

ಲಕ್ಷ್ಮೇಶ್ವರ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ 15ರಂದು ಆಚರಿಸುವ ನಿಟ್ಟಿನಲ್ಲಿ ತಹಸೀಲ್ದಾರ್ ಅಧ್ಯಕ್ಷತೆಯಲ್ಲಿ ಸೋಮವಾರ ತಾಪಂ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಜರುಗಿತು.
ತಹಸೀಲ್ದಾರ್ ವಾಸುದೇವ ಸ್ವಾಮಿ ಮಾತನಾಡಿ, ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳ ಸಭೆಯಲ್ಲಿ ನಿರ್ಧರಿಸಿದಂತೆ 15ರಂದು ಬೆಳಿಗ್ಗೆ 9ಗಂಟೆಯಿಂದ ಮಾನಮ ಸರಪಳಿ ನಿರ್ಮಿಸಿ, ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲು ನಿರ್ದೇಶನ ನೀಡಿದ್ದಾರೆ. ತಾಲೂಕಿನ ಬಾಲೆಹೊಸೂರು ಸರಹದ್ದಿನಿಂದ ಪ್ರಾರಂಭವಾಗಿ ಸೂರಣಗಿ, ನೆಲೋಗಲ್ ಗ್ರಾಮದ ಸರಹದ್ದಿನವರೆಗೆ ಸುಮಾರು 18 ಕಿ.ಮೀ ಮಾನವ ಸರಪಳಿ ನಿರ್ಮಾಣ ಮಾಡಬೇಕಾಗಿದೆ. ಸದರಿ ಕಾರ್ಯಕ್ರಮಕ್ಕೆ ತಾಲೂಕಿನ ಎಲ್ಲ ಇಲಾಖೆ, ತಾಲೂಕು, ಹೋಬಳಿ, ಗ್ರಾಮ ಮಟ್ಟದ ಅಧಿಕಾರಿ, ಸಿಬ್ಬಂದಿ, ಅರೆ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳು ಮತ್ತು ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢಶಾಲೆ ಕಾಲೇಜುಗಳ ಪ್ರಾಚಾರ್ಯರು, ಉಪನ್ಯಾಸಕರು, ಶಿಕ್ಷಕರು, ವಿದ್ಯಾರ್ಥಿಗಳು ಹಾಗ ಬೋಧಕೇತರ ಸಿಬ್ಬಂದಿ, ಕನ್ನಡಪರ ಸಂಘಟನೆಗಳು, ದಲಿತಪರ ಸಂಘಟನೆಗಳು, ಸ್ತ್ರೀಶಕ್ತಿ ಮಹಿಳಾ ಸ್ವ ಸಹಾಯ ಸಂಘಗಳು ಹಾಗೂ ಸಾರ್ವಜನಿಕರು ಭಾಗವಹಿಸಬೇಕು ಎಂದು ತಿಳಿಸಿದರು.
ಮಹಿಳಾ ಮಕ್ಕಳ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಅಂಗನವಾಡಿ ಶಿಕ್ಷಕಿಯರು ಹಾಗೂ ಸಿಬ್ಬಂದಿ, ಮಹಿಳಾ ಸ್ವ ಸಹಾಯ ಸಂಘಗಳ ಅಧಿಕಾರಿಗಳು ಕಡ್ಡಾಯವಾಗಿ ಹಾಜರಿರುವಂತೆ ಕ್ರಮವಹಿಸಲು ಸೂಚಿಸಿದರು.
ತಾಲೂಕಿನ ಬಾಲೆಹೊಸೂರ ಸರಹದ್ದಿನಿಂದ ನೆಲೋಗಲ್ ಗ್ರಾಮದ ಸರಹದ್ದಿನ ವರೆಗೆ ಅಲ್ಲಲ್ಲಿ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸುವುದು. ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಪ್ರಥಮ ಚಿಕಿತ್ಸಾ ಪೆಟ್ಟಿಗೆ, ಅವಶ್ಯಕ ಔಷಧಗಳೊಂದಿಗೆ ಹಾಜರಿರುವಂತೆ ಸೂಚಿಸಲಾಯಿತು. ತಾಪಂ ಇಒ ಕೃಷ್ಣಪ್ಪ ಧರ್ಮರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋತದಾರ, ಪಿಎಸ್‌ಐ ಈರಪ್ಪ ರಿತ್ತಿ, ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.