

ಶಿವಮೊಗ್ಗ: ಪ್ರತಿ ವಿಧಾನ ಸಭಾಕ್ಷೇತ್ರಕ್ಕೆ 2ರಿಂದ 3 ಕೆಪಿಎಸ್(ಕರ್ನಾಟಕ ಪಬ್ಲಿಕ್ ಸ್ಕೂಲ್)ಗಳನ್ನು ತೆರೆಯಲು ಉದ್ದೇಶಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ಕೆಪಿಎಸ್ ಶಾಲೆಗಳನ್ನು ಆರಂಭಿಸಲು ರಾಜ್ಯಾದ್ಯಂತ ಬೇಡಿಕೆ ಹೆಚ್ಚಾಗಿದೆ. ಪ್ರತಿ ತರಗತಿಯಲ್ಲಿ ನಿಗದಿಪಡಿಸಿದ್ದ ವಿದ್ಯಾರ್ಥಿಗಳ ಸಂಖ್ಯೆಯನ್ನು 30ರಿಂದ 50ಕ್ಕೆ ಹೆಚ್ಚಿಸಲಾಗಿದೆ. ಅಲ್ಲದೆ ಶಾಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ಆರಂಭಿಸಲು ಸೂಚಿಸಲಾಗಿದೆ. ಈ ಸಂಖ್ಯೆ ಮುಂದಿನ 5 ವರ್ಷಗಳಲ್ಲಿ ಗಣನೀಯವಾಗಿ ಹೆಚ್ಚಳವಾಗಲಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ದ್ವಿಭಾಷಾ ಕಲಿಕೆಗೆ ದಾಖಲಾತಿ ನಡೆಯುತ್ತಿದೆ. ವಿದ್ಯಾರ್ಥಿಗಳ ದಾಖಲಾತಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ 25 ಸಾವಿರ ವಿದ್ಯಾರ್ಥಿಗಳಿಗೆ ಜೆಇಇ, ಎನ್‌ಇಇಟಿ, ಐಐಟಿ ಸೇರಿ ಉನ್ನತ ಶಿಕ್ಷಣಕ್ಕೆ ಅನುಕೂಲವಾಗುವಂತೆ ಉಚಿತ ತರಬೇತಿ ನಡೆಸಲಾಗುತ್ತಿದೆ ಎಂದರು.
ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಕೆ.ಪಿ.ಶ್ರೀಪಾಲ್, ಜಿಪಂ ಮಾಜಿ ಸದಸ್ಯೆ ಶ್ವೇತಾ ಬಂಡಿ, ತೇಜಪ್ಪ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.