಇನ್ನೂ 75 ಲಕ್ಷ ರೂ. ಅನುದಾನ ಅಗತ್ಯವಿದ್ದು, ಬೈಂದೂರಿನಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ನಿರ್ಮಾಣಗೊಂಡರೆ ಈ ಭಾಗದಲ್ಲಿ ಸಮರ್ಪಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಅನುಕೂಲವಾಗುತ್ತದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ಮಾಹಿತಿ ನೀಡಿದರು.

ಗೃಹಲಕ್ಷ್ಮೀ ಯೋಜನೆಯಿಂದ 88.12 ಕೋಟಿ ಜಮಾ ಆಗಿದೆ. ತಾಂತ್ರಿಕ ಕಾರಣದಿಂದ 479 ಫಲಾನುಭವಿಗಳಿಗೆ ಬಾಕಿಯಿದೆ. ಗೃಹಜ್ಯೋತಿ ಯೋಜನೆಯಿಂದ ಬೈಂದೂರು ಮೆಸ್ಕಾಂ ಉಪಕೇಂದ್ರ ವ್ಯಾಪ್ತಿಯ 27,748 ಕುಟುಂಬಗಳಿಗೆ 29.41 ಕೋಟಿ ರೂ., ತಲ್ಲೂರು ಮೆಸ್ಕಾಂ ಉಪ ಕೇಂದ್ರ ವ್ಯಾಪ್ತಿಯ 1935 ಕುಟುಂಬಗಳಿಗೆ 1.87 ಕೋಟಿ ರೂ. ಸೇರಿದಂತೆ ಸುಮಾರು 31.28 ಕೋಟಿ ರೂ. ವೆಚ್ಚವಾಗಿದೆ. ಅನ್ನಭಾಗ್ಯ ಯೋಜನೆಯಡಿ 25,182 ಪಡಿತರ ಚೀಟಿಗಳಿಗೆ 1,89,26,610 ರೂ. ನೇರವಾಗಿ ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಯುವ ನಿಧಿ ಯೋಜನೆಯಡಿ 340 ಫಲಾನುಭವಿಗಳಿಗೆ 59.34ಲಕ್ಷ ರೂ. ಜಮಾ ಆಗಿದೆ. ಶಕ್ತಿ ಯೋಜನೆಯಡಿ ಇದುವರೆಗೆ 1.30 ಕೋಟಿ ಮಹಿಳೆಯರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸಿದ್ದು 45.69 ಕೋಟಿ ರೂ. ರಿಯಾಯಿತಿ ಪಡೆದಿದ್ದಾರೆ ಎಂದು ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.

ತಾಪಂ ಇಒ ಡಾ.ರವಿಕುಮಾರ್ ಹುಕ್ಕೇರಿ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರಾದ ಪ್ರಭಾಕರ ನಾಯ್ಕ, ಮಾಲತಿ ಶಿವಾನಂದ, ರಾಮ ಪೂಜಾರಿ, ಅನೀಶ್ ಪೂಜಾರಿ, ರಾಘವೇಂದ್ರ ಬಿಲ್ಲವ, ದೇವದಾಸ್ ವಿ.ಜೆ., ಬಾಬು ದೇವಾಡಿಗ, ರಾಮಚಂದ್ರ ಖಾರ್ವಿ, ಮುಕ್ರಿ ಮೊಹಮ್ಮದ್ ಅಲ್ತಾಫ್ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net