18ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ:ಎಂ.ಎ. ಗೋಪಾಲಸ್ವಾಮಿ

18ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ ಆಗಮನ:ಎಂ.ಎ. ಗೋಪಾಲಸ್ವಾಮಿ
Published on

ಹಾಸನ: ಇದೆ ಏಪ್ರಿಲ್ 18ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಲೋಕಸಭಾ ಕ್ಷೇತ್ರದ ಪ್ರಚಾರಕ್ಕೆ ಆಗಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಹೇಳಿದರು.
ಏ.18ರಂದು ಮೊದಲಿಗೆ ಚನ್ನರಾಯಪಟ್ಟಣದಲ್ಲಿ ರೋಡ್ ಶೋ ನಡೆಸಿ ನಂತರ ಹೊಳೆನರಸೀಪುರದಲ್ಲಿ ಸಭೆ ನಡೆಸಲಿದ್ದಾರೆ. ಆನಂತರ ಅರಕಲಗೂಡು, ಸಕಲೇಶಪುರದಲ್ಲಿ ರೋಡ್ ಶೋ ನಡೆಸಿ ಬೇಲೂರಿನಲ್ಲಿ ಸಭೆ ನಡೆಸುವರು. ಈ ಮೂಲಕ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಕೂಡ ಪ್ರಚಾರ ನಡೆಸಲಿದ್ದಾರೆ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹಾಸನದಲ್ಲಿ ವಿಜಯಪತಾಕೆ ಹಾರಿಸಲಿದೆ. ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಮೊದಲ ಗೆಲುವು ಹಾಸನದಿಂದಲೇ ಪ್ರಾರಂಭವಾಗಲಿದೆ. ಇದಕ್ಕೆ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಹಾಗೂ ಮತದಾರರು ಈ ಬಾರಿ ಶ್ರೇಯಸ್ ಪಟೇಲ್ ಗೆಲ್ಲಿಸಲು ಪಣತೊಟ್ಟಿದ್ದಾರೆ ಎಂದರು.
ಜೆಡಿಎಸ್‌ನವರಿಂದ ಕೀಳು ಮಟ್ಟದ ಪ್ರಚಾರ:
2019ರಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಆಗಿದ್ದ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ವೇಳೆ ಸಿದ್ದರಾಮಯ್ಯ ಅವರು ಪ್ರಜ್ವಲ್ ರೇವಣ್ಣ ಪರ ಪ್ರಚಾರ ಮಾಡುತ್ತಿದ್ದಾಗ ಮಾಡಿದ ಭಾಷಣದ ತುಣುಕನ್ನು ಜೆಡಿಎಸ್‌ನವರು ಈಗ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಕೀಳು ಮಟ್ಟದ ಪ್ರಚಾರ ಮಾಡುತ್ತಿದ್ದಾರೆ. ಹಳೆಯ ವಿಡಿಯೋ ಇಟ್ಟುಕೊಂಡು ಈಗ ಜನರಿಗೆ ದಾರಿ ತಪ್ಪಿಸುತ್ತಿದ್ದಾರೆ. ಜೆಡಿಎಸ್ ಸೋಲುವ ಭೀತಿಯಿಂದ ಈ ರೀತಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು
ಸುದ್ದಿಗೋಷ್ಠಿಯಲ್ಲಿ ರಾಜ್ಯಸಭಾ ಮಾಜಿ ಸದಸ್ಯ ಎಚ್.ಕೆ. ಜವರೇಗೌಡ, ಮುಖಂಡರಾದ ಜಾವಗಲ್ ಮಂಜುನಾಥ್ ಇನ್ನಿತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net