ಗೋಣಿಕೊಪ್ಪ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವಾದ್ಯಾಲಯ ಶಿವಮೊಗ್ಗ ಒಂಬತ್ತನೇ ಅಂತರ ಮಹಾವಿದ್ಯಾಲಯಗಳ ಯುವಜನೋತ್ಸವ 2023-24 ಯುವ ಝೇಂಕಾರ ಕಾರ್ಯಕ್ರಮವನ್ನು ಜ.18, 19 ಮತ್ತು 20ರಂದು ಮೂರು ದಿನಗಳವರೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದೆ.
18ರಂದು ಬೆಳಗ್ಗೆ 8.30 ಗಂಟೆಗೆ ಸಾಂಸ್ಕೃತಿಕ ಮೆರವಣಿಗೆಗೆ ಪೊನ್ನಂಪೇಟೆ ಶ್ರೀ ರಾಮಕೃಷ್ಣ ಶಾರದಾ ಆಶ್ರಮದ ಅಧ್ಯಕ್ಷರಾದ ಶ್ರೀ ಪರಹಿತಾನಂದ ಸ್ವಾಮೀಜಿ ಹಾಗೂ ಚುಟುಕು ಕಾವ್ಯ ಸಾಹಿತಿ ಎಚ್.ದುಂಡಿರಾಜ್ ಚಾಲನೆ ನೀಡಲಿದ್ದಾರೆ. ನಂತರ ಬೆಳಗ್ಗೆ 10 ಗಂಟೆಗೆ ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜಿ.ಎಂ. ದೇವಗಿರಿ ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಲಿದೆ.
ಕಾರ್ಯಕ್ರಮದಲ್ಲಿ ಶಾಸಕ ಎ.ಎಸ್.ಪೊನ್ನಣ್ಣ, ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಿಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್, ಪೊನ್ನಂಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗಿರಿಜಾ ವೆಂಕಟೇಶ್ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ವಿಶ್ವವಿದ್ಯಾಲಯದ ಗೌರವಾನ್ವಿತ ವ್ಯವಸ್ಥಾಪನ ಮಂಡಳಿ ಸದಸ್ಯರು, ಅಧ್ಯಾಪಕ ವರ್ಗದವರು ಭಾಗವಹಿಸಲಿದ್ದಾರೆ.
ಉದ್ಘಾಟನಾ ಕಾರ್ಯಕ್ರಮದ ನಂತರ ವಿವಿಧ ಸ್ಪರ್ಧೆಗಳು ಮೂರು ದಿನಗಳವರೆಗೆ ನಡೆಯಲಿವೆ. ಜ.20ರಂದು ಮಧ್ಯಾಹ್ನ 12 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದ್ದು ಮುಖ್ಯಮಂತ್ರಿ ಅವರ ಗೌರವ ವೈದ್ಯಕೀಯ ಸಲಹೆಗಾರರಾದ ಡಾ.ಎಚ್. ರವಿಕುಮಾರ್, ಶಿವಮೊಗ್ಗ ವಿವಿ ಕುಲಪತಿ ಡಾ.ಆರ್.ಸಿ.ಜಗದೀಶ್, ವಿದ್ಯಾರ್ಥಿ ಕಲ್ಯಾಣದ ಡೀನ್ ಡಾ.ಎನ್. ಶಿವಶಂಕರ್, ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಡೀನ್ ಡಾ.ಜೆ.ಎಂ. ದೇವಗಿರಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪೊನ್ನಂಪೇಟೆ ಅರಣ್ಯ ಮಹಾವಿದ್ಯಾಲಯದ ಪ್ರಕಟಣೆ ತಿಳಿಸಿದೆ.