17ರಂದು ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ

17ರಂದು ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟ
Published on

ಹಾಸನ: ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆ.17ರಂದು ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಹಾಸನ ಶಾಖೆಯ ಜಿಲ್ಲಾಧ್ಯಕ್ಷ ಈ. ಕೃಷ್ಣಗೌಡ ತಿಳಿಸಿದರು.
ಆಗಸ್ಟ್ 17ರ ಸಂಜೆ 4.30ಕ್ಕೆ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಹಲವು ಸಚಿವರು, ಗಣ್ಯರು ಭಾಗವಹಿಸಲಿದ್ದಾರೆ. ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಸುಮಾರು ಹತ್ತು ಸಾವಿರಕ್ಕೂ ಹೆಚ್ಚಿನ ನೌಕರ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಾಸನ ಜಿಲ್ಲೆಯಿಂದ ಒಟ್ಟು 430 ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕ್ರೀಡಾಕೂಟಗಳಲ್ಲಿ ಭಾಗವಹಿಸುವ ಎಲ್ಲಾ ಕ್ರೀಡಾಪಟುಗಳಿಗೆ ಉತ್ತಮ ಗುಣಮಟ್ಟದ ಟ್ರ್ಯಾಕ್ ಪ್ಯಾಂಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ಎಲ್ಲಾ ಕ್ರೀಡಾಪಟುಗಳಿಗೂ ಮೂರು ದಿನಗಳ ಕಾಲ ಶುಚಿ-ರುಚಿಯಾದ ಊಟೋಪಚಾರ ಕಲ್ಪಿಸಲಾಗುವುದು. ರಾಜ್ಯ ಮಟ್ಟದ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ವಿಶೇಷ ನೆನಪಿನ ಕಾಣಿಕೆ ನೀಡಿ ಗೌರವಿಸಲಾಗುವುದು ಹಾಗೂ ಅಖಿಲ ಭಾರತ ನಾಗರಿಕ ಸೇವಾ ಪಂದ್ಯಾವಳಿಗಳಲ್ಲಿ ಭಾಗವಹಿಸಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದ ಕ್ರೀಡಾಪಟುಗಳನ್ನು ಇದೇ ಸಂದರ್ಭದಲ್ಲಿ ಅಭಿನಂದಿಸಲಾಗುವುದು ಎಂದರು.
ಅದೇ ದಿನ ಸಂಜೆ 6 ಗಂಟೆಗೆ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಆ.19 ರಂದು ಸಂಜೆ 6 ಗಂಟೆಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಾನಪದ ಕಲಾ ತಂಡಗಳಿಂದ ಸಾಂಸ್ಕೃತಿಕ ಸಂಗೀತ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಮಟ್ಟದಿಂದ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿ ಕೇಂದ್ರ ಸಂಘದ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಜಿಲ್ಲೆಯ ಎಲ್ಲಾ ಕ್ರೀಡಾಪಟುಗಳು ಕ್ರೀಡಾಕೂಟದಲ್ಲಿ ಭಾಗವಹಿಸಿ ಯಶಸ್ವಿಯಾಗುವಂತೆ ಶುಭ ಆರೈಸಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದ ರಾಜ್ಯ ಜಂಟಿ ಕಾರ್ಯದರ್ಶಿ ಸಿ.ಕೆ. ರಘು, ಉಪಾಧ್ಯಕ್ಷ ಸಣ್ಣೇಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಡಾ. ಲಕ್ಷ್ಮೀಕಾಂತ್, ಉಪಾಧ್ಯಕ್ಷ ಜಾವಗಲ್ ನಾಗರಾಜು, ಎಂಸಿಇ ಕಾಲೇಜು ನಿವೃತ್ತ ಪ್ರಾಧ್ಯಾಪಕ ಯೋಗೇಂದ್ರ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net